ಚಿಕ್ಕಮಗಳೂರು

ನೂತನ ರೇಲ್ವೆ ಮಾರ್ಗಕ್ಕೆ ಅನುಮೋದನೆ

Published On :

ಚಿಕ್ಕಮಗಳೂರು: ಲೋಕಸಭೆಯಲ್ಲಿ ರೈಲ್ವೆ ಸಚಿವ ಪವನ್‌ಕುಮಾರ್ ಬನ್ಸಾಲ್ ಅವರು ಮಂಗಳವಾರ ಮಂಡಿಸಿದ ರೈಲ್ವೆ ಬಜೆಟ್‌ನಲ್ಲಿ ಚಿಕ್ಕಮಗಳೂರು- ಬೇಲೂರು- ಸಕಲೇಶಪುರ ನೂತನ ರೈಲ್ವೆ ಮಾರ್ಗಕ್ಕೆ ಅನುಮೋದನೆ ನೀಡಲಾಗಿದೆ.
 ಇದು, ಕಾಫಿಯ ತವರೂರಿನ ಬಹು ವರ್ಷಗಳ ಬೇಡಿಕೆ. ಇದಕ್ಕೆ ಈ ವರ್ಷದಲ್ಲಿ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಈ ಕಾಮಗಾರಿಗೆ ಅನುಮೋದನೆ ನೀಡುವ ಜತೆಗೆ ಪ್ರಥಮ ಕಂತಿನಲ್ಲಿ 10 ಕೋಟಿ ರುಪಾಯಿ ಮೀಸಲಿಡಲಾಗಿದೆ.
ಸಂಸದರಿಂದ ಸಂತಸ: ಚಿಕ್ಕಮಗಳೂರು-ಬೇಲೂರು-ಸಕಲೇಶಪುರ ಮಧ್ಯೆ ರೈಲ್ವೆ ಮಾರ್ಗಕ್ಕೆ ರೈಲ್ವೇ ಸಚಿವ ಪವನ್‌ಕುಮಾರ್ ಬನ್ಸಾಲ್ ಅನುಮೋದನೆ ನೀಡಿದ್ದು, ಬಹುದಿನದ ಕನಸು ಈಡೇರುತ್ತಿದೆ ಎಂದು ಲೋಕಸಭಾ ಸದಸ್ಯ ಕೆ. ಜಯಪ್ರಕಾಶ್ ಹೆಗ್ಡೆ ಸಂತಸ ವ್ಯಕ್ತಪಡಿಸಿದ್ದಾರೆ.
ಈ ರೈಲು ಮಾರ್ಗದ ಬಗ್ಗೆ 1978 ರಲ್ಲಿಯೇ ಅಂದಿನ ಪ್ರಧಾನಿ ಇಂದಿರಾಗಾಂಧಿಯವರು ಪ್ರಸ್ತಾವಿಸಿದ್ದರು. 1994 ರಲ್ಲಿ ಅಂದಿನ ಕೇಂದ್ರದ ರೈಲ್ವೆ ಸಚಿವ ಸಿ.ಕೆ. ಜಾಫರ್ ಶರೀಫ್ ಕಡೂರು- ಚಿಕ್ಕಮಗಳೂರು-ಬೇಲೂರು-ಸಕಲೇಶಪುರ ರೈಲ್ವೇ ಯೋಜನೆಯ ಸರ್ವೇ ಕಾರ್ಯಕ್ಕೆ ಚಾಲನೆ ನೀಡಿದ್ದರು. ಈಗ ಕಡೂರು- ಚಿಕ್ಕಮಗಳೂರು ನಡುವಿನ 47 ಕಿ.ಮೀ. ರೈಲ್ವೇ ಮಾರ್ಗದ ಕಾಮಗಾರಿ ಪೂರ್ಣಗೊಂಡಿದ್ದು, ಉದ್ಘಾಟನೆಗೆ ಸಿದ್ಧವಾಗಿದೆ. ಇಂದಿನ ಬಜೆಟ್‌ನಲ್ಲಿ ಬೇಲೂರು-ಸಕಲೇಶಪುರ ಮಾರ್ಗಕ್ಕೆ ಅನುಮೋದನೆ ನೀಡಿರುವುದರಿಂದ ಕಾಮಗಾರಿ ತ್ವರಿತಗತಿಯಲ್ಲಿ ಸಾಗಲಿದೆ ಎಂದು ಸಂಸದರು ತಿಳಿಸಿದ್ದಾರೆ.
