ಇಂದು ಮುಷ್ಕರ: ಪರ್ಯಾಯ ವ್ಯವಸ್ಥೆ
ಚಿಕ್ಕಮಗಳೂರು: ಬೆಲೆ ಏರಿಕೆ ಹಾಗೂ ವೇತನ ತಾರತಮ್ಯ ವಿರೋಧಿಸಿ ಕಾರ್ಮಿಕ ಸಂಘಟನೆಗಳು ಬುಧವಾರದಿಂದ ಎರಡು ದಿನಗಳ ಕಾಲ ರಾಷ್ಟ್ರ ವ್ಯಾಪಿ ಮುಷ್ಕರಕ್ಕೆ ಕರೆ ನೀಡಿದ್ದು, ಈ ಮುಷ್ಕರ ಜನ ಜೀವನದ ಮೇಲೆ ದುಷ್ಪರಿಣಾಮ ಬೀರದಂತೆ ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ.
ಮುಂಜಾಗರೂಕತೆ: ಮುಷ್ಕರದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ವಿ. ಯಶವಂತ್ ಮಾತನಾಡಿ, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಮುಂಜಾಗರೂಕತೆ ಕ್ರಮವಹಿಸಬೇಕು ಎಂದು ತಿಳಿಸಿದರು.
ಕೆಎಸ್ಆರ್ಟಿಸಿ ಬಸ್ಸುಗಳ ಸುಗಮ ಸಂಚಾರಕ್ಕೆ ಕೆಎಸ್ಆರ್ಟಿಸಿ ಅಧಿಕಾರಿಗಳು ಪ್ರಯತ್ನಿಸಬೇಕು. ಬಸ್ ಸಂಚಾರ ಸ್ಥಗಿತಗೊಂಡರೆ ಖಾಸಗಿ ಬಸ್ಸುಗಳು ಮತ್ತು ಟೆಂಪೋ, ಟ್ಯಾಕ್ಸಿಗಳನ್ನು ಪ್ರಮುಖ ಮಾರ್ಗಗಳಲ್ಲಿ ಓಡಿಸಿ ಸಾರ್ವಜನಿಕರಿಗೆ ಸಂಚಾರಕ್ಕೆ ಯಾವುದೇ ಅಡಚಣೆಯಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ಸಂಚಾರ ಎಂದಿನಂತೆ: ಕಾರ್ಮಿಕರ ಮುಷ್ಕರಕ್ಕೆ ಬೆಂಬಲ ಸೂಚಿಸಿ ಆಟೋ ಸಂಚಾರವನ್ನು ಸ್ಥಗಿತಗೊಳಿಸಲಾಗುವುದೆಂಬ ಮಾತುಗಳು ಆರಂಭದಲ್ಲಿ ಕೇಳಿ ಬಂದಿದ್ದವು.
ಆದರೆ, ಈ ಕುರಿತು ಕನ್ನಡಪ್ರಭ ನಗರದ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಅಧ್ಯಕ್ಷ ಕೆ.ಆರ್. ಅನಿಲ್ಕುಮಾರ್ರನ್ನು ಸಂಪರ್ಕಿಸಿದಾಗ ಆಟೋ ಸಂಚಾರ ಎಂದಿನಂತೆ ಇರುತ್ತದೆ. ಇದರಲ್ಲಿ ಯಾವುದೇ ವ್ಯತ್ಯಯ ಇರುವುದಿಲ್ಲ ಎಂದು ಹೇಳಿದ್ದಾರೆ.
ಮುಷ್ಕರಕ್ಕೆ ಬೆಂಬಲ: ಇನ್ನುಳಿದಂತೆ ಕೆಎಸ್ಆರ್ಟಿಸಿ ಬಸ್ಸಿನ ಚಾಲಕರು ಮತ್ತು ನಿರ್ವಾಹಕರು ಮುಷ್ಕರಕ್ಕೆ ಬೆಂಬಲ ಸೂಚಿಸಿ, ಕೆಲಸಕ್ಕೆ ಹಾಜರಾಗದೆ ಇದ್ದಲ್ಲಿ ಕೆಎಸ್ಆರ್ಟಿಸಿ ಮಾರ್ಗದಲ್ಲಿ ಖಾಸಗಿ ಬಸ್ಗಳನ್ನು ಓಡಿಸಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಅದರಂತೆ, ಹಾಲಿ ಇರುವ ಮಾರ್ಗಗಳ ಜತೆಗೆ ಕೆಎಸ್ಆರ್ಟಿಸಿ ಮಾರ್ಗದಲ್ಲೂ ಖಾಸಗಿ ಬಸ್ಗಳನ್ನು ಓಡಿಸಲಾಗುವುದು ಎಂದು ಜಿಲ್ಲಾ ಖಾಸಗಿ ಬಸ್ ಮಾಲೀಕರ ಸಂಘದ ಕಾರ್ಯದರ್ಶಿ ಎಚ್.ಆರ್. ಷಣ್ಮುಖ ತಿಳಿಸಿದ್ದಾರೆ.
