ಚಿಕ್ಕಮಗಳೂರು

ಕ್ಯಾರಿ ಓವರ್ ಪದ್ಧತಿಗೆ ಆಗ್ರಹಿಸಿ ಪ್ರತಿಭಟನೆ

Published On :

ಕಪ್ರವಾರ್ತೆ  ಚಿಕ್ಕಮಗಳೂರು  ಆ. 1
ಕಳೆದ ವರ್ಷದಲ್ಲಿ ಜಾರಿಯಲ್ಲಿದ್ದ ಕ್ಯಾರಿ ಓವರ್ ಪದ್ಧತಿಯನ್ನು ಮುಂದುವರೆಸುವಂತೆ ಆಗ್ರಹಿಸಿ ಡಿಪ್ಲೋಮಾ ಕಾಲೇಜಿನ ವಿದ್ಯಾರ್ಥಿಗಳು ಗುರುವಾರ  ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಬೆಳಿಗ್ಗೆಯಿಂದ ಬಿಡುವಿಲ್ಲದೆ ಸುರಿಯುತ್ತಿದ್ದ ಮಳೆಯಲ್ಲಿಯೇ ಇಲ್ಲಿನ ಶ್ರೀ ಬೋಳರಾಮೇಶ್ವರ ದೇವಾಲಯದಿಂದ ಮೆರವಣಿಗೆಯಲ್ಲಿ ಹೊರಟ ವಿದ್ಯಾರ್ಥಿಗಳು, ಐ.ಜಿ. ರಸ್ತೆ, ಹನುಮಂತಪ್ಪ ವೃತ್ತ, ಎಂ.ಜಿ. ರಸ್ತೆ, ಆಜಾದ್  ಪಾರ್ಕ್ ಮೂಲಕ ಜಿಲ್ಲಾ ಆಟದ ಮೈದಾನಕ್ಕೆ ತೆರಳಿದರು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಜೆಡಿಎಸ್ ಮುಖಂಡ ಕೆ. ಭರತ್ ಅವರು ಮಾತನಾಡಿ, ರಾಜ್ಯ ಸರ್ಕಾರ ಹಿಂದಿನ ವರ್ಷದ ಕ್ಯಾರಿ ಓವರ್ ಪದ್ಧತಿಯನ್ನು ಕೈಬಿಡುವ ಮೂಲಕ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿದೆ. ಸರ್ಕಾರದ ಹೊಸ ಆದೇಶದಿಂದಾಗಿ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಿದ್ದಾರೆ ಎಂದು ಹೇಳಿದರು.
ಸರ್ಕಾರ ವಿಫಲ: ಡಿಪ್ಲೋಮಾ ಕಾಲೇಜುಗಳಿಗೆ ಮೂಲಭೂತ ಸೌಲಭ್ಯಗಳನ್ನು ನೀಡುವಲ್ಲಿ ಸರ್ಕಾರ ವಿಫಲವಾಗಿದೆ. ಅರೇಕಾಲಿಕ ಉಪನ್ಯಾಸಕರನ್ನು ನೇಮಕ ಮಾಡಿ ಅವರಿಂದ ಪಾಠ ಪ್ರವಚನ ನೀಡುತ್ತಿರುವ ಸರ್ಕಾರ, ತನ್ನ ತಪ್ಪನ್ನು ಮುಚ್ಚಿಕೊಳ್ಳಲು ವಿದ್ಯಾರ್ಥಿಗಳ ಮೇಲೆ ಗದಾಪ್ರಹಾರ ನಡೆಸುತ್ತಿದೆ ಎಂದ ಅವರು, ಡಿಪ್ಲೋಮಾ ಕಾಲೇಜಿನಲ್ಲಿ ಓದುತ್ತಿರುವ ಹೆಚ್ಚಿನ ವಿದ್ಯಾರ್ಥಿಗಳು ಗ್ರಾಮಾಂತರ ಪ್ರದೇಶದಿಂದ ಬಂದವರು, ಕಳೆದ ವರ್ಷದ ಕ್ಯಾರಿ ಓವರ್ ಪದ್ಧತಿ ಜಾರಿಗೊಳಿಸದೆ ಹೋದರೆ ಗ್ರಾಮಾಂತರ ಪ್ರದೇಶದ ಸಾವಿರಾರು ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಅರ್ಧಕ್ಕೆ ಕೈಬಿಡಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ತಿಳಿಸಿದರು.
