ಭ್ರಷ್ಟಾಚಾರ ರಹಿತ ಆಡಳಿತ ಪಕ್ಷದ ಗುರಿ
ಕ.ಪ್ರವಾರ್ತೆ,ಚಿಕ್ಕಮಗಳೂರು,ಮೇ 26
ಭ್ರಷ್ಟಾಚಾರ ರಹಿತ ಆಡಳಿತ ನೀಡುವುದೇ ಕಾಂಗ್ರೆಸ್ನ ಮೂಲ ಗುರಿ ಎಂದು ರಾಜ್ಯದ ಗೃಹ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.
ಈ ಹಿಂದೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರದ ಭ್ರಷ್ಟಾಚಾರವನ್ನು ಕಂಡು ಜನರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದ್ದಾರೆ. ಇದೀಗ ಕಾಂಗ್ರೆಸ್ ಬಿಜೆಪಿಯ ದಾರಿಯಲ್ಲಿ ಸಾಗಿದರೆ ಅರ್ಥ ಇರುವುದಿಲ್ಲ. ಅದುದರಿಂದ ಕರ್ನಾಟಕ ರಾಜ್ಯದಲ್ಲಿ ಪಾರದರ್ಶಕ, ಶುದ್ದ ಆಡಳಿತ ನೀಡಬೇಕು ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿಯವರು ಕರೆ ನೀಡಿದ್ದಾರೆ. ಇದನ್ನು ಯಾರೂ ಕೂಡ ಮರೆಯಬಾರದು ಎಂದು ಭಾನುವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಹೇಳಿದರು.
ಒಂದೇ ಜಾತಿ, ಒಂದೇ ಭಾಷೆ: ಪಕ್ಷಕ್ಕೆ ಸಾಮಾನ್ಯ ಕಾರ್ಯಕರ್ತರನ್ನಾಗಿ ಬಂದೆ, ಶಾಸಕನಾಗಿ, ಮಂತ್ರಿಯಾಗುವ ಕನಸು ಕಂಡಿರಲಿಲ್ಲ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪಕ್ಷ ದೊಡ್ಡ ಜವಾಬ್ದಾರಿ ನೀಡಿದೆ ಎಂದ ಅವರು, ಕಾಂಗ್ರೆಸ್ ಒಂದೇ ಜಾತಿ, ಒಂದೇ ಭಾಷೆಯ ಪಕ್ಷ. ಜನರ ಅಪೇಕ್ಷೆಯ ಮೇರೆಗೆ ಮುಖ್ಯಮಂತ್ರಿಯವರು ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದಾರೆ. ಹಲವು ವರ್ಷಗಳ ಹಿಂದೆ ಕಾಂಗ್ರೆಸ್ ಜಾರಿಗೆ ತಂದ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಲಾಗುತ್ತಿದೆ ಎಂದು ಹೇಳಿದರು.
ಮಾಜಿ ಪ್ರಧಾನಿ ಇಂದಿರಾಗಾಂಧಿ ಯವರಿಗೆ ರಾಜಕೀಯದಲ್ಲಿ ಪುನರ್ ಜನ್ಮ ನೀಡಿದ ಜಿಲ್ಲೆ ಇದು. ಅವರನ್ನು ಚುನಾವಣೆಯಲ್ಲಿ ಗೆಲ್ಲಿಸಲು ಈ ಜಿಲ್ಲೆಯ ಜನರು ಹೆಚ್ಚು ಶ್ರಮವಹಿಸಿದ್ದರು ಎಂದರು.
