ಚಿಕ್ಕಮಗಳೂರು

ಪ್ರತಿಭೆ ಪ್ರದರ್ಶನಕ್ಕೆ ಕಾರಂಜಿ ವೇದಿಕೆ: ನಿಂಗಯ್ಯ

Published On :

ಕ.ಪ್ರ.ವಾರ್ತೆ ಟಿ ಚಿಕ್ಕಮಗಳೂರು ಟಿ ಡಿ.12
ಪ್ರತಿಭಾ ಕಾರಂಜಿ ಕಾರ್ಯಕ್ರಮ ಮಕ್ಕಳಲ್ಲಿನ ಪ್ರತಿಭೆ ಹೊರ ಹೊಮ್ಮಿಸುವ ಪ್ರೇರಕ ಶಕ್ತಿಯೂ ಹೌದು. ಈ ಹಿನ್ನೆಲೆಯಲ್ಲಿ ಎಲ್ಲಾ ಆಟೋಟ ಸ್ಪರ್ಧೆಗಳಲ್ಲಿ ಮಕ್ಕಳು ತೊಡಗಿಸಿಕೊಳ್ಳುವಂತೆ ಶಿಕ್ಷಕರು ಹಾಗೂ ಪೋಷಕರು ಪ್ರೋತ್ಸಾಹಿಸಬೇಕು ಎಂದು ಮೂಡಿಗೆರೆ ಶಾಸಕ ಬಿ.ಬಿ. ನಿಂಗಯ್ಯ ತಿಳಿಸಿದರು.
ತಾಲೂಕಿನ ಕಬ್ಬಿಣ ಸೇತುವೆಯ ಕೆಳಗೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾಚಗೊಂಡನಹಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ಬಡಮಕ್ಕಳೇ ಹೆಚ್ಚಾಗಿ ಕಲಿಯುವ ಸರ್ಕಾರಿ ಶಾಲೆಗಳಲ್ಲಿ ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ಅವರಲ್ಲಿ ಆತ್ಮವಿಶ್ವಾಸ ಹೆಚ್ಚಿಸುತ್ತದೆ. ತಮ್ಮಲ್ಲಿರುವ ಕೌಶಲ್ಯ ಪ್ರದರ್ಶನಕ್ಕೆ ವೇದಿಕೆಯೂ ಆಗುತ್ತದೆ, ಈ ಕಾರಣದಿಂದ ಮಕ್ಕಳನ್ನು ಹುರಿದುಂಬಿಸುವ ಕೆಲಸ ಶಿಕ್ಷಕರಿಂದಾಗಬೇಕು ಎಂದು ತಿಳಿಸಿದರು.
ಶಿಸ್ತನ್ನು ಕಲಿಸಿ: ಕೆಳಗೂರು ಸರ್ಕಾರಿ ಶಾಲೆ ಶತಮಾನೋತ್ಸವ ಆಚರಿಸಿಕೊಳ್ಳುವ ಹೊಸ್ತಿಲಿನಲ್ಲಿದೆ. ಈಗಾಗಲೇ 95 ವರ್ಷಗಳನ್ನು ಕಂಡಿರುವ ಈ ಶಾಲೆಯಲ್ಲಿ ಕಲಿತ ಸಾವಿರಾರು ಮಂದಿ ಬೇರೆ ಬೇರೆ ಕಡೆಗಳಲ್ಲಿ ಬದುಕು ರೂಪಿಸಿಕೊಂಡಿದ್ದಾರೆ. ಇತ್ತೀಚೆಗೆ ಈ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಕ್ಷೀಣಿಸುತ್ತಿದೆ. ಇದಕ್ಕೆ ಕಾರಣವೇನು ಎಂಬುದನ್ನು ಶಿಕ್ಷಕರು ತಿಳಿದುಕೊಳ್ಳುವ ಕೆಲಸ ಮಾಡಬೇಕು. ಶಿಕ್ಷಕರು ಬದ್ಧತೆಯಿಂದ ಕೆಲಸ ಮಾಡಬೇಕು. ಕನ್ನಡಕ್ಕೆ ಒತ್ತುಕೊಟ್ಟು, ಮಕ್ಕಳಲ್ಲಿ ಶಿಸ್ತನ್ನೂ ಮೂಡಿಸಬೇಕು ಎಂದು ಸೂಚಿಸಿದರು.
ಇದೇ ಸಂದರ್ಭದಲ್ಲಿ ಶಾಲೆಗೆ ಹೆಚ್ಚುವರಿ ಕೊಠಡಿ ಹಾಗೂ ದೇವೀರಮ್ಮನವರ ದೇವಸ್ಥಾನಕ್ಕೆ ರಸ್ತೆ ನಿರ್ಮಾಣ ಮಾಡಿಸಿಕೊಡುವುದಾಗಿ ಶಾಸಕರು ಭರವಸೆ ನೀಡಿದರು.
