ಚಿಕ್ಕಮಗಳೂರು

ಸಿಎಂ ಬಳಿ ರೈತರ ನಿಯೋಗ

Published On :

ಕ.ಪ್ರ.ವಾರ್ತೆಚಿಕ್ಕಮಗಳೂರು  ಜೂ.11
ಅರಣ್ಯ, ಗೋಮಾಳ, ಸೊಪ್ಪಿನ ಬೆಟ್ಟ ಪ್ರದೇಶಗಳನ್ನು ಒತ್ತುವರಿ ಮಾಡಿರುವ ಸಣ್ಣ ಮತ್ತು ಅತಿ ಸಣ್ಣ ರೈತರನ್ನು ಅಲ್ಲಿಂದ ಖುಲ್ಲಾಗೊಳಿಸಬಾರದೆಂದು ಆಗ್ರಹಿಸಲು ಜಿಲ್ಲಾ ಕಾಂಗ್ರೆಸ್ ಪಕ್ಷದ ನಿಯೋಗ ಮುಖ್ಯಮಂತ್ರಿ ಬಳಿ ತೆರಳಲಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಂ.ಎಲ್. ಮೂರ್ತಿ ಹೇಳಿದ್ದಾರೆ.
 ಶುಕ್ರವಾರದಂದು ಪಕ್ಷದ ಕಚೇರಿಯಲ್ಲಿ ನಡೆಯಲಿರುವ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಸಂಬಂಧ ನಿರ್ಣಯ ಕೈಗೊಳ್ಳಲಾಗುವುದು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ನ್ಯಾಯಾಲಯದ ಸೂಚನೆ: ಅರಣ್ಯ ಭೂಮಿ ಒತ್ತುವರಿ ತೆರವು ಮಾಡುತ್ತಿರುವುದರಿಂದ ಜನರಲ್ಲಿ ಆತಂಕ ಉಂಟಾಗಿದೆ. ಈ ವಿಷಯದಲ್ಲಿ ಇತರೆ ರಾಜಕೀಯ ಪಕ್ಷಗಳು ಕಾಂಗ್ರೆಸ್ ಪಕ್ಷದ ಮೇಲೆ ಆರೋಪ ಮಾಡುತ್ತಿವೆ. ಆದರೆ, ಸುಪ್ರೀಂಕೋರ್ಟ್‌ನ ನಿರ್ದೇಶನದಂತೆ ಹೈಕೋರ್ಟ್‌ನ ಸೂಚನೆಯ ಮೇರೆಗೆ ಅರಣ್ಯ ಇಲಾಖೆ ಒತ್ತುವರಿ ತೆರವುಗೊಳಿಸುತ್ತಿದೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 10 ಎಕರೆ ಒಳಗಿನ ಒತ್ತುವರಿ ಭೂಮಿಯನ್ನು ತೆರವುಗೊಳಿಸದಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಮೌಖಿಕವಾಗಿ ತಿಳಿಸಿದ್ದಾರೆ ಎಂದರು.
 ಜೂ. 18 ರಂದು ಜಿಲ್ಲಾ ಉಸ್ತುವಾರಿ ಸಚಿವ ಅಭಯಚಂದ್ರ ಜೈನ್ ಅವರು ಚಿಕ್ಕಮಗಳೂರಿಗೆ ಆಗಮಿಸಲಿದ್ದಾರೆ. ಅಂದು ಬೆಳಿಗ್ಗೆ 11 ಗಂಟೆಗೆ ನಗರದ ಕುವೆಂಪು ಕಲಾ ಮಂದಿರದಲ್ಲಿ ನಡೆಯಲಿರುವ ಜಿಲ್ಲಾ ಬ್ಯಾರಿ ಒಕ್ಕೂಟದ ಅಭಿನಂದನಾ ಸಮಾರಂಭದಲ್ಲಿ ಸಚಿವರು ಭಾಗವಹಿಸಲಿದ್ದರು. ರಾಜ್ಯ ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಅಂದು ಆಗಮಿಸಲಿದ್ದು, ಇದೇ ಸಂದರ್ಭದಲ್ಲಿ ಕಲಾಮಂದಿರದಲ್ಲಿ ನಡೆಯಲಿರುವ ಜಿಲ್ಲಾ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಸಚಿವದ್ವಯರಿಗೆ ಹಾಗೂ ತರೀಕೆರೆ ಕ್ಷೇತ್ರದ ಶಾಸಕ ಶ್ರೀನಿವಾಸ್ ಅವರಿಗೆ ಅಭಿನಂದನೆ ಸಲ್ಲಿಸಲಾಗುವುದು ಎಂದು ಹೇಳಿದರು.
 ಜಿಲ್ಲೆಯ ಗ್ರಾಪಂ, ಭೂತ್ ಮಟ್ಟದ ಸಮಿತಿಗಳನ್ನು ವಿಸರ್ಜನೆ ಮಾಡಲಾಗಿದ್ದು, ಹೋಬಳಿವಾರು ಸಭೆಯನ್ನು ನಡೆಸಿ ಹೊಸ ಸಮಿತಿಗಳನ್ನು ರಚನೆ ಮಾಡಲಾಗುವುದು ಎಂದು ತಿಳಿಸಿದರು. ವಿಧಾನಪರಿಷತ್ ಸದಸ್ಯೆ ಮೋಟಮ್ಮ ಅವರು ತಮ್ಮ ಬಗ್ಗೆ ಮಾಡಿರುವ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ, ಅವರು ರಾಷ್ಟ್ರಮಟ್ಟದ ನಾಯಕರು, ತಾವು ಜಿಲ್ಲಾ ಮಟ್ಟದ ನಾಯಕರು. ಇದು, ಪಕ್ಷದ ಆಂತರಿಕ ವಿಷಯ. ಅದಕ್ಕೆ ಪಕ್ಷದ ವೇದಿಕೆಯಲ್ಲಿ ಉತ್ತರ ನೀಡಲಾಗುವುದು ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಜಿಲ್ಲಾ ವಕ್ತಾರ ಎ.ಎನ್. ಮಹೇಶ್, ವೇಣುಗೋಪಾಲ್ ರಾಜ್ ಅರಸ್ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.