ಚಿಕ್ಕಮಗಳೂರು

ವೇತನ ತಾರತಮ್ಯ: ಶಿಕ್ಷಕರ ಪ್ರತಿಭಟನೆ

Published On :

ಚಿಕ್ಕಮಗಳೂರು: ಶಿಕ್ಷಕರ, ಉಪನ್ಯಾಸಕರ ವೇತನ ತಾರತಮ್ಯ ನಿವಾರಣೆ ಮಾಡುವಂತೆ ಆಗ್ರಹಿಸಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೇತೃತ್ವದಲ್ಲಿ ಶಿಕ್ಷಕರು  ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಮೂಲ ವೇತನ: ಸಂಘದ ಜಿಲ್ಲಾಧ್ಯಕ್ಷ ಬಿ. ದೇವರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಕೆ.ಪಿ.  ಹೊನಕೇರಿ ಅವರಿಗೆ ಮನವಿ ಸಲ್ಲಿಸಲಾಯಿತು. ಕೇಂದ್ರ ಸರ್ಕಾರ ಹಾಗೂ ನೆರೆಯ ರಾಜ್ಯ ಸರ್ಕಾರಗಳಿಗೆ ಹೋಲಿಕೆ ಮಾಡಿದಾಗ ಪ್ರಾಥಮಿಕ ಶಾಲಾ ಶಿಕ್ಷಕರು, ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರು ಕಡಿಮೆ ಮೂಲ ವೇತನ ಪಡೆಯುತ್ತಿದ್ದಾರೆ.
ತಾರತಮ್ಯ: ಇದೇ ರಾಜ್ಯದ ಬೇರೆ ಇಲಾಖೆಯ ಇತರೆ ನೌಕರರಿಗಿಂತ ಶಿಕ್ಷಕರು, ಉಪನ್ಯಾಸಕರು ಕಡಿಮೆ ವೇತನ ಪಡೆಯುತ್ತಿದ್ದಾರೆ. ಈ ವೇತನ ತಾರತಮ್ಯ ನಿವಾರಣೆ ಮಾಡುವಂತೆ ಹಾಗೂ ಶಿಕ್ಷಕರಿಗೆ, ಉಪನ್ಯಾಸಕರಿಗೆ ನೀಡುವ ವಿಶೇಷ ವೇತನವನ್ನು ಮೂಲ ವೇತನದಲ್ಲಿ ವಿಲೀನಗೊಳಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ವಿಶೇಷ ವೇತನ: ರಾಜ್ಯ ಸರ್ಕಾರ ಆಯವ್ಯಯ ಮಂಡನೆ ಸಂದರ್ಭದಲ್ಲಿ ಶಿಕ್ಷಕರ, ಉಪನ್ಯಾಸಕರ ವೇತನ ತಾರತಮ್ಯ ನಿವಾರಣೆ ಮತ್ತು ಮೂಲ ವೇತನದಲ್ಲಿ ವಿಶೇಷ ವೇತನ ವಿಲೀನಗೊಳಿಸುವ ಬಗ್ಗೆ ಪ್ರಸ್ತಾಪ ಮಾಡದೇ ಇರುವುದರಿಂದ ಸಮಸ್ತ ಶಿಕ್ಷಕ, ಉಪನ್ಯಾಸಕ ಸಮುದಾಯಕ್ಕೆ ನಿರಾಶೆಯಾಗಿದೆ. ಸರ್ಕಾರ ತಕ್ಷಣ ನ್ಯಾಯ ದೊರಕಿಸಿಕೊಡಬೇಕು ಎಂದು ಆಗ್ರಹಿಸಿದ್ದಾರೆ.
ಬಾಡಿಗೆ ಭತ್ಯೆ: ಕೇಂದ್ರ ಸರ್ಕಾರದ ಮಾದರಿಯಲ್ಲಿ ಮನೆ ಬಾಡಿಗೆ ಭತ್ಯೆ, ನಗರ ಭತ್ಯೆ ಹೆಚ್ಚಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಆ ಪ್ರಕಾರ 6ನೇ ವೇತನ ಸಮಿತಿಯ ಶಿಫಾರಸ್ಸುಗಳನ್ನು ಸರ್ಕಾರ ಅನುಷ್ಠಾನಕ್ಕೆ ತರುವ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮನೆ ಬಾಡಿಗೆ ಭತ್ಯೆ ಮತ್ತು ನಗರ ಭತ್ಯೆಗಳನ್ನು 2001ರ ಜನಗಣತಿ ಆಧಾರದ ಮೇಲೆ  ಪುನರ್ ವರ್ಗೀಕರಿಸಿ 2012ರ ಏಪ್ರಿಲ್ 1 ರಿಂದ ಜಾರಿಗೆ ಬರುವಂತೆ ಪರಿಷ್ಕರಿಸಲಾಗಿತ್ತು. ಆದರೆ, ಈ ಬಾರಿ ಆಯವ್ಯಯ ಮಂಡನೆಯ ಸಂದರ್ಭದಲ್ಲಿ ಕೇವಲ ಬೆಂಗಳೂರು ನಗರಕ್ಕೆ ಈಗಿರುವ ಮನೆ ಬಾಡಿಗೆ ಭತ್ಯೆಯನ್ನು ಶೇ. 25 ರಿಂದ 30ಕ್ಕೆ ಹೆಚ್ಚಿಸಲಾಗಿದೆ. ಇದರಿಂದ ಬೆಂಗಳೂರು ನಗರದ ನೌಕರರ ಸಮುದಾಯಕ್ಕೆ ಮಾತ್ರ ಅನುಕೂಲವಾಗಿದೆ. ಆದರೆ, ಗ್ರಾಮೀಣ ಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 5 ಲಕ್ಷ ಶಿಕ್ಷಕ ನೌಕರರನ್ನು ಸರ್ಕಾರ ಕಡೆಗಣಿಸಿದೆ ಎಂದು ಹೇಳಿದ್ದಾರೆ.
ಕಡೆಗಣಿಸಲಾಗಿದೆ: ಗ್ರಾಮೀಣ ಭಾಗದಲ್ಲಿ ಎಷ್ಟೇ ತೊಂದರೆ ಬಂದರೂ ಅವೆಲ್ಲವನ್ನು ಎದುರಿಸಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕ ನೌಕರರ ಸಮುದಾಯಕ್ಕೆ ಹೆಚ್ಚಿನ ಸೌಲಭ್ಯ ನೀಡುವ ಕಾರ್ಯವನ್ನು ಸರ್ಕಾರ ಮಾಡಬೇಕಾಗಿತ್ತು.
ಆದರೆ, ಮನೆ ಬಾಡಿಗೆ ಭತ್ಯೆ ನೀಡುವ ಸಂದರ್ಭದಲ್ಲಿ ಗ್ರಾಮೀಣ, ಪಟ್ಟಣ  ಪ್ರದೇಶಗಳಲ್ಲಿ ಕಾರ್ಯ ಮಾಡುವ ಶಿಕ್ಷಕರನ್ನು ಕಡೆಗಣಿಸಲಾಗಿದೆ. ಕೇಂದ್ರ ಸರ್ಕಾರ ತನ್ನ ಅಧೀನದಲ್ಲಿ ಬರುವ ನೌಕರರಿಗೆ ಶೇ. 30, 20, 10 ರಷ್ಟು ಮನೆ ಬಾಡಿಗೆ ಭತ್ಯೆಯನ್ನು ನೀಡಿ ಸಮಾನತೆಯನ್ನು ಕಾಪಾಡಿದೆ. ರಾಜ್ಯ ಸರ್ಕಾರ ಬೆಂಗಳೂರಿನಲ್ಲಿ ಕಾರ್ಯ ಮಾಡುವ ನೌಕರರಿಗೆ ಕೇಂದ್ರ ಸರ್ಕಾರದ ಮಾದರಿಯಲ್ಲಿ ಶೇ. 30 ರಷ್ಟು ಮನೆ ಬಾಡಿಗೆ ಭತ್ಯೆ ನೀಡಿದೆ. ಇದೇ ರೀತಿ ಗ್ರಾಮೀಣ, ಪಟ್‌ಠಣ ಪ್ರದೇಶಗಳ ಶಿಕ್ಷಕರಿಗೆ ಶೇ. 20 ಮತ್ತು ಶೇ. 10 ರಷ್ಟು ಮನೆ ಬಾಡಿಗೆ ಭತ್ಯೆ  ನೀಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಶಿಕ್ಷಕರ ಸಂಘದ ಪದಾಧಿಕಾರಿಗಳಾದ ಎಂ.ಡಿ. ಸುದರ್ಶನ್, ಕೆ.ಎಸ್. ಮಂಜುನಾಥ ಭಟ್, ಕೆ.ಆರ್. ಪ್ರಭಾಕರ್, ಎಸ್.ಟಿ. ರಾಜಪ್ಪ ಹಾಗೂ ಶಿಕ್ಷಕರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.