ಜಿ.ಪಂ. ಸದಸ್ಯೆ ಸವಿತಾ ರಮೇಶ್ ಮಾತನಾಡಿ, ಪ್ರತಿಭಾ ಕಾರಂಜಿ ಮಕ್ಕಳಲ್ಲಿನ ಬೌದ್ಧಿಕ ಬೆಳವಣಿಗೆ ಹಾಗೂ ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳಲು ಪೂರಕವಾದ ಕಾರ್ಯಕ್ರಮವಾಗಿದೆ. ಇದರ ಯಶಸ್ಸಿಗೆ ಶಾಲಾ ಸಿಬ್ಬಂದಿ ಹಾಗೂ ಗ್ರಾಮಸ್ಥರು ಸಹಕರಿಸಬೇಕು ಎಂದು ತಿಳಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಗೌಡ ಅವರು ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉತ್ತಮವಾಗಿ ಏರ್ಪಡಿಸಿದ್ದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕಾಫಿ ಬೆಳೆಗಾರ ಕೆ. ವೀರರಾಜು ಪ್ರತಿಭಾ ಕಾರಂಜಿ ಉದ್ಘಾಟಿಸಿ ಮಾತನಾಡಿದರು. ಎಸ್ಡಿಎಂಸಿ ಅಧ್ಯಕ್ಷ ಹಿರಿಯಣ್ಣಗೌಡ ಅಧ್ಯಕ್ಷತೆ ವಹಿಸಿದ್ದರು. ಗ್ರಾ.ಪಂ. ಅಧ್ಯಕ್ಷ ಶ್ರೀಕಂಠ, ಗ್ರಾಮದ ಹಿರಿಯರು ಹಾಗೂ ಕಾಫಿ ಬೆಳೆಗಾರರಾದ ಎಚ್.ಎ. ಭೈರೇಗೌಡ, ಗ್ರಾ.ಪಂ. ಸದಸ್ಯರಾದ ಸಿ.ಎ. ಆಸೀಫ್, ಬಸವಯ್ಯ, ದೇವರಾಜ್, ವಿಎಸ್ಎಸ್ಎನ್ ಅಧ್ಯಕ್ಷ ಎಂ.ಆರ್. ಯತಿರಾಜ್, ಪ್ರತಿಭಾ ಕಾರಂಜಿ ಸಮಿತಿ ಅಧ್ಯಕ್ಷ ಹೆಚ್.ಬಿ. ಸತೀಶ್, ಎಸ್.ಡಿ.ಎಂ.ಸಿ. ಮಾಜಿ ಅಧ್ಯಕ್ಷ ಭದ್ರೇಗೌಡ, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಭೈರೇಗೌಡ, ವಸಂತಕುಮಾರ್ ಉಪಸ್ಥಿತರಿದ್ದರು.
ಸಂಜೆ ನಡೆದ ಮುಕ್ತಾಯ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ತಾ.ಪಂ. ಸದಸ್ಯ ಗಂಗಯ್ಯ, ಗ್ರಾ.ಪಂ. ಉಪಾಧ್ಯಕ್ಷೆ ಸುಜಾತ ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಪ್ರತಿಭಾ ಕಾರಂಜಿಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ನಾಗಶ್ರೀ ಮತ್ತು ಲತಾ ಪಿಂಟೋ ಸ್ವಾಗತಿಸಿದರು. ಹೆಚ್.ಸಿ. ಚಂದ್ರಶೇಖರ್ ವಂದಿಸಿದರು.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.