ಇಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ
ಕಪ್ರ ವಾರ್ತೆ,ಚಿಕ್ಕಮಗಳೂರು,ಏ.19
ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ನಾಮಪತ್ರ ಸಲ್ಲಿಸಿರುವವರು ತಮ್ಮ ಉಮೇದುವಾರಿಕೆ ಹಿಂಪಡೆಯಲು ಶನಿವಾರ ಕೊನೆಯ ದಿನ.
ಶುಕ್ರವಾರ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಮೂವರು ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಹಿಂಪಡೆದುಕೊಂಡಿದ್ದಾರೆ.
ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಿಂದ ಉದ್ದಪ್ಪ, ಮೂಡಿಗೆರೆ ವಿಧಾನಸಭಾ ಕ್ಷೇತ್ರದಿಂದ ಬಿ.ಕೆ. ಗೋಪಾಲ್, ಶೃಂಗೇರಿ ವಿಧಾನಸಭಾ ಕ್ಷೇತ್ರದ ಸಿ.ಈ. ಬಸವರಾಜು ಅವರು ಪಕ್ಷೇತರರಾಗಿ ಉಮೇದುವಾರಿಕೆ ಸಲ್ಲಿಸಿದ್ದು, ಶುಕ್ರವಾರ ತಮ್ಮ ಉಮೇದುವಾರಿಕೆಯನ್ನು ವಾಪಸ್ ಪಡೆದಿದ್ದಾರೆ.
ವೇತನ ಸಹಿತ ಅನುಮತಿ: ಜಿಲ್ಲೆಯಲ್ಲಿ ವಿಧಾನಸಭಾ ಕ್ಷೇತ್ರಗಳಿಗೆ ಸಾರ್ವತ್ರಿಕ ಚುನಾವಣೆಯು ಮೇ 5 ರಂದು ನಡೆಯಲಿದ್ದು, ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕಾರ್ಖಾನೆಗಳು, ಕೈಗಾರಿಕಾ ಸಂಸ್ಥೆಗಳು, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳ ಎಲ್ಲಾ ಮಾಲೀಕರು, ನಿಯೋಜಕರು ಕರ್ನಾಟಕ ಔಧ್ಯಮಿಕ ಸಂಸ್ಥೆಗಳ ಕಾಯ್ದೆ ಅನ್ವಯ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಅಂದು ಮತ ಚಲಾಯಿಸಲು ಅನುಕೂಲವಾಗುವಂತೆ ವೇತನ ಸಹಿತ ರಜೆ ನೀಡಬೇಕೆಂದು ಚಿಕ್ಕಮಗಳೂರು ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತೆ ಶ್ರೀವಳ್ಳಿ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪರ್ಯಾಯ ದಾಖಲೆಗೆ ಅವಕಾಶ: ಜಿಲ್ಲೆಯಲ್ಲಿ ಮೇ 5 ರಂದು ಮತದಾನ ನಡೆಯಲಿದ್ದು, ಅಂದು ಈ ಕೆಳಕಂಡ ದಾಖಲೆಗಳನ್ನು ಹಾಜರು ಪಡಿಸಿ ಮತದಾನವನ್ನು ಮಾಡಬಹುದಾಗಿದೆ.
ಮತದಾರರ ಪಟ್ಟಿಯಲ್ಲಿರುವ ಪ್ರತೀ ಮತದಾರರು ತಮ್ಮ ಮತವನ್ನು ಚಲಾಯಿಸಲು ನಿಗದಿತ ಮತಗಟ್ಟೆಗಳಿಗೆ ತೆರಳುವಾಗ ಮತದಾರರ ಪಟ್ಟಿಯಲ್ಲಿ ಭಾವಚಿತ್ರ ಮುದ್ರಿತವಾಗಿದ್ದರೂ ಸಹ ಮತ ಚಲಾಯಿಸಲು ಚುನಾವಣಾ ಗುರುತಿನ ಚೀಟಿ ಇಲ್ಲದಿದ್ದರೆ, ಈ ಕೆಳಗಿನ 23 ದಾಖಲೆಗಳಲ್ಲಿ ಯಾವುದಾದರೂ ಒಂದು ದಾಖಲೆಯನ್ನು ಕಡ್ಡಾಯವಾಗಿ ಮತಗಟ್ಟೆ ಅಧಿಕಾರಿಗಳಿಗೆ ತೋರಿಸಿ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ.
