ಮುಷ್ಕರ: ಮರಣೋತ್ತರ ಪರೀಕ್ಷೆಗೆ ವೈದ್ಯರ ಒಪ್ಪಿಗೆ
ಚಿಕ್ಕಮಗಳೂರು: ತುರ್ತು ಸೇವೆಯನ್ನೂ ಕೈ ಬಿಟ್ಟು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಮುಷ್ಕರವನ್ನು ಸರ್ಕಾರಿ ವೈದ್ಯರು ಭಾನುವಾರ ತುಸು ಸಡಿಲಗೊಳಿಸಿ ಮರಣೋತ್ತರ ಪರೀಕ್ಷೆ ನಡೆಸಿದರು. ಆದರೆ, ಸೋಮವಾರ ಯಾವುದೇ ಕೆಲಸವನ್ನೂ ಮಾಡುವುದಿಲ್ಲ ಎಂದು ವೈದ್ಯರು ಕಡ್ಡಿ ತುಂಡಾಗುವ ರೀತಿಯಲ್ಲಿ ಹೇಳಿದ್ದಾರೆ.
ರೋಗಿಗಳಿಗೆ ತುಂಬಾ ತೊಂದರೆಯಾಗುತ್ತಿರುವು ಹಿನ್ನೆಲೆಯಲ್ಲಿ ಜಿಲ್ಲಾ ಆಸ್ಪತ್ರೆಯ ಸರ್ಜನ್ ಡಾ. ಒ.ಜಿ. ಪ್ರಕಾಶ್ ಭಾನುವಾರ ವೈದ್ಯರೊಂದಿಗೆ ಸಮಾಲೋಚನೆ ನಡೆಸಿ, ಮುಷ್ಕರವನ್ನು ಕೈಬಿಡುವಂತೆ ಮನವಿ ಮಾಡಿದರು. ಆದರೆ, ರಾಜ್ಯಮಟ್ಟದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಮುಷ್ಕರಕ್ಕೆ ಕರೆ ನೀಡಿದ್ದರಿಂದ ಸ್ಥಳೀಯವಾಗಿ ಯಾವುದೇ ತೀರ್ಮಾನ ಕೈಗೊಳ್ಳಲಾಗದು ಎಂದು ವೈದ್ಯರು ತಮ್ಮ ಪರಿಸ್ಥಿತಿಯನ್ನು ಮನವರಿಕೆ ಮಾಡಿದರು. ಕೊನೆಯಲ್ಲಿ ಶವಗಳ ಮರಣೋತ್ತರ ಪರೀಕ್ಷೆಯನ್ನು ನಡೆಸಲು ಒಪ್ಪಿಕೊಂಡು, ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗೆ ಬಂದಿದ್ದ ಶವಗಳನ್ನು ಮರಣೋತ್ತರ ಪರೀಕ್ಷೆ ನಡೆಸಿ ಕಳುಹಿಸಿದರು.
ಶವಗಾರದ ಮುಂದೆ ಜನ: ವೈದ್ಯರ ಮುಷ್ಕರದಿಂದಾಗಿ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗೆ ಬರುವ ರೋಗಿಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದ್ದು, ಖಾಸಗಿ ಆಸ್ಪತ್ರೆಗಳತ್ತ ಮುಖ ಮಾಡುತ್ತಿದ್ದಾರೆ. ಇಡಿ ಆಸ್ಪತ್ರೆ ಬಿಕೋ ಎನ್ನುತ್ತಿದೆ.
ಆದರೆ, ಶವಗಾರದ ಮುಂದೆ ಬಹಳಷ್ಟು ಜನರಿದ್ದರು. ಶವಗಳ ವಾರಸುದಾರರು, ಮರಣೋತ್ತರ ಪರೀಕ್ಷೆ ನಡೆಸಿ, ಶವ ಸಂಸ್ಕಾರ ನಡೆಸಲು ಕಾದು ಕುಳಿತಿದ್ದರು.
ಭೇಟಿ: ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಭಾನುವಾರದಂದು ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಮುಷ್ಕರ ಕೈಬಿಡುವಂತೆ ವೈದ್ಯರಿಗೆ ಮನವಿ ಮಾಡಿದರು.
ಬಿಜೆಪಿ ನಗರಾಧ್ಯಕ್ಷ ಕೋಟೆ ರಂಗನಾಥ್ ಜಿಲ್ಲಾ ಸರ್ಜನ್ ಡಾ. ಒ.ಜಿ. ಪ್ರಕಾಶ್ ಹಾಗೂ ಆಸ್ಪತ್ರೆಯ ವೈದ್ಯರನ್ನು ಭೇಟಿ ಮಾಡಿ, ಜನರಿಗೆ ಆಗುತ್ತಿರುವ ಅನಾನುಕೂಲತೆಯನ್ನು ಮನವರಿಕೆ ಮಾಡಿ ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಎಲ್. ಮೂರ್ತಿ ಅವರು ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ಇಲಾಖೆಯವರದ್ದು ಅಗತ್ಯ ತುರ್ತು ಸೇವೆ. ಈ ರೀತಿಯಲ್ಲಿ ಮುಷ್ಕರ ನಡೆಸುವುದರಿಂದ ರೋಗಿಗಳಿಗೆ ಬಹಳ ತೊಂದರೆಯಾಗಲಿದೆ. ಆರೋಗ್ಯ ಇಲಾಖೆ ಮುಷ್ಕರ ಕೈಬಿಡಬೇಕು. ಸರ್ಕಾರವೂ ಇವರ ಬೇಡಿಕೆ ಈಡೇರಿಸಲು ಸ್ಪಂದಿಸಬೇಕು ಎಂದು ಆಗ್ರಹಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

