ಚಿಕ್ಕಮಗಳೂರು

ನಾಳೆ ಪಲ್ಸ್ ಪೋಲಿಯೋ ಹಾಕುವ ಕಾರ್ಯಕ್ರಮ

Published On :

ಚಿಕ್ಕಮಗಳೂರು: ಐದು ವರ್ಷದೊಳಗಿನ ಮಕ್ಕಳಿಗೆ 2ನೇ ಸುತ್ತಿನ ಪಲ್ಸ್ ಪೋಲಿಯೋ ಹನಿ ಹಾಕಿಸುವ ಕಾರ್ಯಕ್ರಮ ಫೆ. 24ರಂದು ನಡೆಯಲಿದೆ ಎಂದು ಜಿಲ್ಲಾಧಿಕಾರಿ ವಿ. ಯಶವಂತ್ ತಿಳಿಸಿದ್ದಾರೆ.
ತಮ್ಮ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ 2ನೇ ಸುತ್ತಿನ ಪಲ್ಸ್ ಪೋಲಿಯೋ ಚಾಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಜಿಲ್ಲೆಯಲ್ಲಿ ಪೋಲಿಯೋ ಹಾಕಿಸಲು 817 ಬೂತ್‌ಗಳನ್ನು ತೆರೆಯಲಾಗುತ್ತಿದೆ. 188 ಬೂತ್ ಪರಿವೀಕ್ಷಕರನ್ನು ನೇಮಿಸಲಾಗಿದ್ದು, 62 ಸಂಚಾರಿ ಬೂತ್‌ಗಳನ್ನು ತೆರಯಲಾಗುವುದು ಎಂದು ಹೇಳಿದರು.
ಜಿಲ್ಲೆಯಲ್ಲಿ 2ನೇ ಸುತ್ತಿನಲ್ಲಿ 1,06,354 ಮಕ್ಕಳಿಗೆ ಲಸಿಕೆ ಹಾಕಿಸುವ ಗುರಿ ಹೊಂದಲಾಗಿದ್ದು, ಜಿಲ್ಲೆಯಲ್ಲಿ 355 ಅತಿ ಪ್ರಾಮುಖ್ಯ ಪ್ರದೇಶಗಳನ್ನು ಗುರುತಿಸಲಾಗಿದ್ದು, ಇಲ್ಲಿ ಸಂಚಾರಿ ಬೂತ್‌ಗಳ ಮೂಲಕ ಪೋಲಿಯೋ ಲಸಿಕೆ ಹಾಕಿಸಲಾಗುವುದು ಎಂದು ಹೇಳಿದರು.
ಶೇ. 99ರಷ್ಟು ಪ್ರಗತಿ: ಮೊದಲನೇ ಸುತ್ತಿನ ಲಸಿಕೆ ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಶೇ. 99.86 ಪ್ರಗತಿ ಸಾಧಿಸಲಾಗಿದೆ. ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕರಪತ್ರ, ಜಾಥಾ ಹಾಗೂ ವಾಹನ ಮೂಲಕ ವ್ಯಾಪಕ ಪ್ರಚಾರ ಮಾಡುವಂತೆ ಯಶವಂತ್ ಆರೋಗ್ಯ ಇಲಾಖೆಗೆ ಸೂಚಿಸಿದರು.
ಲಸಿಕಾ ಕಾರ್ಯಕ್ರಮದಲ್ಲಿ ಅಂಗನವಾಡಿ, ಆಶಾ ಕಾರ್ಯಕರ್ತೆಯರನ್ನು ತೊಡಗಿಸಿಕೊಳ್ಳುವಂತೆ ಸೂಚಿಸಿದ ಅವರು, ಇದೊಂದು ರಾಷ್ಟ್ರೀಯ ಕಾರ್ಯಕ್ರಮವಾಗಿದೆ. ಎಲ್ಲಾ ಇಲಾಖೆಯವರು ತಮಗೆ ವಹಿಸಿರುವ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಿ, ಪಲ್ಸ್ ಪೋಲಿಯೋ ಅಭಿಯಾನದ ಯಶಸ್ವಿಗೆ ಕೈಜೋಡಿಸಬೇಕು. ಸಾರ್ವಜನಿಕರು ತಮ್ಮ 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಫೆ. 24ರಂದು ಲಸಿಕಾ ಕೇಂದ್ರಕ್ಕೆ ಬಂದು ಪೋಲಿಯೋ ಹನಿ ಹಾಕಿಸಬೇಕು ಎಂದು ಅವರು ಕರೆ ನೀಡಿದರು.
ಸಭೆಯಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ. ಶಿವಶಂಕರ್, ಉಪ ವಿಭಾಗಾಧಿಕಾರಿ ಡಾ. ಪ್ರಶಾಂತ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಬಿ.ವಿ. ನೀರಜ್, ಜಿಲ್ಲಾ ಸರ್ಜನ್ ಡಾ. ಓ.ಜಿ. ಪ್ರಕಾಶ್, ತಾಲೂಕು ಆರೋಗ್ಯಾಧಿಕಾರಿ ಡಾ. ಲೋಕೇಶ್, ವಿವಿಧ ಇಲಾಖೆಗಳ ಅಧಿಕಾರಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ನಾಳೆ ಎನ್.ಆರ್.ಪುರದಲ್ಲಿ
ನರಸಿಂಹರಾಜಪುರ: ಎರಡನೇ ಸುತ್ತಿನ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಫೆ.24ರ ಭಾನುವಾರ ನಡೆಯಲಿದೆ  ಎಂದು ತಾಲೂಕು ವೈದ್ಯಾಧಿಕಾರಿ ಡಾ. ಸೀಮಾ ತಿಳಿಸಿದ್ದಾರೆ.  ತಾಲೂಕಿನಲ್ಲಿ 5 ವರ್ಷದ ಒಳಗಿನ 6300 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ನರಸಿಂಹರಾಜಪುರ ಸರ್ಕಾರಿ ಆಸ್ಪತ್ರೆ ವ್ಯಾಪ್ತಿಯ 2033 ಮಕ್ಕಳು, ಬಾಳೆಹೊನ್ನೂರು ಸರ್ಕಾರಿ ಆಸ್ಪತ್ರೆಯ ವ್ಯಾಪ್ತಿಯ 2062 ಮಕ್ಕಳು, ಮುತ್ತಿನಕೊಪ್ಪ ವ್ಯಾಪ್ತಿಯ 1235 ಮಕ್ಕಳು, ಕಟ್ಟಿನಮನೆ ವ್ಯಾಪ್ತಿಯ 375 ಹಾಗೂ ಮಾಗುಂಡಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ 595 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಒಟ್ಟು 95 ಲಸಿಕಾ ಕೇಂದ್ರಗಳಲ್ಲಿ 19 ಮೇಲ್ವೀಚಾರಕರು ಕೆಲಸ ಮಾಡಲಿದ್ದಾರೆ. 380 ಸಿಬ್ಬಂದಿ ಲಸಿಕಾ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ. ಈ ಹಿಂದೆ ಎಷ್ಟೇ ಬಾರಿ ಲಸಿಕೆ ಹಾಕಿದ್ದರೂ ಮತ್ತೆ ಪೋಷಕರು ತಮ್ಮ 5 ವರ್ಷದೊಳಗಿನ ಮಕ್ಕಳನ್ನು ಕರೆದುಕೊಂಡು ಬಂದು ಲಸಿಕೆ ಹಾಕಿಸಬೇಕು ಎಂದು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.