ಸೋನಿಯಾ ಕೊಡುಗೆ ಶೂನ್ಯ: ಎಚ್ಡಿಕೆ
ಚಿಕ್ಕಮಗಳೂರು: ಜಿಲ್ಲೆಗೆ ಸೋನಿಯಾಗಾಂಧಿಯವರ ಕೊಡುಗೆ ಏನೆಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಇಲ್ಲಿನ ವಿಜಯಪುರದ ಗಣಪತಿ ಪೆಂಡಾಲ್ ಮೈದಾನದಲ್ಲಿ ಬುಧವಾರ ಮಧ್ಯಾಹ್ನ ನಡೆದ ಚುನಾವಣಾ ಪ್ರಚಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಇಂದಿರಾಗಾಂಧಿಯವರನ್ನು ಮತದಾರರು ತಿರಸ್ಕರಿಸಿದಾಗ ಅವರು ಚಿಕ್ಕಮಗಳೂರು ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿ ಜಯಗಳಿಸಿದ್ದರು. ಅತ್ತೆಯನ್ನು ಗೆಲ್ಲಿಸಿದ ಈ ಜಿಲ್ಲೆಯ ನೆನಪಿಗಾಗಿ ನೀಡಿರುವ ಕೊಡುಗೆಯಾದರೂ ಏನು ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.
ನೈತಿಕತೆ ಇಲ್ಲ: ಈ ಜಿಲ್ಲೆಯ ಶೃಂಗೇರಿ ಭಾಗದ ಅಡಿಕೆ ಬೆಳೆಗಾರರು ಕಷ್ಟದಲ್ಲಿದ್ದಾರೆ. ಅವರ ನೆರವಿಗೆ ಕೇಂದ್ರ ಸರ್ಕಾರ ಬಂದಿಲ್ಲ. ಇಲ್ಲಿನ ಜನರಲ್ಲಿ ಮತ ಕೇಳುವ ನೈತಿಕತೆಯನ್ನು ಕಾಂಗ್ರೆಸ್ ಕಳೆದುಕೊಂಡಿದೆ ಎಂದು ಆರೋಪಿಸಿದರು.
ಕೇಂದ್ರ ಸರ್ಕಾರ ಹಿಂದುಳಿದವರಿಗೆ, ಅಲ್ಪಸಂಖ್ಯಾತರಿಗೆ ಹೆಚ್ಚಿನ ನೆರವು ನೀಡಿಲ್ಲ, ಆರ್ಥಿಕ, ಶೈಕ್ಷಣಿಕವಾಗಿ ಕೊಡುಗೆ ನೀಡಿಲ್ಲ. ಮುಸ್ಲಿಮರು ಕಷ್ಟದಲ್ಲಿದ್ದಾರೆ ಎಂದು ಹೇಳಿದರು.
ಬಿಜೆಪಿಗೆ ರಕ್ಷಣೆ: ರಾಜ್ಯ ಬಿಜೆಪಿ ಸರ್ಕಾರ ಹಲವು ಹಗರಣಗಳಲ್ಲಿ ಸಿಲುಕಿ ಸರ್ಕಾರದಲ್ಲಿ ಅತಂತ್ರ ಸ್ಥಿತಿ ನಿರ್ಮಾಣಗೊಂಡ ಸಂದರ್ಭದಲ್ಲಿ ಈ ಸರ್ಕಾರವನ್ನು ವಜಾ ಮಾಡುವಂತೆ ರಾಜ್ಯಪಾಲರು ಕಳೆದ 3 ವರ್ಷಗಳ ಹಿಂದೆಯೇ ಕೇಂದ್ರಕ್ಕೆ ಶಿಫಾರಸು ಮಾಡಿದ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಇದಕ್ಕೆ ಅಡ್ಡಿಪಡಿಸಿ, ಅವರನ್ನು ರಕ್ಷಿಸುವ ಕೆಲಸ ಮಾಡಿದರು ಎಂದು ಆರೋಪಿಸಿದರು.
ಕಾಂಗ್ರೆಸ್ ಪಕ್ಷದವರು ಮತಯಾಚನೆಯ ಜಾಹೀರಾತುಗಳಲ್ಲಿ ಸೋನಿಯಾ, ರಾಹುಲ್ಗಾಂಧಿ, ಮನಮೋಹನ್ಸಿಂಗ್ ಅವರ ಭಾವಚಿತ್ರಗಳನ್ನು ಹಾಕಿಸಿದ್ದಾರೆ. ಇನ್ನುಳಿದಂತೆ ಯಾರ ಭಾವಚಿತ್ರಗಳು
ಹಾಕಿಸಿಲ್ಲ. ಅಂದರೆ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ನಲ್ಲಿ ನಾಯಕತ್ವ ಇಲ್ಲ ಎಂಬುದು ಜಾಹೀರಾತುಗಳ ಮೂಲಕ ತೋರಿಸಿಕೊಂಡಿದ್ದಾರೆ ಎಂದು ಟೀಕಿಸಿದರು.
