ವಾದ್ರಾ ಹಗರಣ: ಬಿಜೆಪಿ ಪ್ರತಿಭಟನೆ
ಕ.ಪ್ರ.ವಾರ್ತೆ , ಚಿಕ್ಕಮಗಳೂರು , ಆ.14
ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಅವರು ಹರಿಯಾಣದಲ್ಲಿ ನಡೆಸಿರುವ 3.5 ಲಕ್ಷ ಕೋಟಿ ಭೂ ಹಗರಣವನ್ನು ಖಂಡಿಸಿ ಬಿಜೆಪಿ ನಗರ ಯುವ ಮೋರ್ಚಾ ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಇಲ್ಲಿನ ಹಳೇ ತಾಲೂಕು ಕಚೇರಿಯಿಂದ ಮೆರವಣಿಗೆಯಲ್ಲಿ ಹೊರಟ ಕಾರ್ಯಕರ್ತರು ಹನುಮಂತಪ್ಪ ವೃತ್ತದಲ್ಲಿ ರಾಬರ್ಟ್ ವಾದ್ರಾ ಅವರ ಪ್ರತಿಕೃತಿ ದಹನ ಮಾಡಿದರು.
ವಾದ್ರಾ ಬಂಧಿಸಿ: ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ದೇಶವನ್ನು ಕೊಳ್ಳೆ ಹೊಡೆಯುತ್ತಿದೆ. ಕೋಟ್ಯಾಂತರ ಹಗರಣಗಳ ಸುಳಿಯಲ್ಲಿ ಸಿಲುಕಿರುವ ಕೇಂದ್ರ ಸರ್ಕಾರ ತಕ್ಷಣ ರಾಜಿನಾಮೆ ನೀಡಬೇಕು. ರಾಬರ್ಟ್ ವಾದ್ರಾ ಅವರನ್ನು ತಕ್ಷಣವೇ ಬಂಧಿಸಿ, ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಭ್ರಷ್ಟಾಚಾರ ಮುಕ್ತ ಆಡಳಿತ ನಡೆಸುತ್ತೇವೆಂದು ಹೇಳುತ್ತಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಭ್ರಷ್ಟಾಚಾರದಲ್ಲಿ ಸಿಲುಕಿರುವ ಕೇಂದ್ರ ಸರ್ಕಾರದ ಒಂದೋಂದೇ ಹಗರಣಗಳು ಹೊರ ಬರುತ್ತಿರುವ ಸಂದರ್ಭದಲ್ಲಿ ಯಾವ ನೈತಿಕ ನೆಲೆಯಲ್ಲಿ ಮಂಡ್ಯ ಮತ್ತು ರಾಮನಗರ ಲೋಕಸಭಾ ಚುನಾವಣೆಯಲ್ಲಿ ಮತ ಕೇಳುತ್ತಾರೆ ಎನ್ನುವುದಕ್ಕೆ ಅವರೇ ಉತ್ತರಿಸಬೇಕು. ಎರಡು ಲೋಕಸಭಾ ಕ್ಷೇತ್ರದ ಪ್ರಜ್ಞಾವಂತ ಮತದಾರರು ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ವಿರುದ್ಧ ಮತ ಚಲಾಯಿಸಿ ಕಾಂಗ್ರೆಸ್ಅನ್ನು ತಿರಸ್ಕರಿಸಬೇಕು ಎಂದು ಮನವಿ ಮಾಡಿದ್ದಾರೆ.
ಅಶೋಕ್ ಖೇಮ್ಕಾ ವರ್ಗಾವಣೆಗೆ ಖಂಡನೆ: ಸೋನಿಯಾ ಕುಟುಂಬದ ಹಗರಣವನ್ನು ಬಯಲಿಗೆಳೆದ ನಿಷ್ಟಾವಂತ ಅಧಿಕಾರಿ ಅಶೋಕ್ ಖೇಮ್ಕಾರವರನ್ನು ವರ್ಗಾವಣೆ ಮಾಡಿರುವುದು ದುರದೃಷ್ಟಕರ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಬೇಕು ಎಂದು ಒತ್ತಾಯಿಸಿದ್ದಾರೆ.
ಪ್ರತಿಭಟನೆಯಲ್ಲಿ ನಗರ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸಮೃದ್ಧ್ ಪೈ, ಪ್ರಧಾನ ಕಾರ್ಯದರ್ಶಿ ಮನು ಚಕ್ರವರ್ತಿ, ಧನಂಜಯ್ಗೌಡ, ಗೋಕುಲ್, ಯುವರಾಜ್, ಶಾಕಿಬ್, ಸಂದೀಪ್, ವರಸಿದ್ಧಿ ವೇಣುಗೋಪಾಲ್, ಪ್ರೇಮ್ಕುಮಾರ್, ಪುಷ್ಪರಾಜ್ ಹಾಗೂ ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