ವಿಧಾನಸೌಧ ಚಲೋ: ಶಿಕ್ಷಣದಿಂದ ಯಾರೂ ಕೂಡ ವಂಚಿತರಾಗಬಾರದೆಂಬ ಉದ್ದೇಶದಿಂದ ಸರ್ಕಾರ ಹೊಸ ಹೊಸ ಕಾರ್ಯಕ್ರಮವನ್ನು ಜಾರಿಗೆ ತರುತ್ತಿದೆ. ಇನ್ನೊಂದೆಡೆ ಹೊಸ ಪದ್ಧತಿಯನ್ನು ಜಾರಿಗೆ ತರುವ ಮೂಲಕ ಶಿಕ್ಷಣದಿಂದ ವಂಚಿತರನ್ನಾಗಿ ಮಾಡುತ್ತಿದೆ. ರಾಜ್ಯ ಸರ್ಕಾರ ಕೂಡಲೇ ತನ್ನ ಆದೇಶವನ್ನು ಹಿಂಪಡೆದು, ಕಳೆದ ವರ್ಷದ ಕ್ಯಾರಿ ಓವರ್ ಪದ್ಧತಿ ಜಾರಿಗೆ ತರದೆ ಹೋದರೆ ಆ.5 ರಂದು ವಿಧಾನಸೌಧ ಚಲೋ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು. ಅಂದು ರಾಜ್ಯದ ವಿವಿಧೆಡೆಯಿಂದ ಸಾವಿರಾರು ಡಿಪ್ಲೋಮಾ ವಿದ್ಯಾರ್ಥಿಗಳು ಈ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ವಿದ್ಯಾರ್ಥಿಗಳ ಭವಿಷ್ಯ ಅತಂತ್ರ: ರಾಜ್ಯ ಸರ್ಕಾರದ ಹೊಸ ಆದೇಶದಿಂದಾಗಿ ರಾಜ್ಯದ ಸುಮಾರು 32 ಸಾವಿರ ವಿದ್ಯಾರ್ಥಿಗಳಿಗೆ ಮುಂದಿನ ತರಗತಿಗೆ ಪ್ರವೇಶ ಪಡೆಯಲು ತೊಂದರೆಯಾಗಿದೆ. ಕಾಲೇಜುಗಳಲ್ಲಿ ಪ್ರಾಧ್ಯಾಪಕರ ಕೊರತೆ ಇದ್ದು, ಇದಕ್ಕಾಗಿ ತಾತ್ಕಾಲಿಕವಾಗಿ ಅರೇಕಾಲಿಕ ಪ್ರಾಧ್ಯಾಪಕರನ್ನು ನೇಮಕ ಮಾಡಲಾಗಿದೆ. ಸಕಾಲದಲ್ಲಿ ಪ್ರಾಧ್ಯಾಪಕರು ಪಾಠಗಳು ಮುಗಿಸದೆ ಇರುವ ಕಾರಣದಿಂದಾಗಿ ಪರೀಕ್ಷೆಯ ಸಂದರ್ಭದಲ್ಲಿ ತುಂಬಾ ತೊಂದರೆಯಾಗುತ್ತಿದೆ. ಪ್ರಯೋಗ ಶಾಲೆಗಳಲ್ಲಿ ಸಾಕಷ್ಟು ಉಪಕರಣಗಳಿಲ್ಲ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.
ಶೇ.80 ರಷ್ಟು ವಿದ್ಯಾರ್ಥಿಗಳು ಕನ್ನಡ ಮಾಧ್ಯಮ ಹಾಗೂ ಗ್ರಾಮಾಂತರ ಪ್ರದೇಶದಿಂದ ಬಂದಿದ್ದು, ಅವರಿಗೆ 42  ವಿಷಯಗಳಲ್ಲಿ ಉತ್ತೀರ್ಣರಾಗಲು ತೊಂದರೆಯಾಗುತ್ತಿದೆ. 4 ವಿಷಯಗಳಲ್ಲಿ ಅನುತ್ತೀರ್ಣರಾದವರಿಗೆ ಮಾತ್ರ ಮುಂದಿನ ತರಗತಿಗಳಿಗೆ ಪ್ರವೇಶವೆಂದು ಯಾವುದೇ ವಿದ್ಯಾರ್ಥಿಗಳ ಗಮನಕ್ಕೆ ಬರದಂತೆ, ಕೆಲವು ಕಾಲೇಜುಗಳಿಂದ ಒತ್ತಾಯದ ಮೇರೆಗೆ ಸಹಿ ಹಾಕಿಸಿಕೊಳ್ಳಲಾಗಿದೆ. ಶೇ.70 ರಷ್ಟು ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ರಾಜ್ಯ ಸರ್ಕಾರ ಹಿಂದಿನ ವರ್ಷದ ಆದೇಶದಂತೆ 10 ಅಥವಾ 10ಕ್ಕಿಂತ ಹೆಚ್ಚು ವಿಷಯಗಳಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಮುಂದಿನ ತರಗತಿಗೆ ಪ್ರವೇಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಪ್ರತಿಭಟನೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ತೇಗೂರು ಜಗದೀಶ್ ಹಾಗೂ ವಿವಿಧ ಸಂಘಟನೆಗಳ ಮುಖಂಡರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.