ಚಿಕ್ಕಮಗಳೂರು

ಅತಿವೃಷ್ಟಿ ಪ್ರದೇಶಕ್ಕೆ 15 ದಿನದಲ್ಲಿ ಅಧಿಕಾರಿಗಳ ತಂಡ

Published On :

ಕ.ಪ್ರ.ವಾರ್ತೆ , ಚಿಕ್ಕಮಗಳೂರು , ಆ.9
ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ ಹಾನಿಯಾಗಿರುವ ಪ್ರದೇಶಕ್ಕೆ 15 ದಿನಗಳೊಳಗೆ ಉನ್ನತ ಅಧಿಕಾರಿಗಳ ತಂಡ ಕಳುಹಿಸಿಕೊಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಅಭಯಚಂದ್ರ ಜೈನ್ ಹೇಳಿದ್ದಾರೆ.
ಅತಿವೃಷ್ಟಿಯಿಂದ ಹಾನಿಯಾಗಿರುವ ತಾಲೂಕಿನ ಅಂಬಳೆ, ಗೌಡನಹಳ್ಳಿ ಸುತ್ತಮುತ್ತಲ ರೈತರ ಜಮೀನುಗಳಿಗೆ ಶುಕ್ರವಾರ ಭೇಟಿ ನೀಡಿದ ಸಂದರ್ಭದಲ್ಲಿ ರೈತರೊಂದಿಗೆ ಮಾತನಾಡಿದ ಸಚಿವರು, ಆಲೂಗೆಡ್ಡೆ ಸೇರಿದಂತೆ ಇತರೆ ಬೆಳೆಗಳಿಗೆ ಹಾನಿಯಾಗಿದೆ. ಈ ಬಗ್ಗೆ ಅಧ್ಯಯನ ನಡೆಸಲು ತೋಟಗಾರಿಕೆ ಇಲಾಖೆಯ ಉನ್ನತ ಅಧಿಕಾರಿಗಳ ತಂಡವನ್ನು ಜಿಲ್ಲೆಗೆ ಕಳುಹಿಸಿಕೊಡಲಾಗುವುದು ಎಂದು ತಿಳಿಸಿದರು.
ಪರಿಹಾರ ನೀಡಿ: ಇದೇ ಸಂದರ್ಭದಲ್ಲಿ ರೈತರು ಮಾತನಾಡಿ, ಈ ಬಾರಿ ವಿಪರೀತ ಮಳೆಯಿಂದಾಗಿ ಆಲೂಗೆಡ್ಡೆ ಬೆಳೆಗೆ ಅಂಗಮಾರಿ ರೋಗ ಬಂದು ತುಂಬಾ ನಷ್ಟವಾಗಿದೆ. ಬೆಳೆ ಬೆಳೆಯಲು ಹಾಕಿದ ಹಣವನ್ನು ಕಳೆದುಕೊಂಡಿದ್ದೇವೆ. ಬ್ಯಾಂಕ್‌ಗಳಿಂದ ಬೆಳೆ ಸಾಲ ಪಡೆದು ಬೆಳೆದ ಆಲೂಗೆಡ್ಡೆ ನೆಲದಲ್ಲಿ ಕರಗಿ ಹೋಗಿದೆ. ರೈತರು ಆತ್ಮಹತ್ಯೆ ಮಾಡಿಕೊಳ್ಳಬೇಕಾದ ಪರಿಸ್ಥಿತಿ ಬಂದಿದೆ. ಸರ್ಕಾರದಿಂದ ತಮಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ನೆರವಿಗೆ ಬರಬೇಕು: ಹೀಗೆ ಬಂದು ಹಾಗೆಯೇ ಹೋದರೆ ಉಪಯೋಗವಿಲ್ಲ. ರೈತರ ವಾಸ್ತವಿಕ ಸ್ಥಿತಿಯನ್ನು ಅರಿತಿರುವ ತಾವುಗಳು ರೈತರ ನೆರವಿಗೆ ಬರಬೇಕು ಎಂದು ಆಲೂಗೆಡ್ಡೆ ಬೆಳೆಗಾರರು ತಮ್ಮ ಅಳಲನ್ನು ತೋಡಿಕೊಂಡರು. ಆಗ ಸಚಿವರು ಮಾತನಾಡಿ, ರೈತರು ಆತ್ಮ ವಿಶ್ವಾಸ ಕಳೆದುಕೊಳ್ಳಬಾರದು. ರೈತರ ನೆರವಿಗಾಗಿ ಸರ್ಕಾರ ಬೆಳೆ ವಿಮೆ ಯೋಜನೆಯನ್ನು ಜಾರಿಗೆ ತಂದಿದೆ. ಅದರಲ್ಲಿ ಆಲೂಗೆಡ್ಡೆ ಬೆಳೆಗಾರರಿಗೆ ಸಹಾಯ ಮಾಡಲು ಅವಕಾಶ ಇದೆ ಎಂದರು.
