ಜನ ಸೇವೆಗಾಗಿ ರಾಜಕೀಯಕ್ಕೆ...
ಕ.ಪ್ರ.ವಾರ್ತೆ, ಚಿಕ್ಕಮಗಳೂರು, ಮೇ 15
ಹಣ ಮಾಡುವ ಉದ್ದೇಶದಿಂದ ರಾಜಕೀಯಕ್ಕೆ ಬಂದವನಲ್ಲ. ಸೇವಾ ಮನೋಭಾವನೆಯಿಂದ ರಾಜಕೀಯಕ್ಕೆ ಬಂದವನು ನಾನು. ಆದರೆ, ಈ ಚುನಾವಣೆಯಲ್ಲಿ ಹಣ ಹೆಂಡದ ವ್ಯಾಪಕ ಬಳಕೆಯಿಂದ ಬಿಜೆಪಿ ಗೆದ್ದಿದೆ ಎಂದು ಮಾಜಿ ಶಾಸಕ ಎಸ್.ಎಲ್. ಧರ್ಮೇಗೌಡ ಹೇಳಿದ್ದಾರೆ.
ಜೆಡಿಎಸ್ ಕಚೇರಿಯಲ್ಲಿ ಬುಧವಾರ ನಡೆದ ಆತ್ಮಾವಲೋಕನ ಸಭೆಯಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ಜನತೆಯ ತೀರ್ಪೇ ಅಂತಿಮವಾಗಿದ್ದು, ಜನಾದೇಶವನ್ನು ಪ್ರತಿಯೊಬ್ಬರೂ ಪಾಲಿಸಬೇಕು. ಪಕ್ಷದ ಕಾರ್ಯಕರ್ತರು ಚುನಾವಣೆಯಲ್ಲಿ ಹೆಚ್ಚಿನ ಶ್ರಮ ಹಾಕಿ ಕೆಲಸ ಮಾಡಿದ್ದಾರೆ. ಕಾರ್ಯಕರ್ತರೇ ನಮ್ಮ ಆಸ್ತಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಧಿಕಾರ ಬಂದವರು ಅಭಿವೃದ್ಧಿ ಕೆಲಸಗಳತ್ತ ಗಮನ ಹರಿಸಬೇಕು. ವಿಜೇತರಾದ ಸಿ.ಟಿ. ರವಿಯವರು ನೆನೆಗುದಿಗೆ ಬಿದ್ದಿರುವ ಕ್ಷೇತ್ರದ ಅಭಿವೃದ್ಧಿ ಕೆಲಸಗಳನ್ನು ಪ್ರಾಮಾಣಿಕವಾಗಿ ಶ್ರಮಿಸಿ ಪೂರೈಸಬೇಕು ಎಂದರು.
ಉತ್ತಮ ಕೆಲಸ: ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅಧಿಕಾರ ಸ್ವೀಕರಿಸಿ ರೈತಾಪಿ ವರ್ಗಕ್ಕೆ ಅನುಕೂಲವಾಗಲೆಂದು ಒಂದು ರುಪಾಯಿಗೆ ಕೆ.ಜಿ. ಅಕ್ಕಿ ವಿತರಣೆ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಸಾಲ ಮನ್ನಾ, ಹಾಲಿನ ಸಹಾಯಧನದ ಹೆಚ್ಚಳ ಇತ್ಯಾದಿಗಳನ್ನು ಘೋಷಿಸಿರುವುದು ಉತ್ತಮ ಕೆಲಸವಾಗಿದೆ ಎಂದು ಅವರು ಹೇಳಿದರು.
ಚುನಾವಣೆಗೂ ಮುನ್ನ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ಚುನಾವಣಾ ಪ್ರಣಾಳಿಕೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ಸಾಲ ಮನ್ನಾ, ಸಬ್ಸಿಡಿ ದರದಲ್ಲಿ ಗೊಬ್ಬರ ವಿತರಣೆಯ ಘೋಷಣೆ ಮಾಡಿದ್ದರು. ಮತದಾರರು ಸಂಪೂರ್ಣ ಬಹುಮತ ನೀಡದೆ ಪಕ್ಷ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗಿದೆ ಎಂದರು.
ಹೋರಾಡುತ್ತೇವೆ: ಎಸ್.ಎಲ್. ಬೋಜೇಗೌಡ ಮಾತನಾಡಿ, ಕ್ಷೇತ್ರದಲ್ಲಿ ಅಭಿವೃದ್ಧಿ ಹೆಸರಿನಲ್ಲಿ ನಡೆದಿರುವ ಕಳಪೆ ಕಾಮಗಾರಿಗಳ ವಿರುದ್ಧ ಜೆಡಿಎಸ್ ನಿರಂತರ ಹೋರಾಟ ಮಾಡುವುದರ ಜೊತೆಗೆ ನ್ಯಾಯಾಲಯದಲ್ಲಿ ನ್ಯಾಯಕ್ಕಾಗಿ ಹೋರಾಡುತ್ತೇವೆ. ಹಿಂದೆ ಈ ರೀತಿಯ ಹಣ ಹೆಂಡ ಹಂಚಿ ಚುನಾವಣೆ ನಡೆಯುತ್ತಿರಲಿಲ್ಲ. ಹಗಲು ರಾತ್ರಿಯಷ್ಟು ಚುನಾವಣೆ ಬದಲಾಗಿದೆ. ವ್ಯಕ್ತಿಗಿಂತ ಹಣಕ್ಕೆ ಪ್ರಾಮುಖ್ಯತೆ ದೊರೆಯುತ್ತಿರುವುದು ದುರದೃಷ್ಟಕರ ಬೆಳವಣಿಗೆ ಎಂದರು.
ಮುಖಂಡ ಕೆ. ಭರತ್ ಮಾತನಾಡಿ, ನಗರದಲ್ಲಿ ನಡೆದಿರುವ ಯುಜಿಡಿ ಕಾಮಗಾರಿ ಸಂಪೂರ್ಣಕಳಪೆ ಗುಣಮಟ್ಟದಿಂದ ಕೂಡಿದ್ದು, ಮುಂದೆ ಜನ ಪಶ್ಚಾತ್ತಾಪ ಪಡುತ್ತಾರೆ. ಅಕ್ರಮವಾಗಿ ನಡೆದಿರುವ ಕಾಮಗಾರಿಗಳ ವಿರುದ್ಧ ಬೀದಿಗಿಳಿದು ಪ್ರತಿಭಟನೆ ಮಾಡಲು ಸಿದ್ಧ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪಕ್ಷದ ಅನಿಲ್ ಕುಮಾರ್, ಪರಿಶಿಷ್ಟ ವಿಭಾಗ ಜಿಲ್ಲಾಧ್ಯಕ್ಷ ದೇವಿಪ್ರಸಾದ್, ಜಿಲ್ಲಾಧ್ಯಕ್ಷ ಮಂಜಪ್ಪ, ನಗರಸಭೆ ಮಾಜಿ ಅಧ್ಯಕ್ಷ ಜಮೀಲ್ ಅಹ್ಮದ್, ಚಂದಯ್ಯ, ಚಂದ್ರೇಗೌಡ, ನಗರಸಭೆ ಮಾಜಿ ಸದಸ್ಯ ಚಂದ್ರಪ್ಪ ಸಭೆಯಲ್ಲಿ ಭಾಗವಹಿಸಿದ್ದರು.
--
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

