ಎಂಇಎಸ್ ಕಾರ್ಯಕರ್ತರ ಬಂಧಿಸಿ
ಚಿಕ್ಕಮಗಳೂರು: ಬೆಳಗಾವಿಯಲ್ಲಿ ಸಂಯುಕ್ತ ಮಹಾರಾಷ್ಟ್ರ ಚೌಕ ನಿರ್ಮಾಣ ಮಾಡಿ ಅಲ್ಲಿ ಮರಾಠಿ ಧ್ವಜವನ್ನು ಹಾರಿಸಿರುವ ಮಹಾರಾಷ್ಟ್ರ ಏಕೀಕರಣ ಸಮಿತಿಯ ಕಾರ್ಯಕರ್ತರನ್ನು ತಕ್ಷಣ ಬಂಧಿಸುವುದರ ಜೊತೆಗೆ ಆ ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧಿಸುವಂತೆ ಒತ್ತಾಯಿಸಿ ಕರವೇ ಕಾರ್ಯಕರ್ತರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.
ವೇದಿಕೆಯ ಜಿಲ್ಲಾಧ್ಯಕ್ಷ ತೇಗೂರು ಜಗದೀಶ್ ಅವರ ನೇತೃತ್ವದಲ್ಲಿ ಹಳೇ ತಾಲೂಕು ಕಚೇರಿ ಆವರಣದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು ಹನುಮಂತಪ್ಪ ವೃತ್ತದ ಬಳಿ ಎಂಇಎಸ್ ಪ್ರತಿಕೃತಿಯನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಬಾಯಿ ಮಾತಿಗೆ ಅಭಿವೃದ್ಧಿ; ಈ ಸಂದರ್ಭದಲ್ಲಿ ಮಾತನಾಡಿದ ತೇಗೂರು ಜಗದೀಶ್, ರಾಜ್ಯ ಸರ್ಕಾರ ಕನ್ನಡ ಭಾಷೆ, ನೆಲ, ಜಲ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುತ್ತೇವೆಂದು ಬರಿ ಬಾಯಿ ಮಾತಿನಲ್ಲಿ ಹೇಳುತ್ತಿದೆ. ಆದರೆ ಇನ್ನೊಂದು ಕಡೆ ಓಟಿಗಾಗಿ ಮರಾಠಿಗರಿಗೆ ಬೆಂಬಲ ನೀಡುತ್ತಿದೆ ಎಂದು ಆರೋಪಿಸಿದರು.
ಬೆಳಗಾವಿಯಲ್ಲಿ ಇತ್ತೀಚೆಗೆ ಸಂಯುಕ್ತ ಮಹಾರಾಷ್ಟ್ರ ಚೌಕ ನಿರ್ಮಾಣ ಮಾಡಿ ಅಲ್ಲಿ ಮರಾಠಿ ಧ್ವಜವನ್ನು ಹಾರಿಸುವ ಮೂಲಕ ಎಂ.ಇ.ಎಸ್. ಕಾರ್ಯಕರ್ತರು ಪುಂಡತನ ಮತ್ತು ಅಧಿಕಪ್ರಸಂಗತನವನ್ನು ಪ್ರದರ್ಶಿಸಿದ್ದಾರೆ. ಧ್ವಜವನ್ನು ತೆರವುಗೊಳಿಸಲು ಮುಂದಾದ ಪೊಲೀಸರ ಮೇಲೆ ದೌರ್ಜನ್ಯವನ್ನು ಸಹ ನಡೆಸಿದ್ದರೂ ಅಲ್ಲಿನ ಜಿಲ್ಲಾಡಳಿತ ದುಷ್ಕರ್ಮಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.
ಸಂಘಟನೆ ನಿಷೇಧಿಸಿ: ಕನ್ನಡ ರಾಜ್ಯೋತ್ಸವ ಆಚರಣೆಯ ನವೆಂಬರ್ ತಿಂಗಳಿನಲ್ಲಿ ಅದರಲ್ಲೂ ಬೆಳಗಾವಿಯಲ್ಲಿ ರಾಜ್ಯ ಸರ್ಕಾರದ ಚಳಿಗಾಲದ ಅಧಿವೇಶನ ನಡೆಯುವ ಸಂದರ್ಭದಲ್ಲಿ ನಾಡಿನ ಅತಿಕ್ರಮಣ ಮಾಡಿರುವ ಎಂ.ಇ.ಎಸ್. ಕಾರ್ಯಕರ್ತರನ್ನು ಕೂಡಲೇ ಬಂಧಿಸಬೇಕು ಹಾಗೂ ಆ ಸಂಘಟನೆಯನ್ನು ರಾಜ್ಯದಲ್ಲಿ ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಆಗ್ರಹಿಸಿದರು.
ಎಂ.ಇ.ಎಸ್. ಕಾರ್ಯಕರ್ತರ ವಿರುದ್ಧ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲು ಮುಂದಾಗದಿದ್ದಲ್ಲಿ ರಕ್ಷಣಾ ವೇದಿಕೆ ದುಷ್ಕರ್ಮಿಗಳನ್ನು ಮಟ್ಟಹಾಕಲು ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆ ನಂತರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿ ಬಿ.ಎಸ್. ಶೇಖರಪ್ಪ ಅವರಿಗೆ ಮನವಿ ಸಲ್ಲಿಸಿದರು. ವೇದಿಕೆಯ ಜಿಲ್ಲಾ ಉಪಾಧ್ಯಕ್ಷ ಕೆಂಪನಹಳ್ಳಿ ಅಶೋಕ್, ಕಾರ್ಯದರ್ಶಿ ಪಂಚಾಕ್ಷರಿ, ನಗರಾಧ್ಯಕ್ಷ ಇರ್ಷಾದ್ ಅಹ್ಮದ್, ಉಪಾಧ್ಯಕ್ಷ ಆರ್. ಕುಮಾರ್, ಎಂ.ಬಿ. ಅಶೋಕ್ಕುಮಾರ್, ವಿದ್ಯಾರ್ಥಿ ಘಟಕದ ಅಧ್ಯಕ್ಷ ಎಸ್.ಆರ್. ಮನೋಜ್ ಪ್ರತಿಭಟನೆಯನ್ನು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