ಎರಡು ದಿನಗಳ ಕಾಲ ನಡೆಯಲಿರುವ ಈ ಮುಷ್ಕರದಲ್ಲಿ ಕಾರ್ಮಿಕರು ಭಾಗವಹಿಸುವುದರಿಂದ ಖಾಸಗಿ ಬಸ್ಗಳ ಕಾರ್ಮಿಕರು ಭಾಗವಹಿಸದಂತೆ ಮನವೊಲಿಸುವ ಕೆಲಸ ನಡೆದಿದೆ ಎಂದು ಹೇಳಿದ್ದಾರೆ.
ಎರಡು ದಿನಗಳ ಕಾಲದ ಮುಷ್ಕರಕ್ಕೆ ಬ್ಯಾಂಕ್ ನೌಕರರು ಬೆಂಬಲ ಸೂಚಿಸಿದ್ದು, ಮಂಗಳವಾರ ಸಂಜೆಯೇ ಬ್ಯಾಂಕ್ ನೌಕರರಿಗೆ ಸಂಘದಿಂದ ಮಾಹಿತಿ ರವಾನೆಯಾಗಿದೆ. ಅದುದರಿಂದ ಬುಧವಾರ ಮತ್ತು ಗುರುವಾರದಂದು ರಾಷ್ಟ್ರೀಕೃತ ಬ್ಯಾಂಕ್ಗಳು ಬಂದ್ ಆಗಲಿವೆ.
ಬಸ್ ಬಂದ್: ಕಾರ್ಮಿಕ ಸಂಘಟನೆಗಳ ಮುಷ್ಕರಕ್ಕೆ ಚಿಕ್ಕಮಗಳೂರು ಕೆಎಸ್ಆರ್ಟಿಸಿ ನೌಕರರು ಬೆಂಬಲ ಸೂಚಿಸಿದ್ದಾರೆ.
ಕೆಲಸಕ್ಕೆ ಹಾಜರಾಗದೆ ಇದ್ದರೆ ಪ್ರಯಾಣಿಕರಿಗೆ ತುಂಬಾ ತೊಂದರೆಯಾಗಲಿದೆ ಎಂಬುದನ್ನು ಕಾರ್ಮಿಕರಿಗೆ ತಿಳಿಸಿ ಮನವೊಲಿಸುವ ಕೆಲಸ ನಡೆದಿದೆ ಎಂದು ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಎಸ್.ಕೆ. ಹಳ್ಳಿ ತಿಳಿಸಿದ್ದಾರೆ.
ಮುಷ್ಕರಕ್ಕೆ ಎರಡು ದಿನಗಳ ಕರೆ ನೀಡಲಾಗಿದೆ.
ಎರಡು ದಿನಗಳ ಬದಲಿಗೆ ಒಂದೇ ದಿನ ಅಂದರೆ ಬುಧವಾರದಂದು ನೌಕರರು ಕೆಲಸಕ್ಕೆ ಹಾಜರಾಗುವುದಿಲ್ಲ ಎಂದು ಚಿಕ್ಕಮಗಳೂರು ವಿಭಾಗದ ಕೆಎಸ್ಆರ್ಟಿಸಿ ಸ್ಟಾಪ್ ಅಂಡ್ ವರ್ಕರ್ಸ್ ಯೂನಿಯನ್ ಅಧ್ಯಕ್ಷ ಸಾತಿ ಸುಂದರೇಶ್ ತಿಳಿಸಿದ್ದಾರೆ.
ಅದುದರಿಂದ ಬುಧವಾರ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಚಿಕ್ಕಮಗಳೂರು ಜಿಲ್ಲಾ ಕೇಂದ್ರದಿಂದ ಸರ್ಕಾರಿ ಬಸ್ಗಳ ಸಂಚಾರ ಇರುವುದಿಲ್ಲ.
ಈ ಮಾರ್ಗದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಖಾಸಗಿ ಬಸ್ಗಳು ಸಂಚರಿಸಲಿದೆ.
ಮುಷ್ಕರ ವೇಳೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪೊಲೀಸ್ ಇಲಾಖೆ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಆಯಾಕಟ್ಟಿನ ಸ್ಥಳಗಳಲ್ಲಿ ಸ್ಥಳೀಯ ಪೊಲೀಸರನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜನೆ ಮಾಡಲಾಗಿದೆ.
ಇದಕ್ಕಾಗಿ ಜಿಲ್ಲಾ ಸಶಸ್ತ್ರ ಪೊಲೀಸರನ್ನು ಬಳಸಿಕೊಳ್ಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

