ಚಿಕ್ಕಮಗಳೂರು

ಇಂದು ದತ್ತ ಜಯಂತಿಗೆ ಚಾಲನೆ

Published On :

ಕ.ಪ್ರ.ವಾರ್ತೆ ಟಿ ಚಿಕ್ಕಮಗಳೂರು ಟಿ  ಡಿ.13
ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿರುವ ದತ್ತಪೀಠದಲ್ಲಿ ಸಂಘಪರಿವಾರದ ನೇತೃತ್ವದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ದತ್ತಜಯಂತಿ ಉತ್ಸವಕ್ಕೆ ಶನಿವಾರ ಚಾಲನೆ ಸಿಗಲಿದೆ.
ಈ ಕಾರ್ಯಕ್ರಮದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು 2500 ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ 14 ಕಡೆಗಳಲ್ಲಿ ಚೆಕ್ ಪೋಸ್ಟ್ ನಿರ್ಮಾಣ ಮಾಡಲಾಗಿದ್ದು, ಇದರ ಜತೆಗೆ 21 ಮಂದಿ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಹಾಗೂ ದತ್ತಪೀಠ ಸೇರಿದಂತೆ ಚಿಕ್ಕಮಗಳೂರು ನಗರದ ವಿವಿಧೆಡೆ 25 ಸಿ.ಸಿ. ಟಿವಿ ಕ್ಯಾಮರಗಳನ್ನು ಅಳವಡಿಸಲಾಗಿದೆ.
ಸಂಕೀರ್ತನಾ ಯಾತ್ರೆ: ದತ್ತಜಯಂತಿಯ ಮೊದಲನೇ ದಿನವಾದ ಶನಿವಾರದಂದು ನಗರದ ಬೋಳರಾಮೇಶ್ವರ ದೇವಸ್ಥಾನದಿಂದ ಬೆಳಿಗ್ಗೆ 9 ಗಂಟೆಗೆ ಮಹಿಳೆಯರಿಂದ ಸಂಕೀರ್ತನಾ ಯಾತ್ರೆ ನಡೆಯಲಿದ್ದು, ಈ ಯಾತ್ರೆ ನಗರದ ಐ.ಜಿ. ರಸ್ತೆಯ ಮೂಲಕ ಶ್ರೀ ಕಾಮಧೇನು ಗಣಪತಿ ದೇವಾಲಯಕ್ಕೆ ತಲುಪಲಿದೆ.
ಬಳಿಕ ಮಹಿಳೆಯರು ದತ್ತಪೀಠಕ್ಕೆ ತೆರಳಿ ದತ್ತಪಾದುಕೆ ದರ್ಶನ ಪಡೆದು ಅನುಸೂಯ ಪೂಜೆ ನೆರವೇರಿಸಿ ಗಣಪತಿ ಹೋಮ, ದುರ್ಗಾ ಹೋಮದಲ್ಲಿ ಭಾಗವಹಿಸಲಿದ್ದಾರೆ.
ಚೆಕ್ ಪೋಸ್ಟ್: ನಗರ ಸೇರಿದಂತೆ ದತ್ತಪೀಠದ ಮಾರ್ಗದಲ್ಲಿ 14 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ತೆರೆಯಲಾಗಿದೆ. ಇಲ್ಲಿ ಕರ್ತವ್ಯ ನಿರ್ವಹಿಸಲು ಜಿಲ್ಲಾಡಳಿತ 21 ಮಂದಿ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳನ್ನು ನೇಮಕ ಮಾಡಿದೆ.
ದಂಡಾಧಿಕಾರಿಗಳೊಂದಿಗೆ ಕರ್ತವ್ಯ ನಿರ್ವಹಿಸಲು ಪ್ರತಿಯೊಂದು ಚೆಕ್ ಪೋಸ್ಟ್ನಲ್ಲಿ ತಲಾ ಇಬ್ಬರು ಸಹಾಯಕ ಸಿಬ್ಬಂದಿಗಳನ್ನು ಸಹ ನೇಮಕ ಮಾಡಲಾಗಿದ್ದು, ಅವರುಗಳು ಶುಕ್ರವಾರದಿಂದಲೇ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಇದರ ಜತೆಗೆ 10 ಚೆಕ್ ಪೋಸ್ಟ್ಗಳಲ್ಲಿ ಅಬಕಾರಿ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.
ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ತಾಲೂಕು ತಹಸೀಲ್ದಾರ್ ಹಾಗೂ ಉಪ ವಿಭಾಗಾಧಿಕಾರಿಗಳು ತಮ್ಮ ಕೇಂದ್ರ ಸ್ಥಾನದಲ್ಲಿ ಇರುವಂತೆ ಜಿಲ್ಲಾಧಿಕಾರಿ ಬಿ.ಎಸ್. ಶೇಖರಪ್ಪ ಅವರು ಸೂಚನೆ ನೀಡಿದ್ದಾರೆ.
