ಬತ್ತ ಖರೀದಿ ಕೇಂದ್ರ ಪ್ರಾರಂಭ
ಕ.ಪ್ರ ವಾರ್ತೆ, ಚಿಕ್ಕಮಗಳೂರು, ಮಾ. 8
ಜಿಲ್ಲೆಯ ಕೊಪ್ಪ ಮತ್ತು ಶೃಂಗೇರಿಯಲ್ಲಿ ಬತ್ತ ಖರೀದಿ ಕೇಂದ್ರವನ್ನು ಇದೇ ಮಾ.12ರಿಂದ ಪ್ರಾರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ವಿ. ಯಶವಂತ್ ಹೇಳಿದ್ದಾರೆ.
ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 2012-13ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲಾಗುವ ಬತ್ತಕ್ಕೆ ಪ್ರತೀ ಕ್ವಿಂಟಾಲ್ಗೆ ರು. 250 ಪ್ರೋತ್ಸಾಹಧನ ಸೇರಿದಂತೆ ಪ್ರತೀ ಕ್ವಿಂಟಾಲ್ ಎ ಗ್ರೇಡ್ ಬತ್ತಕ್ಕೆ ರು. 1530 ಹಾಗೂ ಸಾಮಾನ್ಯ ಬತ್ತಕ್ಕೆ ರು. 1500ರಂತೆ ರೈತರಿಂದ ಬತ್ತ ಖರೀದಿಸಲಾಗುತ್ತದೆ ಎಂದು ಹೇಳಿದರು.
ಕೊಪ್ಪದಲ್ಲಿ ವಿದ್ಯಾನಗರ ಸಮುದಾಯಭವನ ಮತ್ತು ಶೃಂಗೇರಿಯ ಅಂಬೇಡ್ಕರ್ ಸಮುದಾಯ ಭವನದಲ್ಲಿ ಖರೀದಿ ಕೇಂದ್ರ ಕಾರ್ಯಾಚರಿಸಲಿದೆ. ಖರೀದಿ ಕೇಂದ್ರಗಳಿಗೆ ಅಗತ್ಯ ಸಿಬ್ಬಂದಿ ನೇಮಕ, ಉಗ್ರಾಣ ವ್ಯವಸ್ಥೆ, ಗುಣಮಟ್ಟ ಪರೀಕ್ಷೆ ವ್ಯವಸ್ಥೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಉತ್ತಮ ಗೋಣಿಚೀಲಗಳಲ್ಲಿ ಬತ್ತ ಇಡುವಂತೆ ತಿಳಿಸಿದರು.
ದಾಖಲೆ ಪಡೆಯಿರಿ: ರೈತರಿಂದ ಬತ್ತ ಖರೀದಿಸುವಾಗ ಪಹಣಿ, ಬೆಳೆ ದೃಢೀಕರಣ ಪತ್ರ, ರೈತರ ಭಾವಚಿತ್ರ, ಪಹಣಿಯಲ್ಲಿ ರೈತರ ಭಾವಚಿತ್ರವನ್ನು ಗ್ರಾಮ ಲೆಕ್ಕಿಗರಿಂದ ದೃಢೀಕರಿಸಿದ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕ ಪ್ರತಿ ಮತ್ತಿತರ ದಾಖಲೆಗಳನ್ನು ಕ್ರಮಬದ್ಧವಾಗಿ ಪಡೆಯಬೇಕು. ಪ್ರತಿ ಎಕರೆಗೆ 12 ಕ್ವಿಂಟಲ್ನಂತೆ ಬತ್ತ ಖರೀದಿಸಬೇಕು ಎಂದು ಸೂಚಿಸಿದರು.
ಬೆಂಬಲ ಬೆಲೆಯ ಪ್ರಯೋಜನ ರೈತರಿಗೆ ನೇರವಾಗಿ ಲಭ್ಯವಾಗಬೇಕು ಎಂಬುದು ಸರ್ಕಾರದ ಉದ್ದೇಶ. ಈ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಮಧ್ಯವರ್ತಿಗಳು ಇದನ್ನು ದುರುಪಯೋಗಪಡಿಸದಂತೆ ಎಚ್ಚರವಹಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕಿ ಶೈಲಜಾ, ಆಹಾರ ನಿಗಮದ ಸಹಾಯಕ ವ್ಯವಸ್ಥಾಪಕ ಮಂಜುನಾಥ್, ಜಿಲ್ಲೆಯ ಎಲ್ಲಾ ಎಪಿಎಂಸಿಗಳ ಕಾರ್ಯದರ್ಶಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

