ಚಿಕ್ಕಮಗಳೂರು

ಅಂಗವಿಕಲರ ಅಭಿವೃದ್ಧಿಗಾಗಿ 4 ಹೊಸ ಯೋಜನೆ

Published On :

ಚಿಕ್ಕಮಗಳೂರು: ಅಂಗವಿಕಲರ ಅಭಿವೃದ್ದಿಗಾಗಿ ರಾಜ್ಯ ಸರ್ಕಾರ ಪ್ರಸಕ್ತ ಸಾಲಿನಲ್ಲಿ ನಾಲ್ಕು ಹೊಸ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ರಾಜ್ಯ ವಿಕಲಚೇತನರು ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ನಿರ್ದೇಶಕ ಜಯವಿಭವ ಸ್ವಾಮಿ ಹೇಳಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ನಗರದ ಲಯನ್ಸ್ ಸೇವಾ ಭವನದಲ್ಲಿ ಮಂಗಳವಾರ ಏರ್ಪಡಿಸಿದ್ದ ಗ್ರಾಮೀಣ ಪುನರ್ವಸತಿ ಹಾಗೂ ವಿವಿಧೋದ್ದೇಶ ಕಾರ್ಯಕರ್ತರ ಜಿಲ್ಲಾ ಮಟ್ಟದ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರೋತ್ಸಾಹಧನ: ಈ ಹೊಸ ಯೋಜನೆಗಳಡಿ ಅಂಗವಿಕಲ ಮಹಿಳೆಗೆ ಹೆರಿಗೆಯಾದಲ್ಲಿ ಅವರ ಆರೈಕೆಗಾಗಿ ಸಹಾಯಕರನ್ನು ನೇಮಿಸಿಕೊಳ್ಳಲು ಅವರಿಗೆ ಎರಡು ವರ್ಷಗಳವರೆಗೆ ಪ್ರತಿ ತಿಂಗಳೂ ಎರಡು ಸಾವಿರ ರೂ. ನೀಡಲಾಗುವುದು. ವಿಕಲಚೇತರನ್ನು ವಿವಾಹವಾಗುವವರಿಗೆ  50 ಸಾವಿರ ಪ್ರೋತ್ಸಾಹಧನ ನೀಡಲಾಗುವುದು ಎಂದರು.
ಅಂಗವಿಕಲರಿಗೆ ಉದ್ಯೋಗ ತರಬೇತಿ ಮತ್ತು ಉದ್ಯೋಗ ಮೇಳದ ಮೂಲಕ ಉದ್ಯೋಗ ಒದಗಿಸುವ ಯೋಜನೆಯನ್ನು ಜಾರಿಗೆ ತರಲಾಗಿದ್ದು ಎನೇಬಲ್ ಇಂಡಿಯಾ ಎಂಬ ಸಂಸ್ಥೆಗೆ ಈ ಯೋಜನೆಯನ್ನು ವಹಿಸಲಾಗಿದೆ. ಆ ಸಂಸ್ಥೆಯ ಅಧಿಕಾರಿಗಳು ಪ್ರತಿ ಜಿಲ್ಲೆಗೆ ಆಗಮಿಸಿ 15 ದಿನಗಳ ಕಾಲ ಅಂಗವಿಕಲರಿಗೆ ಉದ್ಯೋಗ ತರಬೇತಿಯನ್ನು ನೀಡುವುದರ ಜೊತೆಗೆ ಅವರಿಗೆ ಉದ್ಯೋಗ ಮೇಳದ ಮೂಲಕ ಉದ್ಯೋಗವನ್ನೂ ಕಲ್ಪಿಸಿಕೊಡುತ್ತಾರೆ ಎಂದು ತಿಳಿಸಿದರು.
ಶುಲ್ಕವಿಲ್ಲ: ಎಸ್.ಎಸ್.ಎಲ್.ಸಿ ನಂತರದ ಯಾವುದೇ ಉನ್ನತ ಶಿಕ್ಷಣಕ್ಕೆ ಸೇರ ಬಯಸುವ ಅಂಗವಿಕಲರಿಗೆ ಶಿಕ್ಷಣದ ಸಂಪೂರ್ಣ ಶುಲ್ಕವನ್ನು ರಾಜ್ಯ ಸರ್ಕಾರದಿಂದ ಭರಿಸಲಾಗುವುದು ಎಂದು ಹೇಳಿದರು.