ಪ್ರಾಧಿಕಾರದ ವತಿಯಿಂದ ನೀಡಿದ ಭಾವಚಿತ್ರವಿರುವ ಮತದಾನ ಚೀಟಿ, ಭಾವಚಿತ್ರವಿರುವ ಪಾಸ್ಪೋರ್ಟ್, ವಾಹನ ಚಾಲನಾ ಪರವಾನಗಿ, ಪಾನ್ ಕಾರ್ಡ್, ಸೇವಾ ಗುರುತಿನ ಚೀಟಿಗಳು (ಕೇಂದ್ರ, ರಾಜ್ಯ ಸರ್ಕಾರದಲ್ಲಿ ಅಥವಾ ಅಧೀನ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಇಲಾಖೆಯ ಗುರುತಿನ ಚೀಟಿ), ಬ್ಯಾಂಕ್ ಹಾಗೂ ಅಂಚೆ ಪಾಸ್ ಪುಸ್ತಕಗಳು, ಕಾಲೇಜು ಗುರುತಿನ ಚೀಟಿಗಳು, ನೋಂದಾಯಿತ ಮುಂತಾದ ಆಸ್ತಿ ದಾಖಲೆಗಳು ಹಾಗೂ ಪಡಿತರ ಚೀಟಿ.
ಭಾವಚಿತ್ರವಿರುವ ಎಸ್ಸಿ, ಎಸ್ಟಿ, ಒಬಿಸಿ ಪ್ರಮಾಣ ಪತ್ರಗಳು, ಪಿಂಚಣಿ ಪಾವತಿ ಆದೇಶಗಳು ಅಥವಾ ಮಾಜಿ ಯೋಧರ ಪಿಂಚಣಿ ಪುಸ್ತಕ-ಪಿಂಚಣಿ ಸಂದಾಯ ಆದೇಶಗಳಂತಹ ಪಿಂಚಣಿ ದಾಖಲೆಗಳು, ವೃದ್ಧಾಪ್ಯ ವೇತನ ಆದೇಶಗಳು, ವಿಧವಾ ವೇತನ ಆದೇಶಗಳು, ಸ್ವಾತಂತ್ರ್ಯ ಯೋಧರ ಗುರುತಿನ ಚೀಟಿಗಳು, ಶಸಸ್ತ್ರ ಪರವಾನಿಗೆ, ಅಂಗವಿಕಲರ ಗುರುತಿನ ಚೀಟಿಗಳು, ಮಾಜಿ ಯೋಧರ ಸಿ.ಎಸ್.ಡಿ. ಕ್ಯಾಂಟೀನ್ ಕಾರ್ಡ್.
ಭಾವಚಿತ್ರವಿರುವ ಸಂಧ್ಯಾ ಸುರಕ್ಷಾ ಯೋಜನೆಯ ಗುರುತಿನ ಚೀಟಿ, ಉದ್ಯೋಗ ಖಾತ್ರಿ ಕಾರ್ಡ್ಗಳು, ಯಶಸ್ವಿನಿ ಕಾರ್ಡ್, ಸರ್ಕಾರಿ ಸ್ಥಳೀಯ ಸಂಸ್ಥೆಗಳು ನೀಡಿರುವ ಸೇವಾ ಗುರುತಿನ ಚೀಟಿಗಳು, ಸರ್ಕಾರಿ ಇಲಾಖೆ ನೀಡಿರುವ ಹಿರಿಯ ನಾಗರಿಕರ ಗುರುತಿನ ಚೀಟಿ, ಕುಟುಂಬದ ಸದಸ್ಯರ ಹೆಸರು ಮತ್ತು ವಯಸ್ಸು ಹಾಗೂ ಕುಟುಂಬದ ಯಜಮಾನನೊಂದಿಗೆ ಹೊಂದಿರುವ ಸದಸ್ಯರ ಸಂಬಂಧ ಒಳಗೊಂಡ ಮೂಲ ಪಡಿತರ ಚೀಟಿ ಮತ್ತು ಆರೋಗ್ಯ ವಿಮಾ ಯೋಜನೆಯ ಸ್ಮಾರ್ಟ್ ಕಾರ್ಡ್ಗಳು, ಆಧಾರ್ ಕಾರ್ಡ್ಗಳನ್ನು ಹಾಜರು ಪಡಿಸಬಹುದಾಗಿದ್ದು, ಇಲ್ಲವಾದಲ್ಲಿ ಮತ ಚಲಾಯಿಸಲು ಅವಕಾಶವಿರುವುದಿಲ್ಲವೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

