ಚಿಕ್ಕಮಗಳೂರು

ಅರ್ಹರಿಗೆ ಬಿಪಿಎಲ್ ಕಾರ್ಡ್: ಸೂಚನೆ

Published On :

ಕ.ಪ್ರ.ವಾರ್ತೆ, ಚಿಕ್ಕಮಗಳೂರು,  ಜು.26
ಬಡತನ ರೇಖೆಗಿಂತ ಕೆಳಗಿರುವವರನ್ನು ಗುರುತಿಸಿ ಅಂತಹವರಿಗೆ ಮಾತ್ರ ಬಿಪಿಎಲ್ ಕಾರ್ಡ್‌ಗಳನ್ನು ವಿತರಿಸುವಂತೆ ತಾ.ಪಂ. ಅಧ್ಯಕ್ಷ ಬಸವರಾಜ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸರ್ವಸದಸ್ಯರ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಹಿಂದೆ ತಾಲೂಕಿನಲ್ಲಿ ಬಡತನ ರೇಖೆಗಿಂತ ಕೆಳಗಿರುವ ಕಡು ಬಡವರನ್ನು ಗುರುತಿಸಿ ಅಂತಹವರಿಗೆ ಬಿಪಿಎಲ್ ಕಾರ್ಡ್‌ಗಳನ್ನು ನೀಡದೇ, ಅದರ ಬದಲಾಗಿ ಶ್ರೀಮಂತರಿಗೆ ನೀಡಲಾಗುವ ಎಪಿಎಲ್ ಕಾರ್ಡ್‌ಗಳನ್ನು ವಿತರಿಸಲಾಗಿದೆ ಎಂದು ಹೇಳಿದರು.
ಅರ್ಹರನ್ನು ಗುರುತಿಸಿ: ಈ ಬಾರಿಯಾದರೂ ಅಧಿಕಾರಿಗಳು ಕಡು ಬಡವರನ್ನು ಗುರುತಿಸುವ ಕೆಲಸ ಮಾಡಬೇಕು. ಅಂತಹವರಿಗೆ ಮಾತ್ರ ಬಿಪಿಎಲ್ ಕಾರ್ಡ್‌ಗಳನ್ನು ನೀಡಬೇಕು. ಆ ನಿಟ್ಟಿನಲ್ಲಿ ಎಚ್ಚರ ವಹಿಸಿ ಕೆಲಸ ಮಾಡಬೇಕು ಎಂದು  ಸೂಚಿಸಿದರು.
ತಾಲೂಕು ಪಂಚಾಯ್ತಿ ಸದಸ್ಯ ಗಂಗಯ್ಯ ಮಾತನಾಡಿ, ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಕೇವಲ ಅಕ್ಕಿ ಮಾತ್ರ ವಿತರಿಸಲಾಗುತ್ತಿದ್ದು, ಇನ್ನುಳಿದ ಗೋಧಿ ಮತ್ತು ಸಕ್ಕರೆಯನ್ನು ನೀಡಲಾಗುತ್ತಿಲ್ಲ ಎಂದು ಆರೋಪಿಸಿ, ತಕ್ಷಣ ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ನೀರಿನ ಸಮಸ್ಯೆ: ತಾಲ್ಲೂಕಿನ ಬಯಲು ಪ್ರದೇಶಗಳಾದ ಬೆಳವಾಡಿ, ಕಳಸಾಪುರ, ಈಶ್ವರಹಳ್ಳಿ, ಕೆ.ಬಿ.ಹಾಳ್, ಮಾಚೇನಹಳ್ಳಿ ಮತ್ತಿತರ ಗ್ರಾಮಗಳಲ್ಲಿ ಮಳೆಯಾಗದೇ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ಕೃಷಿ ಅಧಿಕಾರಿಗಳು ಎಚ್ಚರವಹಿಸಬೇಕೆಂದು ಅಧ್ಯಕ್ಷರು ಸೂಚನೆ ನೀಡಿದರು.
ಆಧಾರ್ ಕಾರ್ಡ್‌ನ ನೋಂದಣಿಯು ಗ್ರಾಮೀಣ ಭಾಗದಲ್ಲಿ ಸಮರ್ಪಕವಾಗಿ ಆಗುತ್ತಿಲ್ಲ ಎಂದ ಅವರು, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನೋಂದಣಿ ಕೇಂದ್ರವನ್ನು ತೆರೆಯಬೇಕೆಂದರು.
ಅಕ್ರಮ ಮದ್ಯ:  ಸದಸ್ಯ ಯೋಗಾನಂದ್ ಮಾತನಾಡಿ, ಬಿದರೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ದಿನಸಿ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಇದರಿಂದಾಗಿ ಮದ್ಯ ಕುಡಿಯುವವರ ಸಂಖ್ಯೆ ಹೆಚ್ಚಳವಾಗುತ್ತಿದೆ. ಗ್ರಾಮಗಳಲ್ಲಿ ಅಶಾಂತಿಯ ವಾತಾವರಣ ಉಂಟಾಗಿದ್ದು, ಮಹಿಳೆಯರಿಗೆ ಮತ್ತು