ಚಿಕ್ಕಮಗಳೂರು

ಜಿಲ್ಲೆಯಲ್ಲಿ ಹೆಚ್ಚಿನ ಮತ ಕಾಂಗ್ರೆಸ್‌ಗೆ: ಮೂರ್ತಿ

Published On :

ಕ.ಪ್ರ.ವಾರ್ತೆ, ಚಿಕ್ಕಮಗಳೂರು,  ಮೇ 10
ಜಿಲ್ಲೆಯಲ್ಲಿ ಕಾಂಗ್ರೆಸ್ ಒಂದು ಸ್ಥಾನದಲ್ಲಿ ಗೆಲುವು ಕಂಡಿದೆ. ಉಳಿದ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಸೋತಿದ್ದರೂ ಜಿಲ್ಲೆಯಲ್ಲಿ ಒಟ್ಟಾರೆಯಾಗಿ ಬೇರೆಲ್ಲ ಪಕ್ಷಗಳಿಗಿಂತಲೂ ಹೆಚ್ಚಿನ ಮತವನ್ನು ಕಾಂಗ್ರೆಸ್ ಪಡೆದುಕೊಂಡಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಎಲ್. ಮೂರ್ತಿ ಹೇಳಿದ್ದಾರೆ.
ಕಾಂಗ್ರೆಸ್ ಒಟ್ಟಾರೆ 1.93 ಲಕ್ಷ ಮತವನ್ನು ಪಡೆದುಕೊಂಡಿದೆ. ಬಿಜೆಪಿ 1.25 ಲಕ್ಷ ಮತ ಪಡೆದುಕೊಂಡಿದ್ದರೆ ಜೆಡಿಎಸ್ ಮೂರನೆ ಸ್ಥಾನದಲ್ಲಿದೆ. ಆದರೂ ಈ ಸೋಲನ್ನು ಪಕ್ಷ ಒಪ್ಪಿಕೊಳ್ಳಲೇಬೇಕು. ಸೋಲಿನ ನೈತಿಕ ಹೊಣೆಯನ್ನು ಪಕ್ಷದ ಜಿಲ್ಲಾಧ್ಯಕ್ಷರಾದ ತಾವೇ ಹೊರುವುದಾಗಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಆತ್ಮಾವಲೋಕನ: ಸೋಲಿನಿಂದ ಪಕ್ಷ ದೃತಿಗೆಟ್ಟಿಲ್ಲ. ಶೀಘ್ರದಲ್ಲಿಯೇ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ಕರೆಯಲಾಗುವುದು. ಸೋಲಿನ ಬಗ್ಗೆ
ಆತ್ಮಾವಲೋಕನ ಮಾಡಿಕೊಂಡು ಆಗಿರುವ ತಪ್ಪುಗಳನ್ನು ಸರಿಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ಸಂಘಟನೆಯ ದೃಷ್ಟಿಯಿಂದ ಕಾಂಗ್ರೆಸ್ ಇಡೀ ರಾಜ್ಯದಲ್ಲಿಯೇ ಉತ್ತಮವಾಗಿತ್ತು. ಪಕ್ಷದ ಎಲ್ಲ ಕಾರ್ಯಕ್ರಮಗಳನ್ನೂ ಯಶಸ್ವಿಯಾಗಿ ಮಾಡಲಾಗಿತ್ತು. ಸ್ಥಳೀಯ ಸಮಸ್ಯೆಗಳ ಬಗ್ಗೆ ಹೋರಾಟ ಮಾಡಲಾಗುತ್ತಿತ್ತು. ಆದರೂ ಪಕ್ಷ ಸೋತಿರುವುದು ಅಚ್ಚರಿ ಮೂಡಿಸಿದೆ ಎಂದರು.
