ಕಾಮಗಾರಿ ಮುಗಿಸಲು ಸೂಚನೆ
ಕಪ್ರ ವಾರ್ತೆ, ಚಿಕ್ಕಮಗಳೂರು, ಜೂ. 20
ಸರಕಾರ ವಿವಿಧ ಕಲ್ಯಾಣ ಕಾರ್ಯಕ್ರಮಗಳ ಜಾರಿ ಹಾಗೂ ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಕಾಲಾವಧಿಯೊಳಗೆ ಪೂರ್ಣಗೊಳಿಸಲು ಹೆಚ್ಚು ಒತ್ತು ನೀಡಬೇಕು ಎಂದು ಮೀನುಗಾರಿಕೆ, ಯುವಜನ ಸೇವೆ ಖಾತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ಅಭಯಚಂದ್ರ ಜೈನ್ ಸೂಚಿಸಿದ್ದಾರೆ.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಾಮಗಾರಿಯ ಅನುಷ್ಠಾನದಲ್ಲಿ ವಿಳಂಬವಾದಷ್ಟು ಅದರಿಂದ ಸರಕಾರಕ್ಕೆ ಇನ್ನಷ್ಟು ಹೊರೆಯಾಗುತ್ತದೆ. ಅಲ್ಲದೆ, ಸಾರ್ವಜನಿಕರ ಅಸಹನೆಗೂ ಕಾರಣವಾಗಲಿದೆ. ಇದನ್ನು ತಪ್ಪಿಸುವ ನಿಟ್ಟಿನಲ್ಲಿ, ತ್ವರಿತವಾಗಿ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನವಾಗಬೇಕಿದೆ ಎಂದು ಸಚಿವರು ತಿಳಿಸಿದರು.
ಗಮನ ಹರಿಸಿ: ವಿವಿಧ ಕಲ್ಯಾಣ ಕಾರ್ಯಕ್ರಮಗಳ ಫಲಾನುಭವಿಗಳನ್ನು ಗುರುತಿಸುವಾಗ ಸಂಪೂರ್ಣ ಪಾರದರ್ಶಕತೆಯಿಂದ ಕೂಡಿರಬೇಕು ಮತ್ತು ಇದರಲ್ಲಿ ನಿಗದಿತ ಗುರಿಯನ್ನು ಸಾಧಿಸಬೇಕು ಎಂದು ಸೂಚಿಸಿದ ಸಚಿವರು, ನೈಜ ಫಲಾನುಭವಿಗಳಿಗೆ ಇದರ ಸೌಲಭ್ಯ ದೊರಕುವಂತೆ ಗಮನಹರಿಸಬೇಕು ಎಂದು ಹೇಳಿದರು.
ಪಡಿತರ ಚೀಟಿ ವಿತರಣೆಯಲ್ಲಿ ತೊಂದರೆಯಾಗದಂತೆ ಕ್ರಮವಹಿಸಬೇಕು. ಅರ್ಹ ಬಡವರಿಗೆ ಬಿ.ಪಿ.ಎಲ್ ಕಾರ್ಡ್ ಲಭ್ಯವಾಗುವಂತೆ ಸೂಕ್ತ ಕ್ರಮ ವಹಿಸಬೇಕು. ಗಂಗಾ ಕಲ್ಯಾಣ ಯೋಜನೆಯಲ್ಲಿ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕವನ್ನು ಹೆಚ್ಚು ವಿಳಂಬವಿಲ್ಲದೆ ಕಲ್ಪಿಸಲು ಅನುವಾಗುವಂತೆ, ಜಿಲ್ಲಾಧಿಕಾರಿಗಳು, ಸಂಬಂಧಪಟ್ಟ ಇಲಾಖೆಗಳ ಸಭೆ ಕರೆದು ಸಮನ್ವಯತೆ ಏರ್ಪಡಿಸಬೇಕು ಎಂದು ಸಚಿವರು ಸೂಚಿಸಿದರು.
ಕ್ರಮಕ್ಕೆ ಸೂಚನೆ: ಕೊಪ್ಪ ಮತ್ತು ಎನ್.ಆರ್. ಪುರ ಸರಕಾರಿ ಆಸ್ಪತ್ರೆಗಳ ನೂತನ ಕಟ್ಟಡ ನಿರ್ಮಾಣದಲ್ಲಿ ಕಳಪೆ ಕಾಮಗಾರಿ ದೂರುಗಳು ಬಂದಿರುವುದನ್ನು ಗಂಭೀರವಾಗಿ ಪರಿಗಣಿಸಿದ ಸಚಿವರು, ಈ ಬಗ್ಗೆ ತಕ್ಷಣವೇ ಸೂಕ್ತ ಕ್ರಮಕೈಗೊಳ್ಳುವಂತೆ ತಿಳಿಸಿದರು.
ಸ್ವಂತ ಕಟ್ಟಡಗಳು ಇಲ್ಲದ ಅಂಗನವಾಡಿಗಳಿಗೆ ನೂತನ ಕಟ್ಟಡವನ್ನು ನಿರ್ಮಿಸಬೇಕು. ಸರಕಾರಿ ಶಾಲಾ ಕೊಠಡಿಗಳು ಖಾಲಿ ಇದ್ದರೆ, ಅಲ್ಲಿ ಅಂಗನವಾಡಿ ಶಾಲೆ ನಡೆಸಲು ಬಳಸುವಂತೆ ಸಚಿವರು ಸೂಚಿಸಿದರು.
ಜಿಲ್ಲೆಯಲ್ಲಿ ಆಧಾರ್ ಕಾರ್ಡ್ ಕೇಂದ್ರಗಳಲ್ಲಿ ಹೆಚ್ಚು ಒತ್ತಡಗಳು ಬರುತ್ತಿರುವ ಹಿನ್ನೆಲೆಯಲ್ಲಿ ಇನ್ನಷ್ಟು ಹೆಚ್ಚುವರಿ ಕೇಂದ್ರಗಳನ್ನು ತೆರೆಯುವಂತೆ ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಯಶವಂತ್, ಇನ್ನೂ 5 ಆಧಾರ್ ಕಾರ್ಡ್ ಕೇಂದ್ರಗಳನ್ನು ಜಿಲ್ಲೆಯಲ್ಲಿ ತೆರೆಯಲಾಗುವುದು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

