ವಿಶ್ವಮಾನವರಾಗಲು ಕುವೆಂಪು ಸಂದೇಶ ಪಾಲಿಸಿ
ವಿಶ್ವಮಾನವರಾಗಲು ಕುವೆಂಪು ಸಂದೇಶ ಪಾಲಿಸಿ
ಕ.ಪ್ರ.ವಾರ್ತೆ , ಚಿಕ್ಕಮಗಳೂರು , ಡಿ. 31
ರಾಷ್ಟ್ರಕವಿ ಕುವೆಂಪು ಅವರು ಹಾಕಿಕೊಟ್ಟಿರುವ ಹಾದಿಯಲ್ಲಿ ಪ್ರಾಮಾಣಿಕವಾಗಿ ನಡೆದಾಗ ಮಾತ್ರ ವಿಶ್ವಮಾನವರಾಗಿ ಬಾಳಲು ಸಾಧ್ಯ ಎಂದು ಲೋಕಸಭಾ ಸದಸ್ಯ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದರು.
ನಗರದ ಕುವೆಂಪು ಕಲಾಮಂದಿರದಲ್ಲಿ ಕುವೆಂಪು ಅಧ್ಯಯನ ಸಂಸ್ಥೆ ಮತ್ತು ಭಾರತೀ ವಿದ್ಯಾಸಂಸ್ಥೆ ಸೋಮವಾರ ಏರ್ಪಡಿಸಿದ್ದ ರಾಷ್ಟ್ರಕವಿ ಕುವೆಂಪು ಅವರ ಜನ್ಮ ದಿನಾಚರಣೆ ಮತ್ತು ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ರಾಷ್ಟ್ರಕವಿ ಕುವೆಂಪು ಮತ್ತು ಬ್ರಹ್ಮಶ್ರೀ ನಾರಾಯಣಗುರು ಅವರಂತಹ ಮಹಾತ್ಮರ ಸಂದೇಶಗಳನ್ನು ನಾವು ಬರೀ ಭಾಷಣಗಳಲ್ಲಿ ಮಾತ್ರ ಹೇಳುತ್ತೇವೆ. ಆದರೆ, ನಮ್ಮ ಬದುಕಿನಲ್ಲಿ ಅವುಗಳನ್ನು ಪ್ರಾಮಾಣಿಕವಾಗಿ ಅಳವಡಿಸಿಕೊಳ್ಳುತ್ತಿಲ್ಲ. ಇದರಿಂದಾಗಿ ಎಲ್ಲಾ ಹಂತಗಳಲ್ಲೂ ಜಾತೀಯತೆ, ತಾರತಮ್ಯ ತಾಂಡವವಾಡುತ್ತಿವೆ ಎಂದರು.
ನಮ್ಮಲ್ಲಿರುವ ಸಂಕುಚಿತ ಬುದ್ಧಿ ಬಿಟ್ಟು ಕುವೆಂಪು ಅವರು ಹಾಕಿಕೊಟ್ಟಿರುವ ವಿಶ್ವಮಾನವ ಹಾದಿಯಲ್ಲಿ ನಾವು ಸಾಗಬೇಕು. ಶಿಸ್ತು ಮತ್ತು ನೈತಿಕತೆಯನ್ನು ಬೆಳೆಸಿಕೊಳ್ಳಬೇಕು. ಹಾಗಾದಾಗ ಮಾತ್ರ ಮುಂದಿನ ಪೀಳಿಗೆ ಶಾಂತಿ ಮತ್ತು ನೆಮ್ಮದಿಯಿಂದ ಬದುಕಲು ಸಾಧ್ಯ ಎಂದು ತಿಳಿಸಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಂ.ಎಲ್. ಮೂರ್ತಿ, ಕುವೆಂಪು ಅಧ್ಯಯನ ಸಂಸ್ಥೆಯನ್ನು ಸ್ಥಾಪಿಸಲು ನಗರ ವ್ಯಾಪ್ತಿಯಲ್ಲಿ ನಗರಸಭೆ ನಿವೇಶನವನ್ನು ಒದಗಿಸಿಕೊಡುವ ಭರವಸೆ ನೀಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಕುವೆಂಪು ಅಧ್ಯಯನ ಸಂಸ್ಥೆ ಅಧ್ಯಕ್ಷ ಎಚ್.ಬಿ. ಜಯರಾಮೇಗೌಡ, ಸರ್ಕಾರಗಳು ಶಿಕ್ಷಣಕ್ಕಾಗಿ ಕೋಟ್ಯಂತರ ರು. ಖರ್ಚು ಮಾಡುತ್ತಿವೆ. ಅನೇಕ ಸವಲತ್ತುಗಳನ್ನು ವಿದ್ಯಾರ್ಥಿ ನೀಡುತ್ತಿವೆ. ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಆದರೂ, ಗ್ರಾಮೀಣ ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಹಿಂದೆ ಬೀಳುತ್ತಿದ್ದಾರೆ. ಇದಕ್ಕೆ ಮೂಲ ಕಾರಣ ಪೋಷಕರು ಅನಕ್ಷರಸ್ಥರಾಗಿರುವುದು ಎಂದರು.
ಈ ಹಿನ್ನೆಲೆಯಲ್ಲಿ ಗ್ರಾಮೀಣ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಪ್ರತಿ ತಾಲೂಕಿನಲ್ಲೂ ಬಡ ವಿದ್ಯಾರ್ಥಿಗಳಿಗೆ ಸರ್ಕಾರ ವಸತಿ ಶಾಲೆಯನ್ನು ತೆರೆಯಬೇಕು ಎಂದು ಮನವಿ ಮಾಡಿದರು.
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಭಾರತೀ ವಿದ್ಯಾಸಂಸ್ಥೆ ವತಿಯಿಂದ ನಗದು ಬಹುಮಾನ ನೀಡಲಾಯಿತು. ವಾರ್ಷಿಕೋತ್ಸವ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಬಹುಮಾನ ನೀಡಲಾಯಿತು.
ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಗೌಡ, ಬಿಎಸ್ಪಿ ಜಿಲ್ಲಾಧ್ಯಕ್ಷ ಕೆ.ಟಿ. ರಾಧಾಕೃಷ್ಣ ಉಪಸ್ಥಿತರಿದ್ದರು. ಶಿಕ್ಷಕರಾದ ಎಚ್.ಡಿ. ಹೊನ್ನೇಗೌಡ ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಶಿಕ್ಷಕ ಎ.ಪುಟ್ಟಪ್ಪ ಸ್ವಾಗತಿಸಿದರು. ಕೆ.ಪಿ. ಬಸವರಾಜ್ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