ಎಲ್ಲರಿಗೂ ಕುರ್ಚಿ ಬೇಕು: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲರೂ ನಾಯಕರಾಗಿದ್ದಾರೆ. ಎಲ್ಲರಿಗೂ ಕುರ್ಚಿ ಬೇಕು. ಆದರೆ ಮತದಾರರನ್ನು ಭೇಟಿ ಮಾಡಿ ಮತ ಯಾಚಿಸಲು ಯಾರೂ ಸಿದ್ದರಿಲ್ಲ ಎಂದು ವಿಷಾಧ ವ್ಯಕ್ತಪಡಿಸಿದ ಅವರು, ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಅಭ್ಯರ್ಥಿಗಳೊಡನೆ ಕಾಣಿಸಿಕೊಳ್ಳುತ್ತಿದ್ದರೇ ವಿನಃ ಮತದಾರರನ್ನು ಭೇಟಿಯಾಗಿ ಮತ ಯಾಚಿಸಲು ಹೋಗಲಿಲ್ಲ. ಪಕ್ಷದ ಸೋಲಿಗೆ ಇದೂ ಒಂದು ಪ್ರಮುಖ ಕಾರಣವಾಗಿದೆ ಎಂದು ಹೇಳಿದರು.
ಶ್ರೀಮಂತರ ಸರಕು: ಇತ್ತೀಚಿನ ದಿನಗಳಲ್ಲಿ ಪ್ರಜಾಪ್ರಭುತ್ವ ಶ್ರೀಮಂತರ ಸರಕಾಗಿ ಪರಿಣಮಿಸಿದೆ. ಹಣವಿಲ್ಲದವರು ಚುನಾವಣೆಯನ್ನು ಎದುರಿಸಲು ಸಾಧ್ಯವಿಲ್ಲವೆಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಹಣ, ಹೆಂಡ ಹಂಚುವವರು ಮಾತ್ರ ಗೆಲ್ಲಲು ಸಾಧ್ಯ ಎಂಬಂತಾಗಿದೆ. ಯಾವ ಸಮುದಾಯ ತಮಗೆ ಮತ ನೀಡುವುದಿಲ್ಲವೆಂಬ ಖಾತ್ರಿ ಬಿಜೆಪಿಯವರಿಗಿತ್ತೋ ಅಂತಹ ಸಮುದಾಯದ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಡಿಸಲಾಯಿತು. ಮತ್ತೆ ಕೆಲವು ಮತದಾರರಿಗೆ ಹಣ ನೀಡಿ ಅವರ ಬೆರಳಿಗೆ ಚುನಾವಣೆಗೆ ಮುನ್ನವೇ ಬಣ್ಣ ಹಚ್ಚುವ ಕೆಲಸವನ್ನೂ ಮಾಡಿದ್ದಾರೆ ಎಂದು ದೂರಿದರು.
ಶೀಘ್ರದಲ್ಲಿಯೇ ಲೋಕಸಭಾ, ಜಿಪಂ ಚುನಾವಣೆಗಳು ಬರಲಿವೆ. ಜಿಲ್ಲೆಯಲ್ಲಿ ಕೇವಲ ಒಬ್ಬರು ಗೆದ್ದಿದ್ದಾರೆ. ಜಿಲ್ಲೆಯಲ್ಲಿ ಪಕ್ಷವನ್ನು ಸಂಘಟಿಸಲು, ಮುಂಬರುವ ಚುನಾವಣೆಗಳಿಗೆ ಸಜ್ಜುಗೊಳಿಸಲು ಅನುಕೂಲವಾಗುವಂತೆ ಮಂತ್ರಿ ಮಂಡಲದಲ್ಲಿ ಜಿಲ್ಲೆಗೆ ಪ್ರಾತಿನಿಧ್ಯ ನೀಡುವಂತೆ ಪಕ್ಷದ ಹೈಕಮಾಂಡನ್ನು ಒತ್ತಾಯಿಸುವುದಾಗಿ ತಿಳಿಸಿದರು.
