ಕಾನೂನು ವ್ಯವಸ್ಥೆ ವೈಫಲ್ಯ: ಎಸ್ಪಿ ತಲೆದಂಡ
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಇತ್ತೀಚೆಗೆ ಕಾನೂನು ಸುವ್ಯವಸ್ಥೆ ಹದಗೆಡುತ್ತಿದ್ದು, ಜಿಲ್ಲಾ ರಕ್ಷಣಾಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಹೇರಿದ ಒತ್ತಡಕ್ಕೆ ರಾಜ್ಯ ಸರ್ಕಾರ ಮಣಿದಿದೆ.
ಜಿಲ್ಲಾ ರಕ್ಷಣಾಧಿಕಾರಿ ಅಭಿಷೇಕ್ ಗೋಯಲ್ ಅವರನ್ನು ಬೆಂಗಳೂರು ನಗರ ಡಿಸಿಪಿಯಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಚಿಕ್ಕಮಗಳೂರು ಜಿಲ್ಲಾ ರಕ್ಷಣಾಧಿಕಾರಿಯಾಗಿ ಆರ್. ಚೇತನ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಹೆಚ್ಚಾಗಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಇದೇ ಪರಿಸ್ಥಿತಿ ಮುಂದುವರೆದರೆ ಆಡಳಿತ ಪಕ್ಷಕ್ಕೆ ಕೆಟ್ಟ ಹೆಸರು ಬರಲಿದೆ ಎಂದು ಜಿಲ್ಲೆಯ ಹಿರಿಯ ಕಾಂಗ್ರೆಸ್ ನಾಯಕರು ರಾಜ್ಯದ ಮುಖ್ಯಮಂತ್ರಿಗಳಿಗೆ ಹಾಗೂ ಗೃಹ ಸಚಿವರಿಗೆ ಮನವರಿಕೆ ಮಾಡಿದ್ದರು. ಇದಕ್ಕೆ ಪಕ್ಷದ ಇತರೆ ಮುಖಂಡರೂ ಸಹಮತ ಸೂಚಿಸಿದ್ದರು.
ವರ್ಗಾವಣೆಗೆ ಕಾರಣ: ಜಿಲ್ಲಾ ರಕ್ಷಣಾಧಿಕಾರಿಗಳ ವರ್ಗಾವಣೆಗೆ ಒಂದಲ್ಲ, ಹಲವು ಕಾರಣಗಳನ್ನು ಕಾಂಗ್ರೆಸ್ ನಾಯಕರು ನೀಡಿದ್ದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ದತ್ತಪೀಠದಲ್ಲಿ ದತ್ತಜಯಂತಿ ಹಾಗೂ ಶೋಭಾಯಾತ್ರೆ ಶಾಂತ ರೀತಿಯಲ್ಲಿ ನಡೆಯುತ್ತಿತ್ತು. ಆದರೆ, ಇತ್ತೀಚೆಗೆ ದತ್ತಪೀಠದಲ್ಲಿ ದತ್ತಜಯಂತಿ ವೇಳೆಯಲ್ಲಿ ದತ್ತಮಾಲಾಧಾರಿಗಳು ಉರ್ದು ಭಾಷೆಯಲ್ಲಿರುವ ಅಕ್ಷರಗಳನ್ನು ಅಳಿಸಿ ಹಾಕಿದ್ದಾರೆ. ದತ್ತಪೀಠದ ನಿಷೇಧಿತ ಪ್ರದೇಶದೊಳಗೆ ಅತಿಕ್ರಮ ಪ್ರವೇಶ ಮಾಡಲು ಯತ್ನಿಸಿದ್ದಾರೆ. ಆ ಸಂದರ್ಭದಲ್ಲಿ ಜಿಲ್ಲಾ ರಕ್ಷಣಾಧಿಕಾರಿಗಳು ಸ್ಥಳದಲ್ಲಿಯೇ ಇದ್ದರೂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ ಎಂದು ಹೇಳಿದ್ದರು. ಕಳೆದ ನಾಲ್ಕು ದಿನಗಳ ಹಿಂದೆ ಜಿಲ್ಲಾ ಕೇಂದ್ರದಲ್ಲಿ ದರ್ಗಾವನ್ನು ಅಪವಿತ್ರಗೊಳಿಸಲಾಗಿದ್ದು, ಈ ಸಂದರ್ಭದಲ್ಲಿ ಪೊಲೂಸರು ಮುಸ್ಲಿಂ ಸಮುದಾಯದವರ ಮೇಲೆ ಲಾಠಿ ಪ್ರಹಾರ ಮಾಡಿರುವ ಜತೆಗೆ, ದರ್ಗಾದೊಳಗೆ ಶೂ ಕಾಲಿನಲ್ಲಿಯೇ ನುಗ್ಗಿ ಅಲ್ಲಿದ್ದವರನ್ನು ಮನಬಂದಂತೆ ಥಳಿಸಿದ್ದಾರೆ. ಇದು, ಜಿಲ್ಲಾ ಪೊಲೀಸ್ ಇಲಾಖೆ ವೈಫಲ್ಯತೆಯನ್ನು ತೋರಿಸುತ್ತದೆ ಎಂಬ ಕಾರಣವನ್ನು ನೀಡಿದ್ದರು. ಜಿಲ್ಲಾ ರಕ್ಷಣಾಧಿಕಾರಿಗಳು ವರ್ಗಾವಣೆಯಾಗಿದ್ದಾರೆ.
ಮುಂದಿನ ದಿನಗಳಲ್ಲಿ ಚಿಕ್ಕಮಗಳೂರು ನಗರ ವೃತ್ತ ನಿರೀಕ್ಷಕರು ಹಾಗೂ ಟೌನ್ ಪೊಲೀಸ್ ಠಾಣೆ ಸಬ್ ಇನ್ಸ್ಸ್ಪೆಕ್ಟರ್ ವರ್ಗಾವಣೆಯಾಗುವ ಸಾಧ್ಯತೆ ಹೆಚ್ಚಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

