ರೈತನ ಸಾವಿಗೆ ಸರ್ಕಾರವೇ ಹೊಣೆ
ಚಿಕ್ಕಮಗಳೂರು: ಕಬ್ಬು ಬೆಳೆಗಾರರ ಸಮಸ್ಯೆಯನ್ನು ಬಗೆಹರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದ್ದರಿಂದ ರೈತರೋರ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಆರೋಪಿಸಿ ಬಿಜೆಪಿ ಹಾಗೂ ಕರ್ನಾಟಕ ರಾಜ್ಯ ರೈತ ಸಂಘದವರು ಗುರುವಾರ ನಗರದಲ್ಲಿ ಪ್ರತ್ಯೇಕವಾಗಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.
ಇಲ್ಲಿನ ಹಳೇ ತಾಲೂಕು ಕಚೇರಿಯಿಂದ ಮೆರವಣಿಗೆಯಲ್ಲಿ ಹೊರಟ ಬಿಜೆಪಿ ಕಾರ್ಯಕರ್ತರು ಹನುಮಂತಪ್ಪ ವೃತ್ತದಲ್ಲಿ ರಾಜ್ಯ ಸರ್ಕಾರದ ರೈತ ವಿರೋಧಿ ಧೋರಣೆಯನ್ನು ಖಂಡಿಸಿ ಘೋಷಣೆ ಹಾಕಿದರು. ಇದೇ ವೇಳೆಗೆ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.
ರಾಜ್ಯ ಸರ್ಕಾರ ವಿಫಲ: ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ರೇಖಾ ಹುಲಿಯಪ್ಪಗೌಡ ಮಾತನಾಡಿ, ರೈತ ಅನ್ನದಾತ, ಆತನ ಶ್ರಮದಿಂದ ನಾವೆಲ್ಲರೂ ಬದುಕುತ್ತಿದ್ದೇವೆ.
ರೈತರು ಸಂಕಷ್ಟದಲ್ಲಿದ್ದಾಗ ಶ್ರಮಿಸಬೇಕಾಗಿರುವುದು ಸರ್ಕಾರದ ಕರ್ತವ್ಯ. ಆದರೆ, ರಾಜ್ಯ ಸರ್ಕಾರ ರೈತರು ಬೆಳೆದ ಬೆಲೆಗಳಿಗೆ ಸೂಕ್ತವಾದ ಬೆಂಬಲ ನೀಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.
ನಿರ್ಲಕ್ಷ ಧೋರಣೆ: ಕಬ್ಬಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಪೈಕಿ ಓರ್ವರು ಸರ್ಕಾರದ ನಿರ್ಲಕ್ಷ ಧೋರಣೆಯನ್ನು ಖಂಡಿಸಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸರ್ಕಾರ ಮುಂದಿನ ದಿನಗಳಲ್ಲಾದರೂ ರೈತರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಲಿ ಎಂದುಹೇಳಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರಾದ ಎಂ.ಕೆ. ಪ್ರಾಣೇಶ್, ಪ್ರೇಮ್ಕುಮಾರ್, ವರಸಿದ್ದಿ ವೇಣುಗೋಪಾಲ್, ದೇವರಾಜ್ ಶೆಟ್ಟಿ ಹಾಗೂ ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಮಧ್ಯಾಹ್ನದ ವೇಳೆಗೆ ತಮ್ಮ ಕಾರ್ಯಲಯದಿಂದ ಆಜಾದ್ ಪಾರ್ಕ್ ವೃತ್ತದವರೆಗೆ ಮೆರವಣಿಗೆ ನಡೆಸಿ ರಾಜ್ಯ ಸರ್ಕಾರದ ರೈತ ವಿರೋಧಿಯನ್ನು ಖಂಡಿಸಿ ಪ್ರತಿಭಟನೆ ನಡೆಸಿದರು.
ಇದೇ ವೇಳೆಯಲ್ಲಿ ಮಾತನಾಡಿದ ರೈತ ಸಂಘದ ಗೌರವಾಧ್ಯಕ್ಷ ಕೆ.ಕೆ. ಕೃಷ್ಣೇಗೌಡ, ಮಣ್ಣಿನ ಮಕ್ಕಳಿಗೆ ಈ ನೆಲದಲ್ಲಿ ಬೆಲೆ ಇಲ್ಲದಂತಾಗಿದೆ. ಕಷ್ಟದಲ್ಲಿದ್ದಾಗ ಸ್ಪಂಧಿಸಬೇಕಾದ ಸರ್ಕಾರ ನಿರ್ಲಕ್ಷ್ಯ ವಹಿಸಿದ್ದರಿಂದ ರೈತರು ಅನಿವಾರ್ಯವಾಗಿ ಆತ್ಮಹತ್ಯೆಯ ಹಾದಿ ಹಿಡಿಯುತ್ತಿದ್ದಾರೆ.
ರೈತರ ನೆರವಿಗೆ ಸರ್ಕಾರ ಬರಬೇಕು. ಬೆಳೆಗಳಿಗೆ ಬೆಂಬಲ ಬೆಲೆ ನೀಡಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಶಾಂತಪ್ಪ, ಹಸಿರು ಸೇನೆಯ ಜಿಲ್ಲಾಧ್ಯಕ್ಷ ಶಶಿಧರ್, ಚಂದ್ರೇಗೌಡ, ರಮೇಶ್, ಮಂಜುನಾಥ್ ಹಾಗೂ ರೈತರು ಸೇರರಿದಂತೆ ಪ್ರತಿಭಟನೆಯಲ್ಲಿ ಹಲವರು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

