ಚಿಕ್ಕಮಗಳೂರು

ಚುನಾವಣಾ ಗಿಮಿಕ್ ಬಿಟ್ಟು ರೈತರ ಸಮಸ್ಯೆಗೆ ಸ್ಪಂದಿಸಿ

Published On :

ಕ.ಪ್ರ.ವಾರ್ತೆ, ಶೃಂಗೇರಿ, ನ. 21
ಹಲವು ವರ್ಷಗಳಿಂದ ಕಾಡುತ್ತಿರುವ ಹಳದಿ ಎಲೆ ರೋಗದಿಂದ ಅಡಕೆ ತೋಟಗಳು ಸಂಪೂರ್ಣ ನಾಶವಾಗಿದ್ದು, ಜತೆಗೆ ಅತಿವೃಷ್ಟಿ, ಕೊಳೆರೋಗ, ವಿಪರೀತ ಸಾಲದಿಂದಲೂ ಸಂಕಷ್ಟಕ್ಕೊಳಗಾಗಿದ್ದಾರೆ. ಆದರೆ ಇದಕ್ಕೆ ಕೇಂದ್ರ, ರಾಜ್ಯ ಸರ್ಕಾರಗಳು ಸ್ಪಂದಿಸುತ್ತಿಲ್ಲ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಚ್.ಟಿ. ರಾಜೇಂದ್ರ ಕೇಂದ್ರ, ರಾಜ್ಯ ಸರ್ಕಾರಗಳನ್ನು ತರಾಟೆಗೆ ತೆಗೆದುಕೊಂಡರು.
ಅವರು ಗುರುವಾರ ಪಕ್ಷದ ವತಿಯಿಂದ ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ತಾಲೂಕು ಕಚೇರಿ ಎದುರು ಆಯೋಜಿಸಲಾಗಿದ್ದ ಬೃಹತ್ ಪ್ರತಿಭಟನ ಸಮಾವೇಶದಲ್ಲಿ ಮಾತನಾಡಿದರು.
ಅನುಷ್ಠಾನದ ಭರವಸೆ: ಚಿಕ್ಕಮಗಳೂರು ಲೋಕಸಭಾ ಉಪಚುನಾವಣೆ ವೇಳೆ ರೈತರು ಶೃಂಗೇರಿಯಲ್ಲಿ ಪ್ರತಿಭಟನೆ ನಡೆಸುತ್ತಿರುವಾಗ ಕೇಂದ್ರ ಸಚಿವ ವೀರಪ್ಪ ಮೊಯ್ಲಿ, ಆಸ್ಕರ್ ಫರ್ನಾಂಡಿಸ್ ಸೇರಿದಂತೆ ಹಲವು  ಕಾಂಗ್ರೆಸ್ ನಾಯಕರ ಹಳದಿ ಎಲೆ ರೋಗ ಪರಿಹಾರ ಪ್ಯಾಕೇಜ್, ಸಾಲಮನ್ನಾ ಮುಂತಾದ ಭರವಸೆ ನೀಡಿದ್ದರು ಎಂದರು.
ಆದರೆ ಇದುವರೆಗೆ ಯಾವುದೇ ಕ್ರಮ ತೆಗೆದುಕೊಳ್ಳದೇ, ಸುಳ್ಳು ಭರವಸೆ ನೀಡಿ ರೈತರ ದಿಕ್ಕು ತಪ್ಪಿಸುವ ಪ್ರಯತ್ನ ಮಾಡಿಹೋದರು. ರೈತರು ಇವರ ಓಟ್ ಬ್ಯಾಂಕ್ ರಾಜಕಾರಣಕ್ಕೆ ಮರುಳಾಗುವುದಿಲ್ಲ. ಇಂತಹ ಚುನಾವಣಾ ಗಿಮಿಕ್ ಬೇಡ. ಕೇಂದ್ರ ರಾಜ್ಯ ಸರ್ಕಾರಗಳು ರೈತರ ಸಮಸ್ಯೆಗೆ  ಸ್ಪಂದಿಸಿ ಬೇಡಿಕೆಗಳನ್ನು ಈಡೆರಿಸದಿದ್ದಾರೆ ಡಿಸೆಂಬರ್‌ನಲ್ಲಿ ಪ್ರತಿಭಟನ ಸಮಾವೇಶ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ಉತ್ತೇಜನ; ಜನವಿರೋಧಿ ಕಸ್ತೂರಿ ರಂಗನ್ ವರದಿ ಪಶ್ಚಿಮ ಘಟ್ಟದಲ್ಲಿ ವಾಸಿಸುತ್ತಿರುವ ನಿವಾಸಿಗಳ ಬದುಕು ಕಸಿದುಕೊಳ್ಳುವ ಇಂತಹ ಮಾರಕ ಯೋಜನೆಗೆ ಉತ್ತೇಜನ ನೀಡಿದೆ. ತಲತಲಾಂತರಗಳಿಂದ ಇಲ್ಲಿ ವಾಸಿಸುತ್ತಿರುವ ಜನರು ಹೋಗುವುದಾದರೂ ಎಲ್ಲಿಗೆ. ಈ ವರದಿಯಂತೆ ಈಗ ಮನೆ ಕಟ್ಟಲು,ಕುಡಿಯುವ ನೀರಿಗೂ ಅನುಮತಿ ಪಡೆಯಬೇಕಿದೆ ಎಂದರು.
ಬೆಳಗ್ಗೆ ಪಟ್ಟಣದ ಬಸ್ಸುನಿಲ್ದಾಣದಿಂದ ಸರ್ಕಾರದ ವಿರುದ್ಧ ಘೋಷಣೆಗಳೊಂದಿಗೆ ಪ್ರತಿಭಟನಾ ಮರೆವಣಿಗೆ ಹೊರಟು ಪಟ್ಟಣದ ಪ್ರಮುಖ ಬೀದಿಯಲ್ಲಿ ಸಾಗಿ ನಂತರ ತಾಲೂಕು ಕಚೇರಿ ಎದುರು ಸಮಾವೇಶಗೊಂಡಿತು.
ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ನಂತರ ತಾಲೂಕು ಕಚೇರಿ ಸಭಾಂಗಣದಲ್ಲಿ ತಹಸೀಲ್ದಾರ್, ಅರಣ್ಯ ಇಲಾಖೆ ಅಧಿಕಾರಿಗಳು, ಬ್ಯಾಂಕ್ ವ್ಯವಸ್ಥಾಪಕರೊಡನೆ ಸಮಾಲೋಚನಾ ಸಭೆ ನಡೆಯಿತು.
ಜೆಡಿಎಸ್ ಸ್ಥಳೀಯ ಮುಖಂಡ ಮಂಜುನಾಥ್, ರಮೇಶ್, ವಿವೇಕಾನಂದ ಮೊದಲಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.