ಕ್ಯಾರಿ ಓವರ್; ನಾಳೆ ವಿದ್ಯಾರ್ಥಿಗಳಿಂದ ಪ್ರತಿಭಟನೆ
ಚಿಕ್ಕಮಗಳೂರು: ಕಳೆದ ವರ್ಷ ಜಾರಿಯಲ್ಲಿದ್ದ ಕ್ಯಾರಿ ಓವರ್ ಪದ್ಧತಿಯನ್ನು ಮುಂದುವರೆಸುವಂತೆ ಆಗ್ರಹಿಸಿ ನಗರದಲ್ಲಿ ಡಿಪ್ಲೋಮಾ ವಿದ್ಯಾರ್ಥಿಗಳು ಗುರುವಾರ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಈ ಪ್ರತಿಭಟನಾ ಮೆರವಣಿಗೆಯಲ್ಲಿ ರಾಜ್ಯದ ಡಿಪ್ಲೋಮಾ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ಜೆಡಿಎಸ್ ಮುಖಂಡ ಕೆ. ಭರತ್ ಮಂಗಳವಾರ ಸುದ್ಧಿಗೋಷ್ಠಿಯಲ್ಲಿ ತಿಳಿಸಿದರು.
ಅಂದು ಬೆಳಿಗ್ಗೆ 10 ಗಂಟೆಗೆ ಇಲ್ಲಿನ ಶ್ರೀ ಬೋಳರಾಮೇಶ್ವರ ದೇವಸ್ಥಾನದಿಂದ ಹೊರಡಲಿರುವ ಪ್ರತಿಭಟನಾ ಮೆರವಣಿಗೆ ಜಿಲ್ಲಾ ಆಟದ ಮೈದಾನ ತಲುಪಲಿದ್ದು, ಬಳಿಕ ಅದೇ ಸ್ಥಳದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
4 ವಿಷಯಗಳಿಗೆ ಮಾತ್ರ ಸೀಮಿತ: ಕಳೆದ ವರ್ಷ ಡಿಪ್ಲೋಮಾದಲ್ಲಿ 10 ಅಥವಾ ಅದಕ್ಕಿಂತ ಹೆಚ್ಚು ವಿಷಯಗಳಲ್ಲಿ ಅನುತ್ತೀರ್ಣರಾಗಿದ್ದ ವಿದ್ಯಾರ್ಥಿಗಳಿಗೆ ಮುಂದಿನ ತರಗತಿಗೆ ಪ್ರವೇಶ ನೀಡಲಾಗುತ್ತಿತ್ತು. ಆದರೆ, ಈ ವರ್ಷದಲ್ಲಿ ಕ್ಯಾರಿ ಓವರ್ 4 ವಿಷಯಗಳಿಗೆ ಮಾತ್ರ ಸೀಮಿತಗೊಳಿಸಲಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಸುಮಾರು 32 ಸಾವಿರ ವಿದ್ಯಾರ್ಥಿಗಳು ಮುಂದಿನ ತರಗತಿಗೆ ಪ್ರವೇಶ ಪಡೆಯುವಲ್ಲಿ ವಂಚಿತರಾಗಿದ್ದಾರೆ. ಈ ವಿದ್ಯಾರ್ಥಿಗಳ ಮುಂದಿನ ಭವಿಷ್ಯವೇನು ಎಂಬ ಪ್ರಶ್ನೆ ಎದುರಾಗಿದೆ ಎಂದರು.
ಪ್ರಾಧ್ಯಾಪಕರ ನೇಮಕ ಆಗಿಲ್ಲ: ರಾಜ್ಯದ ಬಹುತೇಕ ಎಲ್ಲಾ ಡಿಪ್ಲೋಮಾ ಕಾಲೇಜುಗಳಲ್ಲಿ ಪ್ರಾಧ್ಯಾಪಕರ ಕೊರತೆ ಇದ್ದು, ಅರೆಕಾಲಿಕ ಪ್ರಾಧ್ಯಾಪಕರನ್ನು ನೇಮಕ ಮಾಡಿ ತರಗತಿಗಳನ್ನು ನಡೆಸಲಾಗುತ್ತಿದೆ. ಬಹಳಷ್ಟು ಕಡೆಗಳಲ್ಲಿ ಅರ್ಹ ಪ್ರಾಧ್ಯಾಪಕರ ನೇಮಕ ಆಗಿರುವುದಿಲ್ಲ. ಪ್ರತಿ ವರ್ಷ ನಿಗದಿತ ಸಮಯದೊಳಗೆ ಪಾಠಗಳು ನಡೆಯುತ್ತಿಲ್ಲ. ವಿದ್ಯಾರ್ಥಿಗಳು ಓದುವ ಪಠ್ಯಪುಸ್ತಕಕ್ಕೂ, ಪ್ರಾಧ್ಯಾಪಕರು ಪಾಠ ಮಾಡುವ ಪುಸ್ತಕಗಳಿಗೆ ತಾಳೆಯಾಗುತ್ತಿಲ್ಲ.
ಒಂದು ವಾರದ ಅಂತರದೊಳಗೆ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಲಾಗುತ್ತಿದೆ. ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಲು ವಿದ್ಯಾರ್ಥಿಗಳಿಗೆ ಆಗುತ್ತಿಲ್ಲ. ಪ್ರಶ್ನೆ ಪತ್ರಿಕೆಯ ಮಾದರಿಯ ಬಗ್ಗೆ ಪ್ರಾಧ್ಯಾಪಕರು ವಿದ್ಯಾರ್ಥಿಗಳಿಗೆ ತಿಳಿಸುತ್ತಿಲ್ಲ. ಶೇ. 80 ರಷ್ಟು ವಿದ್ಯಾರ್ಥಿಗಳು ಕನ್ನಡ ಮಾಧ್ಯಮ ಅದರಲ್ಲೂ ಗ್ರಾಮಾಂತರ ಪ್ರದೇಶದಿಂದ ಬಂದಿದವರಾಗಿದ್ದು, 42 ವಿಷಯಗಳಲ್ಲಿ ಉತ್ತೀರ್ಣರಾಗಲು ತೊಂದರೆಯಾಗುತ್ತಿದೆ. ಅದುದರಿಂದ ಹಿಂದಿದ್ದ ಕ್ಯಾರಿ ಓವರ್ ಪದ್ಧತಿಯನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿದರು.
ಹಳೆಯ ಕ್ಯಾರಿ ಓವರ್ ಪದ್ಧತಿಯನ್ನು ಜಾರಿಗೊಳಿಸುವಂತೆ ಡಿಪ್ಲೋಮಾ ವಿದ್ಯಾರ್ಥಿಗಳು ಹಲವು ಹಂತಗಳಲ್ಲಿ ಹೋರಾಟ ನಡೆಸಿದ್ದಾರೆ, ಆದರೆ, ರಾಜ್ಯ ಸರ್ಕಾರ ಇತ್ತ ಗಮನ ಹರಿಸಿಲ್ಲ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ರಾಜ್ಯ ಸರ್ಕಾರ ಹಳೆಯ ಕ್ಯಾರಿ ಓವರ್ ಪದ್ಧತಿಯನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

