ಚಿಕ್ಕಮಗಳೂರು

ವಿವಿಧ ಶಾಲೆಗಳಲ್ಲಿ ಕ್ಷೀರಭಾಗ್ಯಕ್ಕೆ ಚಾಲನೆ

Published On :

ವೈದ್ಯರಿಂದ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ, 10ನೇ ತರಗತಿಯ ಮಕ್ಕಳಿಗೆ ಕಬ್ಬಿಣಾಂಶದ ಮಾತ್ರೆಗಳ ವಿತರಣೆಕಪ್ರವಾರ್ತೆ ್ಣ ಚಿಕ್ಕಮಗಳೂರು ್ಣ ಆ. 1
ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಮಕ್ಕಳಿಗಾಗಿ ಜಾರಿಗೆ ತರಲಾದ ಹಾಲು ವಿತರಣಾ ಕಾರ್ಯಕ್ರಮಕ್ಕೆ ನಗರದ ವಿವಿಧ ಶಾಲೆಗಳಲ್ಲಿ ಗುರುವಾರ ಚಾಲನೆ ನೀಡಲಾಯಿತು.
 ಕೆಲವು ಶಾಲೆಗಳಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರು ಹಾಲು ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇಲ್ಲಿನ ಲಾಲ್ ಬಹದ್ದೂರ್ ಶಾಸ್ತ್ರೀ ಶಾಲೆಯಲ್ಲಿ ಜಿಲ್ಲಾಡಳಿತ ಏರ್ಪಡಿಸಿದ್ದ ಹಾಲು ವಿತರಣಾ ಕಾರ್ಯಕ್ರಮವನ್ನು ಜಿಪಂ ಅಧ್ಯಕ್ಷೆ ರೇಖಾ ಹುಲಿಯಪ್ಪಗೌಡ ಅವರು ಉದ್ಘಾಟಿಸಿದರು.  ಇದರ ಜತೆಗೆ ವೈದ್ಯರಿಂದ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಮಾಡಲಾಯಿತು. 6 ರಿಂದ 10ನೇ ತರಗತಿಯ ಮಕ್ಕಳಿಗೆ ಕಬ್ಬಿಣಾಂಶದ ಮಾತ್ರೆಗಳನ್ನು ವಿತರಿಸಲಾಯಿತು.
ದೈಹಿಕ ಬೆಳವಣಿಗೆ: ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರೇಖಾ ಹುಲಿಯಪ್ಪಗೌಡ, ಶಿಕ್ಷಣ ವ್ಯವಸ್ಥೆಯಲ್ಲಿ ಇದುವರೆಗೂ ಭೌತಿಕ ಹಾಗೂ ಮಾನಸಿಕ ಬೆಳವಣಿಗೆಗೆ ಹೆಚ್ಚು ಒತ್ತು ನೀಡಲಾಗುತ್ತಿದ್ದು, ಈಗ ಪೌಷ್ಠಿಕಾಂಶದಿಂದ ಕೂಡಿರುವ ಹಾಲು ನೀಡುವುದರ ಮೂಲಕ ಸರ್ಕಾರ ಮಕ್ಕಳ ದೈಹಿಕ ಬೆಳವಣಿಗೆಗೆ ಅವಕಾಶ ಕಲ್ಪಿಸಿದೆ ಎಂದರು. ಈವರೆಗೆ ಶಿಕ್ಷಣ ವ್ಯವಸ್ಥೆಯಲ್ಲಿ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಹೆಚ್ಚು ಮಹತ್ವ ಇರಲಿಲ್ಲ, ಪೌಷ್ಠಿಕತೆಯ ಕೊರತೆ ಇತ್ತು.
ಸಹಕಾರಿ: ಈ ಹಿನ್ನೆಲೆ ಬಿಸಿಯೂಟ ಯೋಜನೆ ಜಾರಿಗೆ ಬಂದಿತ್ತು ಈಗ ಅಪೌಷ್ಠಿಕತೆ ದೂರ ಮಾಡಲು ಸರ್ಕಾರ ಕ್ಷೀರ ಭಾಗ್ಯ ಯೋಜನೆ ಜಾರಿಗೆ ತಂದಿದೆ. ಮಕ್ಕಳು ಪರಿಪೂರ್ಣ ಶಿಕ್ಷಣ ಪಡೆಯಲು ದೈಹಿಕ ಆರೋಗ್ಯ ಬಹಳ ಮುಖ್ಯ. ಹಾಲು ನೀಡುವುದರಿಂದ ಅವರು ದೈಹಿಕವಾಗಿ ಸದೃಢರಾಗಿ, ಮಾನಸಿಕ ಕ್ರಿಯಾಶೀಲಗೊಂಡು ಶಿಕ್ಷಣದಲ್ಲಿ ತೊಡಗಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಹೇಳಿದರು.
ಕಬ್ಬಿಣಾಂಶದ ಮಾತ್ರೆ: ಜಿಲ್ಲೆಯಲ್ಲಿ 1,10,000 ಶಾಲಾ ವಿದ್ಯಾರ್ಥಿಗಳು ಹಾಗೂ 61,259 ಸಾವಿರ 6 ತಿಂಗಳಿನಿಂದ 6 ವರ್ಷದ ಮಕ್ಕಳು ವಾರದಲ್ಲಿ 3 ದಿನ ಇದರ ಪ್ರಯೋಜನ ಪಡೆಯಲಿದ್ದಾರೆ ಎಂದ ಅವರು, ಡಿ.ಐ.ಎಫ್ನಿಂದ ಕಬ್ಬಿಣಾಂಶದ ಮಾತ್ರೆಗಳನ್ನು ವಿತರಣೆ ಮಾಡುತ್ತಿದ್ದು ಇದರಿಂದ ಮಕ್ಕಳು ಆರೋಗ್ಯವಂತರಾಗಿ ಶಿಕ್ಷಣ ಪಡೆಯಲು ಅನುಕೂಲವಾಗಲಿದೆ ಎಂದು ತಿಳಿಸಿದರು.
 ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ. ಶಿವಶಂಕರ್ ಮಾತನಾಡಿ, ಕ್ಷೀರ ಭಾಗ್ಯ ಯೋಜನೆಯ ಇದೊಂದು ಐತಿಹಾಸಿಕ ಕಾರ್ಯಕ್ರಮ, ರಾಜ್ಯ ಸರ್ಕಾರದ ಈ ಯೋಜನೆಯಿಂದ ಅಂಗನವಾಡಿ ಶಾಲೆಯ ಮಕ್ಕಳಿಗೆ ಪ್ರಯೋಜನಾಕಾರಿಯಾಗಿದೆ. ಹಾಲಿನ ಸೇವನೆಯಿಂದ ಮಕ್ಕಳ ದೈಹಿಕ ಬೆಳವಣಿಗೆ ಅವಶ್ಯ ಇರುವ ಕ್ಯಾಲ್ಸಿಯಂ ಅಂಶವನ್ನು ಪೂರೈಸುತ್ತದೆ ಎಂದರು.
 ಶಿಕ್ಷಣ ಇಲಾಖೆ ಈ ಯೋಜನೆಗೆ 6 ಕೋಟಿ ರು. ವೆಚ್ಚ ಮಾಡುತ್ತಿದೆ. ಶಿಕ್ಷಕರು ಹಾಗೂ ಅಂಗನವಾಡಿ ಕಾರ್ಯಕರ್ತರಿಗೆ ಹಾಲು ತಯಾರಿಕಾ ಹಾಗೂ ಸ್ವಚ್ಛತೆ ಬಗ್ಗೆ ತರಬೇತಿ ನೀಡಲಾಗುವುದು ಎಂದು ಹೇಳಿದರು. ತಾಪಂ ಉಪಾಧ್ಯಕ್ಷ ಎಚ್.ಎಸ್. ಪುಟ್ಟೇಗೌಡ ಅಧ್ಯಕ್ಷತೆ ವಹಿಸಿದ್ದರು. ತಾಪಂ ಅಧ್ಯಕ್ಷ ಬಸವರಾಜಪ್ಪ, ಜಿಪಂ ಸದಸ್ಯ ಜೆ.ಡಿ. ಲೋಕೇಶ್, ಡಿಡಿಪಿಐ ಜಿ.ಬಿ. ರಾಜಪ್ಪ, ಡಿಎಚ್ಓ ಡಾ. ನೀರಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಚಂದ್ರಶೇಖರಯ್ಯ ಮಾತನಾಡಿದರು.
 ಜಿಪಂ ಸದಸ್ಯೆ ಅನ್ನಪೂರ್ಣ, ನಗರಸಭೆ ಸದಸ್ಯರಾದ ಪುಷ್ಪರಾಜ್, ರಮೇಶ್, ಅಪರ ಜಿಲ್ಲಾಧಿಕಾರಿ ಬಾಲಚಂದ್ರ ಉಪಸ್ಥಿತರಿದ್ದರು. ಜಿಲ್ಲಾ ಅಕ್ಷರದಾಸೋಹ ಶಿಕ್ಷಣ ಅಧಿಕಾರಿ ಎಸ್.ಜೆ. ನಾಗೇಶ್ ಸ್ವಾಗತಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಗೌಡ ವಂದಿಸಿದರು, ಎಚ್.ಎಂ. ಓಂಕಾರಪ್ಪ ಕಾರ್ಯಕ್ರಮ ನಿರೂಪಿಸಿದರು.
ನಗರದ ಬಸವನಹಳ್ಳಿ ಶಾಲೆ, ಆಜಾದ್ ಪಾರ್ಕ್ ಶಾಲೆ, ಎಂಇಎಸ್ ಶಾಲೆ ಸೇರಿದಂತೆ ಮತ್ತಿತರ ಶಾಲೆಗಳಲ್ಲಿ ಕ್ಷೀರಭಾಗ್ಯ ಯೋಜನೆಗೆ ಚಾಲನೆ ನೀಡಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.