ಚಿಕ್ಕಮಗಳೂರು

ಮತದಾರರ ವಿಶ್ವಾಸ ಗಳಿಸಲು ಸಂಘಟನೆ ಅಗತ್ಯ

Published On :

ಕ.ಪ್ರ.ವಾರ್ತೆ  ಚಿಕ್ಕಮಗಳೂರು  ಡಿ. 21
ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಚುನಾವಣೆ ಸಂದರ್ಭದಲ್ಲಿ ಮಾತ್ರ ಸಭೆ, ಸಮಾರಂಭ ನಡೆಸಿ ಕಾರ್ಯಕರ್ತರನ್ನು ಒಗ್ಗೂಡಿಸುತ್ತವೆ. ಆದರೆ, ಬಿಜೆಪಿ ನಿರಂತರವಾಗಿ ಕಾರ್ಯಕರ್ತರು ಮತ್ತು ಪಕ್ಷದ ಮುಖಂಡರ ಜತೆ ಸಂಪರ್ಕ ಹೊಂದಿರುತ್ತದೆ. ಇದು ಬಿಜೆಪಿಯ ವಿಶೇಷ ಎಂದು ಶಾಸಕ ಸಿ.ಟಿ. ರವಿ ಹೇಳಿದ್ದಾರೆ.
ಪಾಂಚಜನ್ಯ ಕಚೇರಿಯಲ್ಲಿ ಶನಿವಾರ ನಡೆದ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಬೂತ್ ಮಟ್ಟದ ಏಜೆಂಟರ ಪ್ರಶಿಕ್ಷಣ ವರ್ಗ ಕಾರ್ಯಕ್ರಮದಲ್ಲಿ ಮಾತನಾಡಿ, ಕ್ಷೇತ್ರದ 238 ಬೂತ್‌ಗಳಲ್ಲಿಯೂ ಸಂಘಟನೆ ಪ್ರಬಲವಾಗಿದ್ದಾಗ ಮತದಾರರ ವಿಶ್ವಾಸ ಗಳಿಸುವುದು ಸುಲಭ ಹಾಗೂ ಕಾರ್ಯಕರ್ತರ ಸಂಘಟಿತ ಪ್ರಯತ್ನದಿಂದಾಗಿ ಗೆಲವು ಸಾಧ್ಯ. ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿಯಾಗಿ ಘೋಷಣೆಗೊಂಡಿರುವ ನರೇಂದ್ರ ಮೋದಿ ಪಕ್ಷದ ಕಾರ್ಯಕರ್ತರಿಗೆ ಆದರ್ಶರಾಗಿದ್ದಾರೆ ಎಂದರು.
ಕಾರ್ಯಕರ್ತರ ಧ್ಯೇಯವಾಗಲಿ: ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆಯುವ 2014ರ ಲೋಕಸಭಾ ಚುನಾವಣೆಯ ಘೋಷಣೆಯಂತೆ ದೇಶದಲ್ಲಿ ಕಾಂಗ್ರೆಸ್ ಮುಕ್ತ ಭಾರತವನ್ನು ನಿರ್ಮಾಣ ಮಾಡುವುದು ಪ್ರತಿಯೊಬ್ಬ ಕಾರ್ಯಕರ್ತರ ಧ್ಯೇಯವಾಗಬೇಕು ಹಾಗೂ ದೇಶದಲ್ಲಿ ಹಲವಾರು ವರ್ಷಗಳ ಕಾಲ ಕೇಂದ್ರ ಹಾಗೂ ರಾಜ್ಯದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ, ಸ್ವಜನಪಕ್ಷಪಾತ, ನಿರುದ್ಯೋಗ ಸಮಸ್ಯೆ, ವಂಶಪಾರಂಪಾರ್ಯ ಆಡಳಿತಕ್ಕೆ ಕಾಂಗ್ರೆಸ್ ಸರ್ಕಾರವೇ ಮೂಲ ಕಾರಣ ಎಂದರು.
ಬೂತ್ ಲೆವೆಲ್ ಏಜೆಂಟ್: ಕೇಂದ್ರ ಚುನಾವಣಾ ಆಯೋಗ ದೇಶದ ನೋಂದಾಯಿತ ರಾಜಕೀಯ ಪಕ್ಷಗಳಿಗೆ ಬಿಎಲ್‌ಎ ನೇಮಕ ಮಾಡುವ ಅವಕಾಶ ಕಲ್ಪಿಸಿತು. ಅದರಂತೆ ಬಿಜೆಪಿ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ 238 ಬೂತ್‌ಗೂ ಬೂತ್ ಲೆವೆಲ್ ಏಜೆಂಟ್ ನೇಮಿಸಿ ತಹಸೀಲ್ದಾರರಿಗೆ ಪತ್ರ ರವಾನಿಸಲಾಗಿದೆ. ಬಿಜೆಪಿ ಶ್ರೇಣಿಕೃತ ಹುದ್ದೆಗಳನ್ನು ಹೊಂದಿರುವ ಪಕ್ಷ. ಚುನಾವಣಾ ಮತದಾರರ ಪಟ್ಟಿಯಲ್ಲಿ ಹೊಸ ಮತದಾರರ ಸೇರ್ಪಡೆಗೆ ಅಧಿಕಾರಿಗಳೊಂದಿಗೆ ನೇರವಾಗಿ ಸಂಪರ್ಕ ಹೊಂದಿ ಮತದಾರರ ಪಟ್ಟಿ ಸೇರ್ಪಡೆಗೆ ಅವಕಾಶ ಉಪಯೋಗಿಸಿಕೊಳ್ಳಬೇಕು. 18 ವರ್ಷ ತುಂಬಿದ ಯುವ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವ ಕೆಲಸ ನಿರ್ವಹಿಸಬೇಕು ಎಂದು ಹೇಳಿದರು.
ಬಿಜೆಪಿ ಜಿಲ್ಲಾ ವಕ್ತಾರ ಎಚ್.ಡಿ. ತಮ್ಮಯ್ಯ ಅವರು ಕಾರ್ಯಕ್ರಮ ಉದ್ಘಾಟಿಸಿದರು. ನಗರಾಧ್ಯಕ್ಷ ವರಸಿದ್ದಿ ವೇಣುಗೋಪಾಲ್, ಕ್ಷೇತ್ರ ಸಮಿತಿ ಅಧ್ಯಕ್ಷರಾದ ರವಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಆರ್. ಪ್ರೇಂಕುಮಾರ್, ಬಿ. ರಾಜಪ್ಪ, ಸೀತಾರಾಮ್ ಭರಣ್ಯ ಉಪಸ್ಥಿತರಿದ್ದರು. ನಗರಸಭಾ ಸದಸ್ಯ ದೇವರಾಜ್ ಶೆಟ್ಟಿ ನಿರೂಪಿಸಿದರು, ಮಧುಕುಮಾರ್‌ರಾಜ್ ಅರಸ್ ಸ್ವಾಗತಿಸಿದರು. ಸುಧೀರ್ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.