ಸರ್ಜರಿ: ಭ್ರಷ್ಟ ಅಧಿಕಾರಿಗಳನ್ನು ಹೊರ ಹಾಕುವ ಕೆಲಸ ರಾಜ್ಯದಲ್ಲಿ ಮಾತ್ರ ಆದರೆ ಸಾಲದು ಜಿಲ್ಲಾ ಮಟ್ಟದಲ್ಲೂ ಆಗಬೇಕು ಎಂದು ಜಿಲ್ಲಾ ಕಾಂಗ್ರೆಸ್ ಮುಖಂಡರು ಗೃಹ ಸಚಿವರಿಗೆ ಮನವಿ ಮಾಡಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಎಲ್. ಮೂರ್ತಿ, ಕಾರ್ಯಾಂಗಕ್ಕೆ ಸರ್ಜರಿ ಆಗಬೇಕು. ಕೆಲವು ಕ್ಯಾನ್ಸರ್ನಂತಹ ಅಧಿಕಾರಿಗಳನ್ನು ಕಿತ್ತು ಹಾಕಬೇಕು. ರಾಜಕೀಯ ಪಕ್ಷದ ಏಜೆಂಟರಂತೆ ಕೆಲಸ ಮಾಡುತ್ತಿರುವ ಅಧಿಕಾರಿಗಳನ್ನು ಬದಲಾವಣೆ ಮಾಡಬೇಕು. ಹೀಗೆ ಮಾಡಿದರೆ ಮಾತ್ರ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪಕ್ಷವನ್ನು ಇನ್ನಷ್ಟು ಗಟ್ಟಿಗೊಳಿಸಲು ಅನುಕೂಲವಾಗಲಿದೆ ಎಂದರು.
ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಪಕ್ಷದ ಸಂಘಟನೆಗಾಗಿ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದಾರೆ. ಅವರ ಮಾರ್ಗದರ್ಶನದಂತೆ ಪಕ್ಷದ ಕಾರ್ಯಕರ್ತರಲ್ಲಿ ಒಳ್ಳೆಯ ನಾಯಕತ್ವ ಬೆಳೆಸೋಣ ಎಂದು ಕರೆ ನೀಡಿದರು.
ಭ್ರಷ್ಟರನ್ನು ಹೊರಹಾಕಿ: ವಿಧಾನಪರಿಷತ್ ಸದಸ್ಯೆ ಗಾಯಿತ್ರಿ ಶಾಂತೇಗೌಡ ಮಾತನಾಡಿ, ಕಳೆದ 9 ವರ್ಷಗಳಲ್ಲಿ ಸಾರ್ವಜನಿಕರು ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಬಹಳಷ್ಟು ಕಷ್ಟ ಅನುಭವಿಸಿ ನೊಂದಿದ್ದಾರೆ. ಜಿಲ್ಲೆಯಲ್ಲಿರುವ ಭ್ರಷ್ಟ ಅಧಿಕಾರಿಗಳನ್ನು ಹೊರ ಹಾಕುವ ಕೆಲಸ ಪಕ್ಷ ಮಾಡಬೇಕು. ಆ ಮೂಲಕ ಸರ್ಕಾರದ ಯೋಜನೆಗಳು ಬಡವರಿಗೆ ದೀನದಲಿತರಿಗೆ ತಲುಪಿಸುವ ಕೆಲಸ ಮಾಡಬೇಕು ಎಂದು ಹೇಳಿದರು.
ಮಾಜಿ ಶಾಸಕ ಕೆ.ಬಿ. ಮಲ್ಲಿಕಾರ್ಜುನ ಮಾತನಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ನ ಹಿರಿಯ ಉಪಾಧ್ಯಕ್ಷ ಡಾ. ಡಿ.ಎಲ್. ವಿಜಯಕುಮಾರ್, ಪ್ರಧಾನ ಕಾರ್ಯದರ್ಶಿ ಕೆ. ಮಹಮ್ಮದ್, ಜಿಲ್ಲಾ ವಕ್ತಾರ ಎ.ಎನ್. ಮಹೇಶ್, ಚಿಕ್ಕಮಗಳೂರು ಬ್ಲಾಕ್ ಸಮಿತಿ ಅಧ್ಯಕ್ಷ ಶ್ರೀಧರ್ ಉರಾಳ್, ಹಿಂದುಳಿದ ವರ್ಗಗಳ ಘಟಕದ ಜಿಲ್ಲಾಧ್ಯಕ್ಷ ಕೆ.ಎಂ. ನಾಗರಾಜ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