ರಕ್ಷಣೆ ಇಲ್ಲ: ಮಹಿಳೆಯರಿಗೆ ರಕ್ಷಣೆ ನೀಡಲಾಗುವುದು ಎಂದು ಕಾಂಗ್ರೆಸ್ ಜಾಹೀರಾತುಗಳಲ್ಲಿ ಹೇಳಿಕೊಂಡಿದ್ದಾರೆ.
ಅವರದೇ ಪಕ್ಷದ ಸರ್ಕಾರ ಅಧಿಕಾರದಲ್ಲಿರುವ ದೆಹಲಿಯಲ್ಲಿ ಮಹಿಳೆಯರಿಗೆ ಮತ್ತು ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲ ಎಂಬುದು ಎಲ್ಲರಿಗೂ ತಿಳಿದಿದೆ. ಇನ್ನು ರಾಜ್ಯದಲ್ಲಿ ಕಾಂಗ್ರೆಸ್ನಿಂದ ಮಹಿಳೆಯರಿಗೆ ರಕ್ಷಣೆ ನೀಡಲು ಸಾಧ್ಯವೇ ಎಂದು ಪ್ರಶ್ನಿಸಿದ ಅವರು, ಈ ಬಗ್ಗೆ ಮಾತನಾಡುವ ನೈತಿಕತೆಯನ್ನು ಕಾಂಗ್ರೆಸ್ ಕಳೆದುಕೊಂಡಿದೆ ಎಂದು ಹೇಳಿದರು.
ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಹಾಗೂ ಬಿಜೆಪಿ ಏನೆಲ್ಲಾ ಭ್ರಷ್ಟಾಚಾರ ಮಾಡಿವೆ ಎಂಬುದು ಎಲ್ಲ ಜನರಿಗೂ ತಿಳಿದಿದೆ. ಈ ಕುರಿತು ಮತ್ತೆ ಮತ್ತೆ ಹೇಳುವ ಅವಶ್ಯಕತೆ ಇಲ್ಲ. ಇದರ ಆಧಾರದ ಮೇಲೆ ಜೆಡಿಎಸ್ ಮತ ಕೇಳುತ್ತಿಲ್ಲ. ಈ ಹಿಂದೆ ಜೆಡಿಎಸ್ ಮಾಡಿರುವ ಜನಪರ ಕೆಲಸಗಳ ಆಧಾರದ ಮೇಲೆ ಮತ ನೀಡುವಂತೆ ಜನರಲ್ಲಿ ವಿನಂತಿಸುತ್ತಿದ್ದೇವೆ ಎಂದರು.
ಗ್ರಾಮ ವಾಸ್ತವ್ಯ: ರಾಜ್ಯದಲ್ಲಿ ಮಳೆ ಇಲ್ಲದೆ ಬರಗಾಲ ಬಂದಿತ್ತು. ಆಗ ರೈತರ ಸರಣಿ ಆತ್ಮಹತ್ಯೆ ನಡೆಯುತ್ತಿತ್ತು. ರೈತರಲ್ಲಿ ಆತ್ಮಸ್ಥೈರ್ಯ ತುಂಬಲು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ರಾಜ್ಯಾದ್ಯಂತ ಮಾಡಲಾಯಿತು.
ಆ ಸಂದರ್ಭದಲ್ಲಿ ರೈತರ ಸಮಸ್ಯೆ ಆಲಿಸಿ, ಬೆಲೆ ಸಾಲ ಮನ್ನಾ ಮಾಡಲಾಯಿತು. ಅದೇ ರೀತಿ ಹಲವು ನೀರಾವರಿ ಯೋಜನೆಗಳಿಗೆ ಅನುಮೋದನೆ ನೀಡಲಾಯಿತು. ಈ ಬಾರಿಯ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳಿಗೆ ಮತ ನೀಡಿ, ಗೆಲವಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು. ಜೆಡಿಎಸ್ ಅಭ್ಯರ್ಥಿ ಎಸ್.ಎಲ್. ಧರ್ಮೇಗೌಡ ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

