ಭದ್ರಾ ಮೇಲ್ದಂಡೆ ಯೋಜನೆ ರದ್ದುಗೊಳ್ಳುವ ಸಾಧ್ಯತೆ
ಚಿಕ್ಕಮಗಳೂರು: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆ ವನ್ಯಜೀವಿ ಸಂರಕ್ಷಣಾ ಸಮಿತಿಯ ಅನುಮತಿ ಪಡೆಯದಿರುವುದರಿಂದ ಈ ಯೋಜನೆ ರದ್ದುಗೊಳ್ಳುವ ಸಾಧ್ಯತೆಗಳಿವೆ ಎಂದು ಭದ್ರಾ ಮೇಲ್ದಂಡೆ ಯೋಜನೆ ವಿರೋಧಿ ಹೋರಾಟಗಾರ ಎಚ್.ಎಸ್. ನೀಲಕಂಠಪ್ಪ ಹೇಳಿದ್ದಾರೆ.
ತಡೆಯಾಜ್ಞೆ: ರಾಜ್ಯ ಉಚ್ಚ ನ್ಯಾಯಾಲಯ ಭದ್ರಾ ಮೇಲ್ದಂಡೆ ಯೋಜನೆಗೆ ಮಧ್ಯಂತರ ತಡೆಯಾಜ್ಞೆಯನ್ನು ನೀಡಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಈ ಯೋಜನೆಯ ಸತ್ಯಾಸತ್ಯತೆಯನ್ನು ಪ್ರಶ್ನಿಸಿದ ನ್ಯಾಯಾಧೀಶರು, ಸ್ಥಳೀಯ ರೈತರಿಗೆ ನೀರು ನೀಡದೆ ಸುಮಾರು 400 ಕಿ.ಮೀ. ದೂರದ ಕೋಲಾರ ಮತ್ತು ತುಮಕೂರು ಜಿಲ್ಲೆಗಳಿಗೆ ನೀರು ಹರಿಸುತ್ತಿರುವ ಬಗ್ಗೆ ಅಚ್ಚರಿ ವ್ಯಕ್ತಪಡಿಸಿ, ಈ ಯೋಜನೆಯಿಂದ ಪ್ರಾದೇಶಿಕ ಅಸಮ ತೋಲನೆಯನ್ನು ಉಂಟು ಮಾಡಲಾಗಿದೆ. ಈ ಎರಡು ಜಿಲ್ಲೆಗಳಿಗೆ ಹತ್ತಿರದಲ್ಲೇ ಇರುವ ಕಾವೇರಿ ನೀರನ್ನು ಏಕೆ ಒದಗಿಸಬಾರದೆಂದು ಹೈಕೋರ್ಟ್ ವಿಭಾಗೀಯ ಪೀಠ ಸರ್ಕಾರವನ್ನು ಪ್ರಶ್ನಿಸಿದೆ ಎಂದರು.
ಬೇಜವಾಬ್ದಾರಿತನ: ಆರು ಸಾವಿರ ಕೋಟಿ ರು. ವೆಚ್ಚದ ಈ ಯೋಜನೆಗೆ ಕೇಂದ್ರ ಸರ್ಕಾರದ ಪರಿಸರ ಮತ್ತು ಅರಣ್ಯ ಇಲಾಖೆಯ ಅನುಮತಿ ಪಡೆಯದೆ ಕೆಲಸ ಆರಂಭ ಮಾಡಿರುವುದು ಸರ್ಕಾರದ ಬೇಜವಾಬ್ದಾರಿತನಕ್ಕೆ ಸ್ಪಷ್ಟ ನಿದರ್ಶನ ಎಂದು ಹೇಳಿದ ಅವರು, ಕಳೆದ 4 ವರ್ಷಗಳಿಂದ ಹೋರಾಟ ನಡೆಸಿಕೊಂಡು ಬರಲಾಗಿತ್ತು. ಸರ್ಕಾರದ ಗಮನ ಸೆಳೆದಿದ್ದರೂ ಯಾವುದೇ ಕ್ರಮ ಕೈಗೊಳ್ಳಲು ಸರ್ಕಾರ ವಿಫಲವಾಗಿದ್ದರಿಂದ ನ್ಯಾಯಾಲಯದ ಮೊರೆ ಹೋಗಬೇಕಾಯಿತೆಂದು ಹೇಳಿದರು.
ಭದ್ರಾ ಅಭಯಾರಣ್ಯ ವ್ಯಾಪ್ತಿಯಲ್ಲಿ ಈ ಕಾಮಗಾರಿ ನಡೆಯಬೇಕಿದೆ. ಹುಲಿ ಸಂರಕ್ಷಣಾ ಯೋಜನೆ ಈ ಅಭಯಾರಣ್ಯದೊಳಗೆ ಬರುವುದರಿಂದ ವನ್ಯಜೀವಿ ಸಂರಕ್ಷಣಾ ಇಲಾಖೆ ಅನುಮತಿ ಕಡ್ಡಾಯವಾಗಿದೆ. ಈವರೆಗೂ ಅನುಮತಿ ದೊರೆಯದಿರುವುದು ಯೋಜನೆ ಅನುಷ್ಟಾನ ಸಾಧ್ಯವಿಲ್ಲ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದರು. ಕೇಂದ್ರ ಸರ್ಕಾರದ ಅನುಮತಿ ದೊರೆಯದಿದ್ದರೆ 500 ಕೋಟಿ ರು.ಗಳು ಸರ್ಕಾರದ ಬೊಕ್ಕಸಕ್ಕೆ ನಷ್ಟವಾಗಲಿದೆ ಎಂದು ತಿಳಿಸಿದರು. ಗೋಷ್ಠಿಯಲ್ಲಿ ವೀರಭದ್ರಪ್ಪ, ಷಣ್ಮುಗಪ್ಪ, ಮೆಹಬೂಬ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

