ಗುಣಮಟ್ಟದ ಶಿಕ್ಷಣ ನೀಡಿದರೆ ದೇಶ ಅಭಿವೃದ್ಧಿ
ಕೊಪ್ಪ: ಶಿಕ್ಷಣ ವ್ಯವಸ್ಥೆ ಗುಣಮಟ್ಟದಿಂದ ಕೂಡಿದ್ದರೆ ಮಾತ್ರ ದೇಶ ಪ್ರಗತಿ ಪಥದಲ್ಲಿ ಸಾಗಲು ಸಾಧ್ಯ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಅಯವ್ಯಯದಲ್ಲಿ ಶಿಕ್ಷಣಕ್ಕಾಗಿ 20 ಸಾವಿರ ಕೋಟಿ ಮೀಸಲಿರಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಡಿ.ಎನ್. ಜೀವರಾಜ್ ಹೇಳಿದರು.
ಬಾಳಗಡಿ ಒಕ್ಕಲಿಗರ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ತಾಲೂಕಿನ ಸಮಾಜ ಕಲ್ಯಾಣ, ಬಿಸಿಎಂ, ಮೊರಾರ್ಜಿ ವಸತಿ ಶಾಲೆ ನಿಲಯದ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರ್ಕಾರಿ ಶಾಲೆಗಳ ಬಗ್ಗೆ ಕೀಳರಿಮೆ ಬೇಡ. ಮಾಜಿ ರಾಷ್ಟ್ರಪತಿ ಡಾ. ಅಬ್ದುಲ್ ಕಲಾಂ, ಇನ್ಫೋಸಿಸ್ ನಾರಾಯಣಮೂರ್ತಿ, ಹೃದಯ ತಜ್ಞ ಡಾ. ದೇವಿಪ್ರಸಾದ್ ಶೆಟ್ಟಿಯಂತಹ ಪ್ರತಿಭಾವಂತರು ಸರ್ಕಾರಿ ಶಾಲೆಗಳಲ್ಲೇ ಓದಿದ್ದು ಎಂದು ಹೇಳಿದರು.
ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಸರ್ಕಾರಿ ವಸತಿ ನಿಲಯ ವಿದ್ಯಾರ್ಥಿಗಳ ಮಾಸಿಕ ವೆಚ್ಚವನ್ನು ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ 430 ರಿಂದ 950ಕ್ಕೆಸ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ 500 ರಿಂದ 1000ಕ್ಕೆ, ಆಶ್ರಮ ಶಾಲೆಗಳ ವಿದ್ಯಾರ್ಥಿಗಳಿಗೆ 300ರಿಂದ 700ಕ್ಕೆ ಹಾಗೂ ಮೊರಾರ್ಜಿ ಶಾಲೆಗಳ ವಿದ್ಯಾರ್ಥಿಗಳಿಗೆ 500ರಿಂದ 950ಕ್ಕೆ ಹೆಚ್ಚಿಸಲಾಗಿದೆ ಎಂದು ಅವರು ತಿಳಿಸಿದರು.
ಕೊಪ್ಪ, ಶೃಂಗೇರಿ, ಎನ್.ಆರ್. ಪುರ, ಬಾಳೆಹೊನ್ನೂರು, ನೆಮ್ಮಾರು ಕೇಂದ್ರಗಳಲ್ಲಿ 5.6 ಕೋಟಿ ವೆಚ್ಚದಲ್ಲಿ ಸುಸಜ್ಜಿತ ವಸತಿ ನಿಲಯ ಕಟ್ಟಡ ಕಟ್ಟಿಸಲಾಗಿದೆ. ಕೊಪ್ಪಕ್ಕೆ ಅಟಲ್ ಬಿಹಾರಿ ವಾಜಪೇಯಿ ಮಾದರಿ ವಸತಿ ಶಾಲೆ, ಶೃಂಗೇರಿ ಕ್ಷೇತ್ರಕ್ಕೆ ಪಾಲಿಟೆಕ್ನಿಕ್, ಜಿಲ್ಲೆಗೆ ಮೆಡಿಕಲ್ ಕಾಲೇಜು ಮಂಜೂರಾಗಿದೆ ಎಂದರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ರೇಖಾ ಹುಲಿಯಪ್ಪಗೌಡ, ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಶೃಂಗೇರಿ ಶಿವಣ್ಣ, ಸದಸ್ಯೆ ಅನ್ನಪೂರ್ಣ, ತಾಪಂ ಅಧ್ಯಕ್ಷೆ ಪದ್ಮಾವತಿ ರಮೇಶ್, ಉಪಾಧ್ಯಕ್ಷ ರಮೇಶ್ ಬೆಳಗೋಳ, ಸ್ಥಾಯಿ ಸಮಿತಿ ಅಧ್ಯಕ್ಷ ಎಚ್.ಡಿ. ಜಂಯತ್, ಸದಸ್ಯರಾದ ಪೂರ್ಣಚಂದ್ರ, ಪ್ರೇಮಾ ದಾಮೋದರ್, ಸುಭದ್ರಮ್ಮ, ಲಲಿತಮ್ಮ, ಬಿಂತ್ರವಳ್ಳಿ ಗ್ರಾಪಂ ಅಧ್ಯಕ್ಷೆ ಪ್ರಿಯಾ, ಉಪಾಧ್ಯಕ್ಷ ಐಸಾಬಿ, ಸದಸ್ಯರಾದ, ಮಂಜೇಶ್, ರತ್ನಮ್ಮ, ಶಾರದ, ಲ್ಯಾಂಪ್ ವ್ಯವಸ್ಥಾಪಕ ಸೀತರಾಮ್ ಮುಂತಾದವರು ಉಪಸ್ಥಿತರಿದ್ದರು.