ನೆರವು ನೀಡಲಾಗುವುದು: ಆಲೂಗೆಡ್ಡೆ ಬೆಳೆ ಹಾನಿಯಾಗಿರುವ ವಿಷಯವನ್ನು ತೋಟಗಾರಿಕೆ ಸಚಿವರ ಗಮನ ಸೆಳೆಯಲಾಗುವುದು. ಹಾಗೂ ಸರ್ಕಾರ ಕಾರ್ಯದರ್ಶಿಯವರೊಂದಿಗೆ  ಮಾತನಾಡಿ ಸೂಕ್ತ ಪರಿಹಾರ ಒದಗಿಸಲಾಗುವುದು ಎಂದ ಸಚಿವರು, 15 ದಿನಗಳೊಳಗೆ ತೋಟಗಾರಿಕೆ ಇಲಾಖೆಯ ಉನ್ನತ ಅಧಿಕಾರಿಗಳ ತಂಡವನ್ನು ಈ ಭಾಗಕ್ಕೆ ಕಳುಹಿಸಿ ವರದಿ ತರಿಸಿಕೊಂಡು ಸೂಕ್ತ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು.
ಅಧಿಕಾರಿಗಳಿಗೆ ಸೂಚನೆ: ಇದೇ ಸಂದರ್ಭದಲ್ಲಿ ಕದ್ರಿಮಿದ್ರಿ ಬಳಿ ಮಳೆಯಿಂದ ಕುಸಿದಿರುವ ರಸ್ತೆಯನ್ನು ವೀಕ್ಷಿಸಿದ ಸಚಿವರು, ಈ ರಸ್ತೆಯ ಬಗ್ಗೆ ಗಮನ ಹರಿಸದೆ ಹೋದರೆ ಮುಂದಿನ ದಿನಗಳಲ್ಲಿ ಕೆರೆಯ ಏರಿ ಓಡೆದು ನೀರು ಪೋಲಾಗಲಿದೆ. ಇದರಿಂದ ರೈತರ ಬೆಳೆಗೆ ನೀರಿಲ್ಲದಂತಾಗುತ್ತದೆ. ಅದುದರಿಂದ ಕೂಡಲೇ ಜಿಪಂ ಎಂಜಿನಿಯರಿಂಗ್ ಹಾಗೂ ಸಣ್ಣ ನೀರಾವರಿ ಇಲಾಖೆಯವರು ಈ ರಸ್ತೆಯನ್ನು ದುರಸ್ತಿಗೊಳಿಸಿ ರೈತರಿಗೆ ತೊಂದರೆಯಾಗದಂತೆ ಮುಂದಿನ ಕ್ರಮಕ್ಕೆ ಮುಂದಾಗಬೇಕು ಎಂದು ಸಚಿವರು, ಸ್ಥಳದಲ್ಲೇ ಇದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನೆರೆ ಪೀಡಿತ ಪ್ರದೇಶಕ್ಕೆ ಭೇಟಿ: ಜಿಲ್ಲೆಯಲ್ಲಿ ಬಿದ್ದಿರುವ ಮಳೆಯಿಂದಾಗಿ ರೈತರು ಬೆಳೆ ಕಳೆದುಕೊಂಡಿದ್ದಾರೆ. ಇತರೆ ಆಸ್ತಿಪಾಸ್ತಿಗೆ ಅಪಾರ ನಷ್ಟ ಉಂಟಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿಗಳು ಮುಖ್ಯಮಂತ್ರಿಯವರ ಗಮನಕ್ಕೆ ತಂದಿದ್ದಾರೆ. ಈ ಸಂಬಂಧ ತಾವು ನೆರೆ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ್ದು, ಸರ್ಕಾರಕ್ಕೆ ಬೆಳೆಹಾನಿ, ಲೋಕೋಪಯೋಗಿ ಇಲಾಖೆ, ಜಿಪಂ ವ್ಯಾಪ್ತಿಯ ಹಾಳಾಗಿರುವ ರಸ್ತೆಗಳು, ಸೇತುವೆಗಳು ಈ ಬಗ್ಗೆ ನಷ್ಟದ ಅಂದಾಜು ಪಟ್ಟಿ ಸಿದ್ದಪಡಿಸಿ ಸಮಸ್ಯೆ ಬಗೆಹರಿಸಲು ಸರ್ಕಾರದ ಗಮನ ಸೆಳೆಯಲಾಗುವುದು. ಆಗಸ್ಟ್ 14 ರಂದು ನೆರೆ ಪೀಡಿತ ಜಿಲ್ಲೆಯ ಕೊಪ್ಪ, ಶೃಂಗೇರಿ ತಾಲೂಕುಗಳಿಗೆ ಭೇಟಿ ಖುದ್ದಾಗಿ ಪರಿಶೀಲನೆ ನಡೆಸಿ ಪರಿಹಾರಕ್ಕೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
ಇದೇ ವೇಳೆ ವಿಧಾನಪರಿಷತ್ ಸದಸ್ಯೆ ಗಾಯಿತ್ರಿ ಶಾಂತೇಗೌಡ, ಜಿಪಂ ಸದಸ್ಯೆ  ಹೇಮಾವತಿ ದೇವೇಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಎಲ್. ಮೂರ್ತಿ, ಜಿಪಂ ಮಾಜಿ ಅಧ್ಯಕ್ಷ ಟಿ.ಡಿ. ರಾಜೇಗೌಡ, ನಗರಾಧ್ಯಕ್ಷ ಶ್ರೀಧರ್ ಉರಾಳ್ ಹಾಜರಿದ್ದರು.
