ಚಿಕ್ಕಮಗಳೂರು

ಸ್ಪೀಕರ್ ಹುದ್ದೆಯಿಂದ ಅಭಿವೃದ್ಧಿಗೆ ಹಿನ್ನಡೆ ಇಲ್ಲ: ಕಾಗೋಡು

Published On :

ಕ.ಪ್ರ.ವಾರ್ತೆ ಟಿ ಸಾಗರ ಟಿ  ಮೇ 20
ಸ್ಪೀಕರ್ ಹುದ್ದೆಯಿಂದ ಕ್ಷೇತ್ರದ ಅಭಿವೃದ್ಧಿಗೆ ಯಾವುದೇ ಹಿನ್ನಡೆ ಆಗುವುದಿಲ್ಲ ಎಂದು ಶಾಸಕ ಕಾಗೋಡು ತಿಮ್ಮಪ್ಪ ಹೇಳಿದರು.
ತಾಲೂಕು ಪಂಚಾಯ್ತಿ ಸಾಮಾನ್ಯ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಎಲ್ಲ ಇಲಾಖೆಗಳ ಸಂಪರ್ಕ ದೊರೆಯುವುದರಿಂದ ಎರಡರಷ್ಟು ಅಭಿವೃದ್ಧಿ ಮಾಡಿ ತೋರಿಸುತ್ತೇನೆ. ಸದನಕ್ಕೆ ಗೌರವ ಬರುವ ರೀತಿಯಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಈ ನಿಟ್ಟಿನಲ್ಲಿ ತಮಗೆ ಎಲ್ಲರ ಸಹಕಾರ ದೊರೆಯುವ ನಂಬಿಕೆ ಇದೆ ಎಂದರು.
ಗಲಾಟೆ ಮಾಡಬೇಡಿ: ಮಂತ್ರಿಸ್ಥಾನ ನೀಡದಿರುವುದನ್ನು ಖಂಡಿಸಿ ಪ್ರತಿಭಟನೆ ನಡೆದ ಬಗ್ಗೆ, ಹೀಗೆಲ್ಲ ಗಲಾಟೆ ಮಾಡಬಾರದು. ಹತ್ತು ವರ್ಷಗಳ ನಂತರ ಪಕ್ಷಕ್ಕೆ ಅಧಿಕಾರ ದೊರಕಿದ್ದು ಈಗ ನಾವು ಮಾದರಿಯಾಗಿ ನಡೆದುಕೊಳ್ಳಬೇಕು ಎಂದು ಹೇಳಿದರು.
ಮೊದಲು ಸ್ಪೀಕರ್ ಹುದ್ದೆ ನಿರಾಕರಿಸಿದ ಕುರಿತು ಪ್ರತಿಕ್ರಿಯಿಸಿ, ಇಂಡೀಕರಣ, ಬಗರ್ ಹುಕುಂ, ಅರಣ್ಯಹಕ್ಕು ಕಾಯ್ದೆ ಮೊದಲಾದ ಸಮಸ್ಯೆಗಳಿಗೆ ಪರಿಹಾರ ಕಾಣಬೇಕು ಎಂಬ ಉದ್ದೇಶದಿಂದ ನಾನು ಈ ಬಾರಿ ಸ್ಪರ್ಧಿಸಿದ್ದೆ. ಮಂತ್ರಿಮಂಡಲದೊಳಗೆ ಅವಕಾಶ ದೊರೆತರೆ ಸಮಸ್ಯೆಗಳ ಬಗ್ಗೆ ಸರಿಯಾದ ರೀತಿಯಲ್ಲಿ ಪ್ರತಿಪಾದನೆ ಮಾಡಿ ಪರಿಹಾರ ಕಂಡುಕೊಳ್ಳಬಹುದು ಎನ್ನುವ ಕಾರಣಕ್ಕಾಗಿ ಸ್ಪೀಕರ್ ಹುದ್ದೆ ನಿರಾಕರಿಸಿದ್ದೆ ಎಂದು ತಿಳಿಸಿದರು.
ಅಗ್ಯವಿರುವೆಡೆ ಕೊಳವೆಬಾವಿ: ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಿದೆ. ಅದಕ್ಕಾಗಿ ಎಲ್ಲೆಡೆ ತೆರೆದ ಬಾವಿ ಆಳ ಮಾಡುವುದು, ಅಗತ್ಯವಿರುವೆಡೆ ಕೊಳವೆಬಾವಿ ನಿರ್ಮಾಣ ಕೆಲಸ ವ್ಯವಸ್ಥಿತವಾಗಿ ಆಗುತ್ತಿಲ್ಲ. ಇದಕ್ಕಾಗಿ ಜಿಲ್ಲಾಧಿಕಾರಿಗಳು ಸುಮಾರು 1 ಕೋಟಿ ಹಣ ಬಿಡುಗಡೆ ಮಾಡಿ ಕಾಮಗಾರಿ ಪ್ರಾರಂಭಿಸಲು ಮೌಖಿಕ ಆದೇಶ ನೀಡಿದ್ದಾರೆ. ಆದಷ್ಟು ಬೇಗ ಕೆಲಸ ಪೂರೈಸಿ ಹಣ ಸದುಪಯೋಗಪಡಿಸಿಕೊಳ್ಳಬೇಕು. ಇದನ್ನು ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ನಿರ್ವಹಿಸಬೇಕು. ಗ್ರಾಮ ಪಂಚಾಯ್ತಿಗಳಿಗೆ ಅಗತ್ಯ ಮಾರ್ಗದರ್ಶನ ನೀಡಬೇಕು ಎಂದು ಹೇಳಿದರು.
ಬರ ನಿರ್ವಹಣೆಯಲ್ಲಿ ಅಧಿಕಾರಿಗಳು ಇಚ್ಛಾಶಕ್ತಿ ತೋರುತ್ತಿಲ್ಲ. ಅನಾವಶ್ಯಕ ಗೊಂದಲ ಸೃಷ್ಟಿಸಿ ವಿಳಂಬ ಮಾಡುತ್ತಿದ್ದಾರೆ. ಸರ್ಕಾರದ, ಹಿರಿಯ ಅಧಿಕಾರಿಗಳ ಸುತ್ತೋಲೆಯನ್ನು ಸರಿಯಾಗಿ ಅರ್ಥಮಾಡಿಕೊಂಡು ಕೆಲಸ ಮಾಡಬೇಕು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.