ಜೆಡಿಎಸ್ ಡಸ್ಟ್‌ಬಿನ್: ಜೆಡಿಎಸ್ ಒಂದು ಡಸ್ಟ್‌ಬಿನ್ ಇದ್ದ ಹಾಗೆ. ಬೇರೆ ಬೇರೆ ಪಕ್ಷಗಳಲ್ಲಿ ಟಿಕೆಟ್ ದೊರೆಯದವರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಂಡು ಟಿಕೆಟ್ ನೀಡಿ ಗೆಲ್ಲಿಸಿಕೊಂಡಿದ್ದಾರೆ. ಇಂತಹ ಪಕ್ಷದವರಿಂದ ತಾವು ಪಾಠ ಹೇಳಿಸಿಕೊಳ್ಳುವ ಅಗತ್ಯವಿಲ್ಲ ಎಂದು ಎಂ.ಎಲ್. ಮೂರ್ತಿ ವ್ಯಂಗ್ಯವಾಡಿದರು.
ಎಚ್.ಎಚ್. ದೇವರಾಜ್ ಒಬ್ಬ ಅಲೆಮಾರಿ. ಪಕ್ಷದಿಂದ ಪಕ್ಷಕ್ಕೆ ಹಾರುವುದೇ ಅವರ ಕೆಲಸ. ಈಗ ಅವರು ಯಾವ ಪಕ್ಷದಲ್ಲಿದ್ದಾರೋ ತಮಗೆ ತಿಳಿದಿಲ್ಲ ಎಂದು ಹೇಳಿದ ಅವರು, ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ನೆಲ ಕಚ್ಚಿದೆ ಎಂದು ಹೇಳಿದ್ದಾರೆ. ನಮ್ಮ ಪಕ್ಷದ ಬಗ್ಗೆ ಟೀಕಿಸುವ ನೈತಿಕತೆ ಅವರಿಗಿಲ್ಲ. ನಮ್ಮ ಪಕ್ಷದ ಬಗ್ಗೆ ಮಾತನಾಡಲು ಪಕ್ಷದ ಕಾರ್ಯಕರ್ತರಿದ್ದಾರೆ. ಅವರು ಈಗ ಎಲ್ಲಿದ್ದಾರೋ ಆ ಮನೆಯ ಕೆಲಸವನ್ನು ಸರಿಯಾಗಿ ಮಾಡಲಿ ಎಂದು ಸಲಹೆ ನೀಡಿದರು.
ಕಾಂಗ್ರೆಸ್ ಪಕ್ಷದಲ್ಲಿ ಕ್ಷೇತ್ರದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ವಿಳಂಬ ಮಾಡಿದ್ದೂ ಪಕ್ಷದ ಸೋಲಿಗೆ ಕಾರಣವಾಗಿದೆ. ಅಲ್ಲದೆ, ಪಕ್ಷದ ಕೆಲವು ಮುಖಂಡರು ಪಕ್ಷದ ಅಭ್ಯರ್ಥಿಯ ವಿರುದ್ಧ ಪ್ರಚಾರ ಮಾಡಿದ್ದಾರೆ ಎಂಬ ಮಾತುಗಳೂ ಕೇಳಿ ಬರುತ್ತಿವೆ. ಆದರೆ ಈವರೆಗೂ ಲಿಖಿತವಾಗಿ ಯಾವ ದೂರು ಬಂದಿಲ್ಲ. ಈ ಬಗ್ಗೆ ಪರಿಶೀಲಿಸಿ ತಪ್ಪು ಮಾಡಿದವರು ಎಷ್ಟೇ ದೊಡ್ಡವರಾಗಿದ್ದರೂ ಅವರ ವಿರುದ್ದ ಪಕ್ಷ ಶಿಸ್ತು ಕ್ರಮ ಕೈಗೊಳ್ಳುತ್ತದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಕೆ. ಮಹಮದ್, ಎ.ಎನ್. ಮಹೇಶ್, ರಾಜು, ವೇಣುಗೋಪಾಲ್, ಮಂಜೇಗೌಡ, ಕೃಷ್ಣ, ಶ್ರೀಧರ್ ಉರಾಳ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.