ಸ್ವಾಗತ: ಎಐಸಿಸಿ ಉಪಾಧ್ಯಕ್ಷ ರಾಹುಲ್‌ಗಾಂಧಿಯವರು ಉಡುಪಿ- ಚಿಕ್ಕಮಗಳೂರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದನ್ನು ಪಕ್ಷ ಸ್ವಾಗತಿಸುತ್ತದೆ ಎಂದು ಸಚಿವ ಅಭಯಚಂದ್ರ ಜೈನ್ ಸುದ್ದಿಗಾರರೊಂದಿಗೆ ಮಾತನಾಡುವಾಗ ತಿಳಿಸಿದರು.
ದಿವಂಗತ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರು ಈ ಹಿಂದೆ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿ ಜಯಗಳಿಸಿದ್ದರು. ಇದೀಗ ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಹುಲ್‌ಗಾಂಧಿಯವರು ಇದೇ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದರೆ ಪಕ್ಷದ ಕಾರ್ಯಕರ್ತರು ಹೆಚ್ಚಿನ ಶ್ರಮ ಹಾಕಿ ಅವರನ್ನು ಗೆಲ್ಲಿಸಲು ಪಣ ತೊಡಲಿದ್ದಾರೆ ಎಂದು ಹೇಳಿದರು.
ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿಯವರು ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಜಯಗಳಿಸಿದ್ದರಿಂದ ಆ ಕ್ಷೇತ್ರಕ್ಕೆ ಕೇಂದ್ರ ಸರ್ಕಾರದಿಂದ ಹೆಚ್ಚು ಅನುದಾನ ಬರಲು ಸಾಧ್ಯವಾಯಿತು. ರಾಹುಲ್‌ಗಾಂಧಿಯವರು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲವು ಸಾಧಿಸಿದರೆ ಈ ಕ್ಷೇತ್ರದ ಅಭಿವೃದ್ಧಿಗೂ ಹೆಚ್ಚು ಅನುದಾನ ಬರಲಿದೆ ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷ ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ಹಲವು ಜನ ಪರ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿತ್ತು. ಇಂದಿರಾಗಾಂಧಿ ಅವರು ಜಾರಿಗೆ ತಂದಿದ್ದ ಗರಿಬೀ ಹಠಾವೋ ಕಾರ್ಯಕ್ರಮದಿಂದ ಬಹಳಷ್ಟು ಬಡವರಿಗೆ ಅನುಕೂಲವಾಗಿದೆ. ಅದೇ ರೀತಿ ದೇವರಾಜ್ ಅರಸ್ ಅವರು ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದ ಊಳುವವನೆ ಭೂ ಒಡೆಯ ಕಾನೂನಿನಿಂದ ಬಡವರಿಗೆ ಅನುಕೂಲವಾಯಿತು. ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯ ಜನರಿಗೆ ಹೆಚ್ಚು ಉಪಯೋಗವಾಯಿತು ಎಂದ ಸಚಿವರು, ಕಾಂಗ್ರೆಸ್‌ನ್ನು ವಿರೋಧಿಸಿದವರು ಮುಂದೆ ನಿಷ್ಟಾವಂತರಾದ ಬಹಳಷ್ಟು ಉದಾಹರಣೆಗಳಿವೆ ಎಂದರು.
ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ- ಉಪಾಧ್ಯಕ್ಷರ ಮೀಸಲಾತಿ ಪ್ರಕಟಣೆಯ ಬಗ್ಗೆ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಬಗ್ಗೆ ಬಿಜೆಪಿಯವರು ಮಾಡುತ್ತಿರುವ ಆರೋಪದ ಬಗ್ಗೆ ಪತ್ರಕರ್ತರು ಕೇಳಿದಾಗ, ಬಿಜೆಪಿ ಅಧಿಕಾರದಲ್ಲಿದ್ದಾಗಲೇ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆದಿತ್ತು. ಆಗ ಅವರು ಅಧ್ಯಕ್ಷ- ಉಪಾಧ್ಯಕ್ಷರ ಮೀಸಲಾತಿಯನ್ನು ಪ್ರಕಟಿಸಿದ್ದರೆ, ಈಗ ಗೊಂದಲ ಉಂಟಾಗುತ್ತಿರಲಿಲ್ಲ ಎಂದು ತಿರುಗೇಟು ನೀಡಿದರು.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.