ಮೋಟಮ್ಮಗೆ ಸಚಿವ ಸ್ಥಾನ ನೀಡಲು ಒತ್ತಾಯ
ಚಿಕ್ಕಮಗಳೂರು: ಕಾಂಗ್ರೆಸ್ನ ನೂತನ ಮಂತ್ರಿಮಂಡಲದಲ್ಲಿ ಜಿಲ್ಲೆಯನ್ನು ಕಡೆಗಣಿಸಿರುವುದನ್ನು ನಗರಸಭೆ ಸದಸ್ಯ ಹಿರೇಮಗಳೂರು ಪುಟ್ಟಸ್ವಾಮಿ ಖಂಡಿಸಿದ್ದು, ಸಂಪುಟದಲ್ಲಿ ಕಾಂಗ್ರೆಸ್ನ ಹಿರಿಯ ನಾಯಕಿ ಮೋಟಮ್ಮ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಬಿಜೆಪಿ ಸರಕಾರ ಅಸ್ತಿತ್ವಕ್ಕೆ ಬಂದಿದ್ದ ಸಂದರ್ಭದಲ್ಲೂ ಚಿಕ್ಕಮಗಳೂರು ಜಿಲ್ಲೆಯನ್ನು ಕಡೆಗಣಿಸಲಾಗಿತ್ತು. ಈಗ ಅದು ಮರುಕಳಿಸುವ ಮೂಲಕ ಜ್ವಲಂತ ಸಮಸ್ಯೆಗಳನ್ನು ಹೊಂದಿರುವ ಜಿಲ್ಲೆಯನ್ನು ನಿರ್ಲಕ್ಷಿಸಿರುವ ಕ್ರಮ ಸರಿಯಲ್ಲ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ನಕ್ಸಲ್ ಸಮಸ್ಯೆಯಿಂದ ಈಗಾಗಲೇ ಬಳಲಿರುವ ಮಲೆನಾಡ ಜನರು ನೆಮ್ಮದಿ ಕಳೆದುಕೊಂಡಿದ್ದಾರೆ. ಬೂದಿ ಮುಚ್ಚಿದ ಕೆಂಡದಂತಿರುವ ಈ ಸಮಸ್ಯೆ ಯಾವುದೇ ಸಂದರ್ಭದಲ್ಲಿ ಬೇಕಾದರೂ ಮಲೆನಾಡ ಜನರ ನಿದ್ರೆಗೆಡಿಸಬಹುದು. ಸರಕಾರ ಕೈಗೊಂಡಿರುವ ಯಾವುದೇ ಪರಿಹಾರ ಕ್ರಮಗಳು ನಕ್ಸಲ್ ಶಮನಗೊಳಿಸಿಲ್ಲ. ಮಲೆನಾಡ ಸಂಸ್ಕೃತಿಗೆ ತೀವ್ರ ಧಕ್ಕೆಯಾಗಿರುವ ಈ ಸಮಸ್ಯೆ ಅಭಿವೃದ್ಧಿಗೆ ತೀವ್ರ ಪೆಟ್ಟುಕೊಟ್ಟಿದೆ ಎಂದು ಹೇಳಿದ್ದಾರೆ.
ಸಾಲು ಸಾಲು ಸಮಸ್ಯೆ: ಒತ್ತುವರಿ ಸಮಸ್ಯೆಯಿಂದ ಈಗಾಗಲೇ ದೊಡ್ಡ, ಸಣ್ಣ ಬೆಳೆಗಾರರು, ಕೂಲಿ ಕಾರ್ಮಿಕರು ಮತ್ತು ಬಡವರು ಅತಂತ್ರ ಸ್ಥಿತಿಯಲ್ಲಿರುವುದರ ಜತೆಗೆ ಕಂಗಾಲಾಗಿದ್ದಾರೆ. ಒಂದು ಕಡೆ ಸರಕಾರ ಮತ್ತು ಇನ್ನೊಂದು ಕಡೆ ಕೋರ್ಟ್ ಆದೇಶಗಳು ಜನರ ನೆತ್ತಿಯ ಮೇಲಿನ ತೂಗು ಕತ್ತಿಯಾಗಿವೆ. ಗಂಭೀರ ಸಮಸ್ಯೆಗಳಲ್ಲಿ ಒಂದಾಗಿರುವ ಒತ್ತುವರಿ ಸಮಸ್ಯೆ ಕಗ್ಗಂಟಾಗಿಯೇ ಉಳಿದಿದೆ. ಈ ಸಮಸ್ಯೆ ಕೂಡ ಜಿಲ್ಲೆಯ ಅಭಿವೃದ್ಧಿ ಕುಂಠಿತಕ್ಕೆ ಕಾರಣವಾಗಿದೆ. ಇವುಗಳಂತೆಯೇ ಭದ್ರಾ ಮೇಲ್ದಂಡೆ ಯೋಜನೆ, ಕಾಫಿ, ತೆಂಗು, ಅಡಕೆ ಬೆಳೆಗಾರರ ಸಮಸ್ಯೆ, ದತ್ತ ಪೀಠ ವಿವಾದ ಸೇರಿದಂತೆ ಅನೇಕ ಸಮಸ್ಯೆಗಳು ಜಿಲ್ಲೆಯ ಅಭಿವೃದ್ಧಿಗೆ ಮಾರಕವಾಗಿವೆ ಎಂದಿದ್ದಾರೆ.
ರಾಜ್ಯದಲ್ಲಿಯೇ ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಚಿಕ್ಕಮಗಳೂರು ಜಿಲ್ಲೆ ಒಂದಾಗಿರುವ ಈ ಸಂದರ್ಭದಲ್ಲಿ ರಾಜ್ಯ ಸಚಿವ ಸಂಪುಟದಲ್ಲಿ ಅವಕಾಶವನ್ನು ಕಲ್ಪಿಸದಿರುವುದು ವಿಷಾದದ ಸಂಗತಿಯಾಗಿದೆ. ಬಿಜೆಪಿ ಆಡಳಿತದ ಕೊನೆಯ ಸಂದರ್ಭದಲ್ಲಿ ಸಚಿವ ಸಂಪುಟದಲ್ಲಿ ಅವಕಾಶವನ್ನು ಕಲ್ಪಿಸಲಾಗಿತ್ತು. ಆದರೆ, ನಿರೀಕ್ಷಿತ ಅಭಿವೃದ್ಧಿ ಸಾಧ್ಯವಾಗಲಿಲ್ಲ ಎಂದು ತಿಳಿಸಿದ್ದಾರೆ.
ನಿರಾಸೆ ಮೂಡಿಸಿದೆ: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆಯೇ ತೆಗೆದುಕೊಂಡಿರುವ ಕ್ರಮಗಳು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿವೆ. ಆದರೆ, ಅವರು ತಮ್ಮ ಸಂಪುಟದಲ್ಲಿ ಜಿಲ್ಲೆಯನ್ನು ಕಡೆಗಣಿಸಿರುವುದು ನಿರಾಸೆ ಮೂಡಿಸಿದೆ ಎಂದು ಹೇಳಿದ್ದಾರೆ.
ಈಗಲಾದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪಕ್ಷದ ವರಿಷ್ಠರು ಈ ಬಗ್ಗೆ ಗಮನಹರಿಸಿ ಮೋಟಮ್ಮ ಮತ್ತು ಜಿಲ್ಲೆಗೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