 ರಾಜ್ಯದ ರೈಲ್ವೇ ಯೋಜನೆಗಳಿಗೆ ಕರ್ನಾಟಕ ಸರ್ಕಾರ ಶೇ. 50ರಷ್ಟು ಹಣ ಭರಿಸಿ ಮತ್ತು ಮುಕ್ತವಾಗಿ ಭೂಮಿಯನ್ನು ನೀಡುತ್ತಿರುವುದರಿಂದ ರಾಜ್ಯದಲ್ಲಿ ರೈಲು ಯೋಜನೆಗಳನ್ನು ಕಾರ್ಯಗತಗೊಳಿಸಲು ತುಂಬಾ ಅನುಕೂಲವಾಗಿದೆ ಎಂದು ಹೇಳಿದ್ದಾರೆ. ರೈಲ್ವೆ ಬಜೆಟ್‌ನಲ್ಲಿ ಅಜ್ಜಂಪುರ- ಶಿವನಿ ಮಧ್ಯೆ ಜೋಡಿಮಾರ್ಗ ಯೋಜನೆ ಈ ವರ್ಷದಲ್ಲಿಯೇ ಮತ್ತು ಶಿವನಿ-ಹೊಸದುರ್ಗ ಜೋಡಿಮಾರ್ಗ ಯೋಜನೆ 2013-14 ರಲ್ಲಿ ಪೂರ್ಣಗೊಳ್ಳುವ ಬಗ್ಗೆ ಪ್ರಸ್ತಾವಿಸಲಾಗಿದೆ. ಒಟ್ಟಾರೆಯಾಗಿ ಚಿಕ್ಕಮಗಳೂರು ಜಿಲ್ಲೆಯ ಬಹುತೇಕ ರೈಲ್ವೇ ಬೇಡಿಕೆಗಳಿಗೆ ಕೇಂದ್ರ ಸರ್ಕಾರ ಸ್ಪಂದಿಸಿದೆ. ಇದಕ್ಕೆ ಕಾರಣರಾದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವುದಾಗಿ ಸಂಸದರು ತಿಳಿಸಿದ್ದಾರೆ.
ಒಂದೇ ದಿನ: ಕಡೂರು- ಚಿಕ್ಕಮಗಳೂರು ರೈಲ್ವೆ ಕಾಮಗಾರಿ ಮುಕ್ತಾಯದ ಹಂತಕ್ಕೆ ತಲುಪಿದೆ. ಮಾರ್ಚ್ ತಿಂಗಳ ಕೊನೆಯಲ್ಲಿ ಈ ಮಾರ್ಗವನ್ನು ಉದ್ಘಾಟಿಸಲಾಗುವುದು. ಅದೇ ದಿನದಂದು ಚಿಕ್ಕಮಗಳೂರು- ಬೇಲೂರು- ಸಕಲೇಶಪುರ ನೂತನ ರೈಲ್ವೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಸಂಸದ ಜಯಪ್ರಕಾಶ್ ಹೆಗ್ಡೆ ಕನ್ನಡಪ್ರಭಕ್ಕೆ ತಿಳಿಸಿದ್ದಾರೆ.
ಎಳ್ಳು ನೀರು: ಕಳೆದ ಎರಡು ವರ್ಷಗಳ ಹಿಂದೆ ಕೇಂದ್ರದ ರೈಲ್ವೆ ಬಜೆಟ್‌ನಲ್ಲಿ ಬೇಲೂರು- ಶೃಂಗೇರಿಯ ನೂತನ ರೈಲ್ವೆ ಮಾರ್ಗಕ್ಕೆ ಅನುಮೋದನೆ ನೀಡಲಾಗಿತ್ತು. ಆದರೆ, ಈ ವರ್ಷದಲ್ಲಿ ಇದರ ಬಗ್ಗೆ ಪ್ರಸ್ತಾಪವಾಗಿಲ್ಲ.
ಧಾರ್ಮಿಕ ಕೇಂದ್ರಗಳನ್ನು ಸಂಪರ್ಕಿಸುವ ಮೂಲಕ ಪ್ರವಾಸೋದ್ಯಮ ಅಭಿವೃದ್ಧಿ ಉದ್ದೇಶವನ್ನು ಹೊಂದಲಾಗಿತ್ತು. ಬೇಲೂರು- ಶೃಂಗೇರಿ ಮಾರ್ಗದಲ್ಲಿ ದಟ್ಟವಾದ ಕಾಡು ಬರುವುದರಿಂದ ಅದಕ್ಕೆ ಕೇಂದ್ರ ಅರಣ್ಯ ಇಲಾಖೆಯ ಅನುಮತಿಯ ಅವಶ್ಯಕತೆ ಇದೆ. ಇದಕ್ಕೆ ಅನುಮತಿ ಸಿಗುವುದು ಕಷ್ಟವಾಗಿದ್ದರಿಂದ ಈ ಪ್ರಸ್ತಾಪವನ್ನು ಕೈಬಿಟ್ಟಂತೆ ಕಾಣುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.