ಅಂಗವಿಕಲರ ಅಭಿವೃದ್ದಿಗಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು ಅವುಗಳ ಬಗ್ಗೆ ವಿಕಲಚೇತನರಿಗೆ ಮಾಹಿತಿ ನೀಡುವುದರ ಜೊತೆಗೆ ಯೋಜನೆಗಳ ಲಾಭವನ್ನು ಅವರಿಗೆ ತಲುಪಿಸುವ ಕೆಲಸವನ್ನು ಗ್ರಾಮೀಣ ಪುನರ್ವಸತಿ ಹಾಗೂ ವಿವಿದೋದ್ದೇಶ ಕಾರ್ಯಕರ್ತರು ಪ್ರಾಮಾಣಿಕವಾಗಿ ಮಾಡಬೇಕು ಎಂದು ಮನವಿ ಮಾಡಿದರು.
ಜಿಲ್ಲಾಡಳಿತ ಸ್ಪಂದನೆ: ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಬಿ.ಎಸ್. ಶೇಖರಪ್ಪ ಅಂಗವಿಕಲರ ಸಮಸ್ಯೆಗಳಿಗೆ ಜಿಲ್ಲಾಡಳಿತ ಸಕಾರಾತ್ಮಕವಾಗಿ ಸ್ಪಂದಿಸುತ್ತಿದೆ ಎಂದು ತಿಳಿಸಿದರು.
ಅಭಿವೃದ್ಧಿಗೆ ಒತ್ತು: ಆಶಾಕಿರಣ ಅಂಧಮಕ್ಕಳ ಶಾಲೆಯ ಅಧ್ಯಕ್ಷ ಡಾ. ಜೆ.ಪಿ. ಕೃಷ್ಣೇಗೌಡ ಮಾತನಾಡಿ, ಅಂಗವಿಕಲತೆ ಶಾಪವಲ್ಲ. ಅದೊಂದು ಆಕಸ್ಮಿಕ, ಆತ್ಮವಿಶ್ವಾಸದಿಂದ ಅದನ್ನು ಎದುರಿಸಬೇಕು. ಸರ್ಕಾರಗಳು ಮತ್ತು ಅಧಿಕಾರಿಗಳು ವಿಕಲಚೇತನರ ಅಭಿವೃದ್ದಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಮನವಿ ಮಾಡಿದರು.
 ಇದೇ ವೇಳೆ ಆಶಾಕಿರಣ ಅಂಧಮಕ್ಕಳ ಶಾಲೆಯ ವೆಬ್ಸೈಟ್ ಅನ್ನು ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ನಿರ್ದೇಶಕ ಜಯವಿಭವ ಸ್ವಾಮಿ ಉದ್ಘಾಟಿಸಿದರು.
ಜಿ.ಪಂ.ನ ಪ್ರಬಾರಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಎಲ್. ವಿಠಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಹೆಚ್.ಜೆ. ಚಂದ್ರಶೇಖರಯ್ಯ, ಲಯನ್ಸ್ ಬುದ್ದಿಮಾಂಧ್ಯ ಮಕ್ಕಳ ಶಾಲೆಯ ಅಧ್ಯಕ್ಷ ಕೆ.ಡಿ. ಪುಟ್ಟಣ್ಣ, ಜೀವನಸಂಧ್ಯಾ ವೃದ್ದಾಶ್ರಮದ ಅಧ್ಯಕ್ಷ ಎಂ.ಆರ್. ಗುರುಮೂರ್ತಿ, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ಕಾರ್ಯದರ್ಶಿ ಕೆ. ಪ್ರಕಾಶ್, ಹೆಚ್.ಸಿ. ಶಶಿಪ್ರಸಾದ್ ಉಪಸ್ಥಿತರಿದ್ದರು.
ಶಿಕ್ಷಕ ಲಕ್ಷ್ಮೇಗೌಡ ಕಾರ್ಯಕ್ರಮವನ್ನು ನಿರೂಪಿಸಿದರು. ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರಣ ಸಬಲೀಕರಣ ಇಲಾಖೆ ಅಧಿಕಾರಿ ಗೋಪಾಲಕೃಷ್ಣ ಸ್ವಾಗತಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.