23ರಿಂದ ರೇಣುಕಾಚಾರ್ಯ ಯುಗಮಾನೋತ್ಸವ
ಕ.ಪ್ರ. ವಾರ್ತೆ,ಚಿಕ್ಕಮಗಳೂರು,ಮಾ.21
ಬಾಳೆಹೊನ್ನೂರಿನ ಶ್ರೀ ರಂಭಾಪುರೀ ಪೀಠದಲ್ಲಿ ಮಾ.23ರಿಂದ 29ರ ವರೆಗೆ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ಮಹಾ ರಥೋತ್ಸವ ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ರಂಗಭೂಮಿ ಕಲಾವಿದ ಡಾ. ಏಣಗಿ ಬಾಳಪ್ಪ ಅವರಿಗೆ ಶ್ರೀ ಜಗದ್ಗುರು ರೇಣುಕಾಚಾರ್ಯ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಶ್ರೀ ರಂಭಾಪುರೀ ಪೀಠದ ಶ್ರೀ ಪ್ರಸನ್ನ ರೇಣುಕ ವೀರಸೋಮೇಶ್ವರ ಶಿವಾಚಾರ್ಯ ಮಹಾಸ್ವಾಮಿ ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
23ರಂದು ಸಮಾವೇಶ: ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವದ ಅಂಗವಾಗಿ ಮಾ.23ರಂದು ಸಂಜೆ 6.30ಕ್ಕೆ ವೀರಶೈವ ಜಂಗಮ- ಅರ್ಚಕ- ಪುರೋಹಿತ ಸಮಾವೇಶ ನಡೆಯಲಿದ್ದು, ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ಅಧ್ಯಕ್ಷ ಶ್ರೀ ರೇಣುಕ ಶಿವಾಚಾರ್ಯ ಸ್ವಾಮೀಜಿಯವರು ಈ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಸಿದ್ದಲಿಂಗಾರಾಧ್ಯ, ಎಂ.ಎಸ್. ಶಿವಾನಂದಸ್ವಾಮಿ ಹಾಗೂ ಷಡಕ್ಷರಶಾಸ್ತ್ರಿಯವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಮಾ.24 ರಂದು ಬೆಳಿಗ್ಗೆ 10.30ಕ್ಕೆ ಚಿಕ್ಕಮಗಳೂರು ಜಿಲ್ಲಾ ಮಾಧ್ಯಮ ಸಮ್ಮೇಳನ ನಡೆಯಲಿದ್ದು, ಈ ಕಾರ್ಯಕ್ರಮವನ್ನು ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಎಂ.ಎ. ಪೊನ್ನಪ್ಪ ಉದ್ಘಾಟಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಪತ್ರಕರ್ತ ಬಾಲಕೃಷ್ಣ ಪುತ್ತಿಗೆ ಅವರಿಗೆ ಚಿಕ್ಕೊಳಲೆ ಸದಾಶಿವಶಾಸ್ತ್ರಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಮಾಡಲಾಗುವುದು. ವಾರ್ತಾ ಇಲಾಖೆಯ ನಿರ್ದೇಶಕ ವಿಸುಕುಮಾರ್ ಹಾಗೂ ಹಿರಿಯ ಪತ್ರಕರ್ತ ಈಶ್ವರ ದೈತೋಟ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗಂಗಾಧರ್ ಮೊದಲಿಯರ್ ಹಾಗೂ ಪ್ರೊ. ಪೂರ್ಣಾನಂದ, ಜಿ.ವಿ. ಚೂಡನಾಥ ಅಯ್ಯರ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.
