ಚಾಮರಾಜನಗರ: ಹರದನಹಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸಲು ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಸಂಸದ ಆರ್. ಧ್ರುವನಾರಾಯಣ ಅವರು ತಿಳಿಸಿದರು.
ತಾಲೂಕಿನ ಬಸವಾಪುರ ಗ್ರಾಮದಲ್ಲಿ 15 ಲಕ್ಷ ರು. ವೆಚ್ಚದ ಕುಡಿಯುವ ನೀರು ಯೋಜನೆಯ ಓವರ್ಹೆಡ್ ಟ್ಯಾಂಕ್ ಹಾಗೂ ವಿಶೇಷ ಘಟಕ ಯೋಜನೆಯಡಿ 9 ಲಕ್ಷ ರು. ವೆಚ್ಚದಲ್ಲಿ ಕಾಂಕ್ರಿಟ್ ರಸ್ತೆ ನಿರ್ಮಾಣಕ್ಕೆ ಗುದ್ದಲಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಗ್ರಾಮಗಳನ್ನು ಅಭಿವೃದ್ಧಿ ಪಡಿಸುವ ಮೂಲಕ ಗ್ರಾಮ ಸ್ವರಾಜ್ ಯೋಜನೆಯನ್ನು ಸಕಾರಗೊಳಿಸಲು ಯುಪಿಎ ಸರ್ಕಾರ ಹತ್ತು ಹಲವು ಯೋಜನೆಗಳನ್ನು ನೀಡಿದ್ದು, ಉದ್ಯೋಗ ಖಾತರಿ ಯೋಜನೆಯಡಿ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳನ್ನು ಅಭಿವೃದ್ಧಿ ಪಡಿಸುವ ಜೊತೆಗೆ, ಸ್ವಾವಲಂಬನೆ ದುಡಿಮೆಯನ್ನು ಕೈಗೊಳ್ಳಲು ಅವಕಾಶ ಕಲ್ಪಿಸಿದೆ. ಇದನ್ನು ಸದುಪಯೋಗಪಡಿಸಿಕೊಳ್ಳಿ ಎಂದರು.
ಶಾಸಕ ಸಿ. ಪುಟ್ಟರಂಗಶೆಟ್ಟಿ ಮಾತನಾಡಿ, ಕುಡಿಯುವ ನೀರಿನ ಕೊರತೆ ನೀಗಿಸಲು ಹೆಚ್ಚಿನ ಅನುದಾನ ನೀಡಲಾಗುತ್ತಿದೆ. ಈಗಾಗಲೇ ಬಹುತೇಕ ಗ್ರಾಮಗಳಲ್ಲಿ ಕಿರು ನೀರು ಘಟಕ, ಓವರ್ಹೆಡ್ ಟ್ಯಾಂಕ್ ಸೇರಿದಂತೆ ಅನೇಕ ಕಾಮಗಾರಿ ಕೈಗೆತ್ತಿಕೊಂಡು ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ದೂರ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು. ಜಿಪಂ ಸದಸ್ಯೆ ಕಾವೇರಿ, ತಾಪಂ ಮಾಜಿ ಅಧ್ಯಕ್ಷ ಬಿ.ಕೆ. ರವಿಕುಮಾರ್, ಗ್ರಾಪಂ ಅಧ್ಯಕ್ಷೆ ಮರಮ್ಮ, ಉಪಾಧ್ಯಕ್ಷೆ ಲೀಲಾ, ಸದಸ್ಯರಾದ ಸಿದ್ದರಾಜು, ಮಹದೇವಸ್ವಾಮಿ, ರೇಣುಕಾ, ಮಧುಸೂಧನ್ ಸೇಸರಿದಂತೆ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.