ಮದ್ಯ ಮಾರಾಟ ನಿಷೇಧ: ಡಿ.13ರ ಮಧ್ಯ ರಾತ್ರಿಯಿಂದ ಡಿ.16ರ ಮಧ್ಯ ರಾತ್ರಿಯವರೆಗೆ ಚಿಕ್ಕಮಗಳೂರು ನಗರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಡಿ.15ರ ಮಧ್ಯ ರಾತ್ರಿಯಿಂದ 16ರ ಮಧ್ಯ ರಾತ್ರಿಯವರೆಗೆ ಚಿಕ್ಕಮಗಳೂರು ತಾಲೂಕಿನ ಜತೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.
ಐ.ಡಿ. ಪೀಠಕ್ಕೆ ಆಗಮಿಸುವ ಭಕ್ತಾಧಿಗಳು ಮೊಬೈಲ್, ಕ್ಯಾಮೆರಾ, ವಿಡಿಯೋ ಕ್ಯಾಮೆರಾ, ಹಿಡನ್ ಕ್ಯಾಮೆರಾ, ಪೆನ್ ಕ್ಯಾಮೆರಾಗಳನ್ನು ದತ್ತಪೀಠದಲ್ಲಿನ ನಿಷೇಧಿತ ಪ್ರದೇಶದ ಆವರಣದ ಒಳಗೆ ತರುವುದನ್ನು ನಿಷೇಧಿಸಲಾಗಿದೆ ಜಿಲ್ಲಾಡಳಿತ ನಿಷೇಧಿಸಿದೆ.
ಜಿಲ್ಲಾಧಿಕಾರಿ ಬಿ.ಎಸ್. ಶೇಖರಪ್ಪ ಅವರು ಶುಕ್ರವಾರ ದತ್ತಪೀಠಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ವೇಳೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಭಕ್ತಾದಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ, ಪ್ರಸಾದ ವ್ಯವಸ್ಥೆ, ಶೆಡ್ ವ್ಯವಸ್ಥೆ, ವೈದ್ಯಕೀಯ ಸೇವೆ, ವಿಶೇಷ ಬಸ್ ಸೌಲಭ್ಯ, ಶೌಚಾಲಯ ಮುಂತಾದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ಭಕ್ತರನ್ನು ಕೊಂಡೊಯ್ಯುವ ವಾಹನಗಳನ್ನು ಡಿ.16 ರಂದು ಬೆಳಿಗ್ಗೆ 7 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಕೈಮರ ಚೆಕ್ ಪೋಸ್ಟ್ನಿಂದ ಬಿಡಲಾಗುವುದು ಎಂದು ಹೇಳಿದರು.
ದತ್ತಜಯಂತಿ ಉತ್ಸವದ ವೇಳೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು 2500 ಮಂದಿ ಪೊಲೀಸ್ ಸಿಬ್ಬಂದಿಗಳನ್ನು ಬಂದೋಬಸ್ತ್ಗಾಗಿ ನಿಯೋಜನೆ ಮಾಡಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಅಭಿಷೇಕ್ ಗೋಯಲ್ ಅವರು ಸುದ್ದಿಗಾರರೊಂದಿಗೆ ಮಾತನಾಡುವಾಗ ತಿಳಿಸಿದರು.
ಇಬ್ಬರು ಎಎಸ್ಪಿ, 3 ಮಂದಿ ಡಿವೈಎಸ್ಪಿ, 6 ಸಿಪಿಐ, 21 ಮಂದಿ ಎಸೈ ಹೀಗೆ ಒಟ್ಟು 200 ಮಂದಿ ಅಧಿಕಾರಿ ಸಿಬ್ಬಂದಿಗಳ ಜತೆಗೆ ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳಿಂದ ತಲಾ 75  ಪೊಲೀಸ್ ಸಿಬ್ಬಂದಿ, 400 ಮಂದಿ ಗೃಹ ರಕ್ಷಕ ದಳ ಸಿಬ್ಬಂದಿ, ಹೊರ ಜಿಲ್ಲೆಯಿಂದ 4 ಡಿಎಆರ್ ತುಕಡಿಗಳು ಜಿಲ್ಲೆಗೆ ಬಂದಿವೆ ಎಂದು ಹೇಳಿದರು.
25 ಸಿ.ಸಿ. ಟಿವಿ ಕ್ಯಾಮರ: ದತ್ತಪೀಠವೂ ಸೇರಿದಂತೆ ನಗರದ ವಿವಿಧೆಡೆ 25 ಸಿ.ಸಿ. ಟಿವಿ ಕ್ಯಾಮರಗಳನ್ನು ಅಳವಡಿಸಲಾಗಿದೆ. ಡಿ.15 ರಂದು ನಗರದಲ್ಲಿ ಶೋಭಾಯಾತ್ರೆ ನಡೆಸಲು ಅನುಮತಿ ನೀಡಲಾಗಿದೆ. ಆಜಾದ್ ಪಾರ್ಕ್ನಲ್ಲಿ ಧಾರ್ಮಿಕ ಸಭೆ ನಡೆಸಲು ಅನುಮತಿ ನೀಡುವ ಬಗ್ಗೆ ಈವರೆಗೆ ಯಾವುದೇ ಅಂತಿಮವನ್ನು ಜಿಲ್ಲಾಡಳಿತ ತೆಗೆದುಕೊಂಡಿಲ್ಲ ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.