ಸಾರ್ವಜನಿಕರಿಗೆ ಕಿರಿ ಕಿರಿಯಾಗುತ್ತಿದೆ. ಇದಕ್ಕೆ ಕೂಡಲೇ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು. ಇದಕ್ಕೆ ಉತ್ತರಿಸಿದ ತಾಪಂ ಅಧ್ಯಕ್ಷರು ಅಕ್ರಮ ಮದ್ಯ ಮಾರಾಟಕ್ಕೆ ಅಧಿಕಾರಿಗಳು ತಡೆಗಟ್ಟುವಂತೆ ಅಬಕಾರಿ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮೆಸ್ಕಾಂ ಮತ್ತು ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ಅಧಿಕಾರಿಗಳ ನಡುವಿನ ಹೊಂದಾಣಿಕೆಯ ಕೊರತೆಯಿಂದಾಗಿ ಕೆಲವು ಕುಡಿಯುವ ನೀರಿನ ಕಾಮಗಾರಿಗಳು ನೆನಗುದಿಗೆ ಬಿದ್ದಿವೆ. ಇದರಿಂದ ಜನರಿಗೆ ತುಂಬಾ ತೊಂದರೆಯಾಗುತ್ತಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಜನಪ್ರತಿನಿಧಿಗಳಿಗೆ ಗೌರವ ಬರುವುದಿಲ್ಲ. ಹಿಂದಿನ ಬಿಜೆಪಿ ಸರ್ಕಾರದಲ್ಲಿ ಇದೇ ಪರಿಸ್ಥಿತಿ ಇತ್ತು ಎಂದು ಕೃಷ್ಣೇಗೌಡ ಹೇಳುತ್ತಿದ್ದಂತೆ, ಈಗಿನ ಕಾಂಗ್ರೆಸ್ ಸರ್ಕಾರದಲ್ಲಿ ವರ್ಗಾವಣೆಯ ದಂಧೆ ನಡೆಯುತ್ತಿದೆ ಎಂದು ಮಂಜುನಾಥ್ ತಿರುಗೇಟು ನೀಡಿದರು.
ಮುಖ್ಯ ಶಿಕ್ಷಕರ ವರ್ಗ ಮಾಡಿ: ತಾಪಂ ಸದಸ್ಯ ಕನಕರಾಜ್ ಮಾತನಾಡಿ, ಕರ್ತಿಕೆರೆಯ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರು ಚುನಾಯಿತ ಪ್ರತಿನಿಧಿಗಳಿಗೆ ಗೌರವ ನೀಡುತ್ತಿಲ್ಲ, ಅವರನ್ನು ವರ್ಗಾವಣೆ ಮಾಡುವಂತೆ ಕಳೆದ ಸಾಮಾನ್ಯಸಭೆಯಲ್ಲಿ ಒತ್ತಾಯಿಸಿದರೂ ಕ್ರಮವಾಗಿಲ್ಲ. ಈ ಶಾಲೆಯಲ್ಲಿದ್ದ 132 ವಿದ್ಯಾರ್ಥಿಗಳ ಸಂಖ್ಯೆ ಮುಖ್ಯ ಶಿಕ್ಷಕರ ನಿರ್ಲಕ್ಷದಿಂದಾಗಿ ಕಡಿಮೆಯಾಗಿದೆ. ಅವರನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದರು.
ಹಾಸ್ಟೆಲ್‌ಗಳ ಮಕ್ಕಳಿಗೆ ಸ್ಥಾನಕ್ಕೆ ಬಿಸಿ ನೀರು ಕೊಡುತ್ತಿಲ್ಲ. ಇದರಿಂದಾಗಿ ಶನಿವಾರ ಬರುತ್ತಿದ್ದಂತೆ ಮಕ್ಕಳು ಮನೆಗಳಿಗೆ ತೆರಳುತ್ತಿದ್ದಾರೆ. ಎಲ್ಲಾ ಹಾಸ್ಟೆಲ್‌ಗಳಲ್ಲಿ ಸ್ಥಾನಕ್ಕೆ ಬಿಸಿ ನೀರು ಕೊಡುವ ವ್ಯವಸ್ಥೆಯಾಗಬೇಕು ಎಂದು ಅಧ್ಯಕ್ಷರು ಅಧಿಕಾರಿಗಳಿಗೆ ಸೂಚಿಸಿದರು.
ತಾಪಂ ಉಪಾಧ್ಯಕ್ಷ ಪುಟ್ಟೇಗೌಡ, ಸ್ಥಾಯಿ ಸಮಿತಿ ಅಧ್ಯಕ್ಷೆ ಮೀನಾಕ್ಷಿ,  ಕಾರ್ಯ ನಿರ್ವಹಕಾಧಿಕಾರಿ ಮೃತ್ಯುಂಜಯ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು. ಇದೇ ಸಂದರ್ಭದಲ್ಲಿ  ಎಸ್.ಎಸ್.ಎಲ್.ಸಿ.ಯಲ್ಲಿ ಶೇ.100 ರಷ್ಟು ಫಲಿತಾಂಶ ಪಡೆದ ತಾಲೂಕಿನ ಸರ್ಕಾರಿ ಶಾಲೆಗಳ ಮುಖ್ಯೋಪಾಧ್ಯಾಯರನ್ನು ಸನ್ಮಾನಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.