ಅದೇ ದಿನ ಸಂಜೆ 6.30ಕ್ಕೆ ಮಾಧ್ಯಮ ಸಮ್ಮೇಳನದ ಸಮಾರೋಪ ಹಾಗೂ ಧರ್ಮ ಸಮ್ಮೇಳನ ನಡೆಯಲಿದ್ದು, ಈ ಕಾರ್ಯಕ್ರಮವನ್ನು ಉಜ್ಜಯಿನಿ ಜಗದ್ಗುರು ಸಿದ್ಧಲಿಂಗ ರಾಜದೇಶಿ ಕೇಂದ್ರ ಶಿವಾಚಾರ್ಯ ಸ್ವಾಮೀಜಿಯವರು ಉದ್ಘಾಟಿಸಲಿದ್ದಾರೆ.
ಪ್ರಶಸ್ತಿ ಪ್ರದಾನ: ಮಾ.25ರಂದು ಬೆಳಗ್ಗೆ 11.30ಕ್ಕೆ ನಡೆಯಲಿರುವ ಶ್ರೀ ಜಗದ್ಗುರು ರೇಣುಕಾಚಾರ್ಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಡಾ. ಶಾಮನೂರು ಶಿವಶಂಕರಪ್ಪ ಅವರು ಉದ್ಘಾಟಿಸಲಿದ್ದಾರೆ.
ಮಾ.26 ರಂದು ಸಂಜೆ 6.30ಕ್ಕೆ ಮಹಿಳಾ ಸಮಾವೇಶ ನಡೆಯಲಿದ್ದು, ಮಹಿಳಾ ಸಮಾಜದ ಅಧ್ಯಕ್ಷೆ ಗೌರಮ್ಮ ಬಸವೇಗೌಡ ಈ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಮಹಿಳಾ ಸಮಾಜದ ಮುಖ್ಯಸ್ಥೆ ಬಿ.ಕೆ. ಚಂದ್ರಕಲಾ ಉಪನ್ಯಾಸ ನೀಡಲಿದ್ದಾರೆ. ಬಿ.ಸಿ. ಗೀತಾ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.
ಮಾ.27ರಂದು ಯುವ ಸಮಾವೇಶ ನಡೆಯಲಿದ್ದು, ಈ ಕಾರ್ಯಕ್ರಮವನ್ನು ಕೆಳದಿಯ ರಾಜಗುರು ಹಿರೇಮಠದ ಡಾ. ಮಹೇಶ್ವರ ಶಿವಾಚಾರ್ಯ ಸ್ವಾಮೀಜಿಯವರು ಉದ್ಘಾಟಿಸಲಿದ್ದಾರೆ. ಹರಪನಹಳ್ಳಿಯ ಎಂಪಿಎಂ ಶಾಂತವೀರಯ್ಯ ಅವರು ಉಪನ್ಯಾಸ ನೀಡಲಿದ್ದಾರೆ ಎಂದು ಶ್ರೀಗಳು ಹೇಳಿದರು.
ಈ ಕಾರ್ಯಕ್ರಮಗಳಿಗೆ ಹಿಂದಿನ ವರ್ಷಗಳಲ್ಲಿ ರಾಜಕೀಯ ಪಕ್ಷದ ಮುಖಂಡರಿಗೆ ಆಹ್ವಾನ ನೀಡಲಾಗುತ್ತಿತ್ತು. ಆದರೆ, ರಾಜಕೀಯದಲ್ಲಿ ದ್ವೇಷ, ಅಸೂಯೆಯ ವಾತಾವರಣ ಇದೆ. ಅದುದರಿಂದ ಈ ವರ್ಷದಲ್ಲಿ ಯಾವುದೇ ರಾಜಕೀಯ ಪಕ್ಷದ ಮುಖಂಡರು ಭಾಗವಹಿಸುತ್ತಿಲ್ಲ ಎಂದರು.
ಮಾ.28ರಂದು ಕೆಂಡಾರ್ಚನೆ ಮತ್ತು ವಸಂತೋತ್ಸವ ನಡೆಯಲಿದ್ದು, ಮಾ. 29ರಂದು ಭದ್ರಾನದಿ ತಟದಲ್ಲಿ ಸುರಗೀ ಸಮಾರಾಧನೆ ಜರುಗಲಿದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