ಬಿಜೆಪಿ ಚುನಾವಣೆ ಎದುರಿಸಲು ಸನ್ನದ್ಧ
ನರಸಿಂಹರಾಜಪುರರ: 2011ರ ಜನಗಣತಿ ಪ್ರಕಾರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆದಿದ್ದರೆ ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಸೇರಿದಂತೆ ಎಲ್ಲಾ ವರ್ಗದವರಿಗೂ ಸಾಮಾಜಿಕ ನ್ಯಾಯ ಸಿಗುತ್ತಿತ್ತು. ಆದ್ದರಿಂದಲೇ ಸದನದಲ್ಲಿ ಎಲ್ಲಾ ಪಕ್ಷದವರೂ ಚುನಾವಣೆ ಮುಂದೂಡಬೇಕು ಎಂದು ತೀರ್ಮಾನ ತೆಗೆದುಕೊಂಡಿದ್ದವು ಎಂದು ರಾಜ್ಯ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಡಿ.ಎನ್. ಜೀವರಾಜ್ ತಿಳಿಸಿದರು.
ಭಾನುವಾರ ಕಟ್ಟಿನಮನೆಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಯಾವಾಗ ಚುನಾವಣೆ ಎದುರಾದರೂ ಬಿಜೆಪಿ ಚುನಾವಣೆ ಎದುರಿಸಲು ಸನ್ನದ್ಧವಾಗಿದೆ. ಬಿಜೆಪಿ ಸ್ಥಳೀಯ ಚುನಾವಣೆಯನ್ನು ಸ್ವಾಗತಿಸುತ್ತದೆ. ಶೃಂಗೇರಿ ಕ್ಷೇತ್ರದಲ್ಲಿ 3 ಪಟ್ಟಣ ಪಂಚಾಯ್ತಿಯಲ್ಲಿ ಚುನಾವಣೆ ನಡೆಯಲಿದೆ.
ಸರ್ಕಾರದ ಸಾಧನೆಗಳ ಆಧಾರದ ಮೇಲೆ ಮತ ಕೇಳಲಿದ್ದೇವೆ. ಪಟ್ಟಣ ಪಂಚಾಯ್ತಿಯ ಅಭ್ಯರ್ಥಿಗಳ ಬಗ್ಗೆ ಬಿಜೆಪಿ ಪಕ್ಷದ ಮುಖಂಡರು ಕುಳಿತು ಚರ್ಚೆ ನಡೆಸಿ ತೀರ್ಮಾನಿಸಲಿದ್ದಾರೆ ಎಂದರು.
ಆನ್ಲೈನ್ ಅರ್ಜಿ ಪ್ರಾರಂಭ: ಹೊಸ ಪಡಿತರ ಚೀಟಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೋಮವಾರದಿಂದ ಪ್ರಾರಂಭಿಸಲಿದ್ದೇವೆ. ಸಾರ್ವಜನಿಕರು ಇದರ ಉಪಯೋಗ ಪಡೆದುಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದರು.
ಏ.1ರಿಂದ ರು. 2ಕ್ಕೆ ಅಕ್ಕಿ: ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯಿಂದ ಏ.1ರಿಂದ ಬಿಪಿಎಲ್ ಕಾರ್ಡ್ದಾರರಿಗೆ ರು. 2ರಲ್ಲಿ ಅಕ್ಕಿ ವಿತರಿಸಲಾಗುತ್ತದೆ. ಎ.ಪಿ.ಎಲ್ ಕಾರ್ಡ್ದಾರರಿಗೆ ರು. 10ಕ್ಕೆ 1 ಕೆ.ಜಿ ಅಕ್ಕಿ ನೀಡಲು ತೀರ್ಮಾನಿಸಲಾಗಿದೆ. ಮುಂದಿನ ದಿನಗಳಲ್ಲಿ ಹಾಸ್ಟೆಲ್ ಮಕ್ಕಳಿಗೂ ಬಯೋ ಮೆಟ್ರಿಕ್ ಜಾರಿಗೆ ತರಲಾಗುವುದು ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

