ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹ
ಕ.ಪ್ರ.ವಾರ್ತೆ, ಶೃಂಗೇರಿ, ಮಾ.27 ತಾಲೂಕಿನಾದ್ಯಂತ ಅವ್ಯಾಹತವಾಗಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟ, ಸಾಗಾಟವನ್ನು ತಡೆಗಟ್ಟಬೇಕು ಎಂದು ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ. ಈ ಸಂಬಂಧ ಪಟ್ಟಣ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ. ಅಕ್ರಮ ಮದ್ಯ ಮಾರಾಟ ಹಾವಳಿ ದಿನೇ ದಿನೇ ಹೆಚ್ಚುತ್ತಿದೆ. ಇದರಿಂದ ಗ್ರಾಮಗಳಲ್ಲಿ ಅಶಾಂತಿಯ ವಾತಾವರಣ ಉಂಟಾಗುತ್ತಿದ್ದು, ನೆಮ್ಮದಿಗೆ ಭಂಗ ಉಂಟಾಗುತ್ತಿದೆ. ಕೂಲಿ ಕಾರ್ಮಿಕರು ದುಡಿದ ಹಣವನ್ನೆಲ್ಲ ಕುಡಿತಕ್ಕೆ ಹಾಕುತ್ತ ಇದ್ದು, ಸಂಸಾರ ಹಾಳಾಗಿ ಬೀದಿ ಪಾಲಾಗುತ್ತಿದೆ. ಇದರಿಂದ ದೌರ್ಜನ್ಯ, ಆತ್ಮಹತ್ಯೆಯಂತಹ ಪ್ರಕರಣ ನಡೆಯುತ್ತಿದೆ ಎಂದವರು ಹೇಳಿದರು. ಮಹಿಳಾ ಸಂಘಟನೆಗಳು ಈ ಬಗ್ಗೆ ದೂರು ನೀಡಿ, ಪ್ರತಿಭಟನೆ, ಹೋರಾಟಗಳನ್ನು ನಡೆಸಿದ್ದರೂ ಯಾವುದೇ ರೀತಿಯ ಪ್ರಯೋಜನವಾಗಿರುವುದಿಲ್ಲ. ಅಕ್ರಮ ಮದ್ಯ ಮಾರಾಟಗಾರರು, ಸಾಗಾಟಗಾರರು ರಾಜಾರೋಷವಾಗಿ ಓಡಾಡುತ್ತಿದ್ದರೂ, ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಮೌನ ವಹಿಸುತ್ತಿರುವುದು ನಾಗರಿಕರಲ್ಲಿ ಆಶ್ಚರ್ಯ ಮೂಡಿಸಿದೆ. ಇನ್ನಾದರು ಇಲಾಖೆ ಜಾಗೃತಗೊಂಡು ಅಕ್ರಮ ಮದ್ಯಮಾರಾಟ ತಡೆಗಟ್ಟಬೇಕು ಎಂದು ತಾಲೂಕು ಎಚ್ಚರಿಸಿದ್ದಾರೆ.
ಅನಿಯಮಿತ ವಿದ್ಯುತ್ ಕಡಿತ: ಖಂಡನೆ
ಶೃಂಗೇರಿ: ತಾಲೂಕಿನಾದ್ಯಂತ ಕಳೆದ ಕೆಲ ದಿನಗಳಿಂದ ಅನಿಯಮಿತ ವಿದ್ಯುತ್ ಕಡಿತ ಮಾಡುತ್ತಿರುವುದನ್ನು ದಲಿತ ಸಂಘರ್ಷ ಸಮಿತಿ, ಜಯಕರ್ನಾಟಕ ಸಂಘಟನೆ ಖಂಡಿಸಿದೆ. ದಸಂಸ ಜಿಲ್ಲಾ ಸಹ ಸಂಚಾಲಕ ಕರಡಯ್ಯ ಈ ಕುರಿತು ಹೇಳಿಕೆ ನೀಡಿ ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಅನಿಯಮಿತವಾಗಿ ವಿದ್ಯುತ್ ಕಡಿತಗೊಳಿಸಲಾಗುತ್ತಿದೆ. ವಿದ್ಯುತ್ ಇರುವುದೇ ಕಡಿಮೆಯಾಗಿದೆ. ಹಗಲು, ರಾತ್ರಿ ಎನ್ನದೇ ಪದೇ ಪದೇ ಕಡಿತಗೊಳಿಸುತ್ತಿರುವುದರಿಂದ ಗ್ರಾಹಕರಿಗೆ ತೊಂದರೆಯಾಗುತ್ತಿದೆ ಎಂದು ಹೇಳಿದದ್ದಾರೆ. ಪರೀಕ್ಷಾ ಸಮಯವಾದ್ದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಇದೇ ರೀತಿ ಪದೇ ಪದೇ ವಿದ್ಯುತ್ ಕಡಿತಗೊಳಿಸುವುದನ್ನು ನಿಲ್ಲಿಸದಿದ್ದರೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಯುಜಿಸಿ ವಿಚಾರ ಸಂಕಿರಣ
ಶೃಂಗೇರಿ: ಪಟ್ಟಣದ ಜೆಸಿಬಿಎಂ ಕಾಲೇಜಿನ ಡಾ.ಟಿ.ಎಂ.ಎ ಪೈ ಸಭಾಂಗಣದಲ್ಲಿ ಯುಜಿಸಿ ಪ್ರಾಯೋಜಿತ ವಿಚಾರ ಸಂಕಿರಣ ನಡೆಯಿತು. ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾನಿಲಯ ಕುಲಪತಿ ಡಾ. ಮಲ್ಲೇಪುರಂ ಜಿ ವೆಂಕಟೇಶ್ ವಿಚಾರ ಸಂಕಿರಣವನ್ನು ಉದ್ಘಾಟಿಸಿದರು. ಉಪನಿಷತ್ತುಗಳಲ್ಲಿ ಪ್ರತಿಪಾದಿತವಾಗಿರುವ ಶಿಕ್ಷಣ ರೀತಿಗಳ ಪ್ರಸ್ತುತತೆ ಎಂಬ ವಿಷಯದ ಬಗ್ಗೆ ನಡೆದ ವಿಚಾರ ಸಂಕಿರಣದಲ್ಲಿ 18 ಪ್ರಬಂಧಗಳು ಮಂಡನೆಯಾದವು. ತಿರುಪತಿ ರಾಷ್ಟ್ರೀಯ ಸಂಸ್ಕೃತ ವಿದ್ಯಾಪೀಠದ ಪ್ರಾದ್ಯಾಪಕ ಡಾ. ಮುರುಳಿಧರ ಪೈ ದಿಕ್ಸೂಚಿ ಭಾಷಣ ಮಾಡಿದರು. ರಾಜೀವ ಗಾಂಧಿ ಸಂಸ್ಕೃತ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ. ಎನ್.ಆರ್. ಕಣ್ಣನ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

