ಸಂಭಾಜಿ ಗಡೀಪಾರಿಗೆ ಒತ್ತಾಯ
ಚಿಕ್ಕಮಗಳೂರು: ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸುವಂತೆ ಒತ್ತಾಯಿಸುವುದರ ಜೊತೆಗೆ ಕನ್ನಡಿಗರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಎಂಇಎಸ್ ಶಾಸಕ ಸಾಂಬಾಜಿ ಪಾಟೀಲ್ ಅವರನ್ನು ರಾಜ್ಯದಿಂದ ಗಡೀಪಾರು ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಮಹಿಳಾ ಘಟಕದ ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
ವೇದಿಕೆಯ ಜಿಲ್ಲಾಧ್ಯಕ್ಷ ತೇಗೂರು ಜಗದೀಶ್ ಮತ್ತು ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ರೇಣುಕಾ ಪರಮೇಶ್ ಅವರ ನೇತೃತ್ವದಲ್ಲಿ ಹಳೇ ತಾಲೂಕು ಕಚೇರಿ ಆವರಣದಿಂದ ಮೆರವಣಿಗೆ ನಡೆಸಿದ ಕಾರ್ಯಕರ್ತರು ಹನುಮಂತಪ್ಪ ವೃತ್ತದ ಬಳಿ ಶಾಸಕ ಸಾಂಬಾಜಿ ಪಾಟೀಲ್ ಅವರ ಪ್ರತಿಕೃತಿಗೆ ಸೀರೆಯನ್ನು ಉಡಿಸುವುದರ ಜೊತೆಗೆ ಅದನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಅವಹೇಳನಕಾರಿ ಹೇಳಿಕೆ: ಈ ಸಂದರ್ಭದಲ್ಲಿ ಮಾತನಾಡಿದ ರೇಣುಕಾ ಪರಮೇಶ್, ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸುವಂತೆ ಒತ್ತಾಯಿಸುವುದರ ಜೊತೆಗೆ ಕನ್ನಡಿಗರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುವ ಮೂಲಕ ಶಾಸಕ ಸಾಂಬಾಜಿ ಪಾಟೀಲ್ ಉದ್ದಟತನ ಪ್ರದರ್ಶಿಸುವುದರ ಜೊತೆಗೆ ನಾಡದ್ರೋಹವೆಸಗಿದ್ದಾರೆ ಎಂದು ಆರೋಪಿಸಿದರು.
ಸಾಂಬಾಜಿ ಪಾಟೀಲ್ ಅವರ ವಿಧಾನಸಭೆ ಸದಸ್ಯತ್ವ ಸ್ಥಾನವನ್ನು ರಾಜ್ಯ ಸರ್ಕಾರ ರದ್ದುಗೊಳಿಸುವುದರ ಜೊತೆಗೆ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ಅವರನ್ನು ನಾಡಿನಿಂದ ಗಡಿಪಾರು ಮಾಡಬೇಕು. ಎಂಇಎಸ್ ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧಿಸಬೇಕು ಎಂದು ಆಗ್ರಹಿಸಿದರು.
ಬೆಳಗಾವಿಯಲ್ಲಿ ಬುಧವಾರ ಆತ್ಮಹತ್ಯೆ ಮಾಡಿಕೊಂಡಿರುವ ರೈತನ ಕುಟುಂಬಕ್ಕೆ ಸರ್ಕಾರಿ ಉದ್ಯೋಗ ನೀಡಬೇಕು ಮತ್ತು ರೈತರ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆ ನಂತರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಅಪರ ಜಿಲ್ಲಾಧಿಕಾರಿ ಕೆ.ಪಿ. ಹೊನಕೇರಿ ಅವರಿಗೆ ಮನವಿ ಸಲ್ಲಿಸಿದರು. ವೇದಿಕೆಯ ಜಿಲ್ಲಾ ಉಪಾಧ್ಯಕ್ಷ ಕೆಂಪನಹಳ್ಳಿ ಅಶೋಕ್, ಮಹಿಳಾ ಘಟಕದ ಜಿಲ್ಲಾ ಕಾರ್ಯದರ್ಶಿ ನಂದಿನಿ ಸೋಮಶೇಖರ್, ಎನ್.ಆರ್. ಪುರ ತಾಲೂಕು ಅಧ್ಯಕ್ಷೆ ಪ್ರಿಯಾ ಶ್ರೀನಿವಾಸ್, ಕಡೂರು ತಾಲೂಕು ಅಧ್ಯಕ್ಷೆ ಬಿ.ಎಸ್. ಶೈಲಶ್ರೀ, ತರೀಕೆರೆ ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಎಸ್.ಜಿ. ಲಕ್ಷ್ಮೀದೇವಮ್ಮ, ಆಲ್ದೂರು ಅಧ್ಯಕ್ಷೆ ಸರೋಜಮ್ಮ ಮಂಜುನಾಥ್, ಭಾನು ಶಿವರಾಜ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಸಂಭಾಜಿ ಪ್ರತಿಕೃತಿ ದಹನ
ತರೀಕೆರೆ: ಎಂಇಎಸ್ ಶಾಸಕ ಸಂಭಾಜಿ ಅವರು ರಾಜ್ಯದ ಬಗ್ಗೆ ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣಗೌಡ ಅವರ ಬಗ್ಗೆ ವ್ಯಂಗ್ಯವಾಗಿ ಮಾತನಾಡಿ ಅವಮಾನ ಮಾಡಿರುವುದನ್ನು ವಿರೋಧಿಸಿ ಕರವೇ ತರೀಕೆರೆ ಘಟಕದ ವತಿಯಿಂದ ಪಟ್ಟಣದ ಎ.ಜಿ. ವೃತ್ತದ ಬಳಿ ಪ್ರತಿಭಟನೆ ನಡೆಸಲಾಯಿತು.
ಕರವೇ ಘಟಕದ ಅಧ್ಯಕ್ಷ ಕಿರಣ್ಗೌಡ, ಗೌರವಾಧ್ಯಕ್ಷ ಟಿ.ಎಂ. ಭೋಜರಾಜ್, ಉಪಾಧ್ಯಕ್ಷ ರಾಘವೇಂದ್ರ, ಕಾರ್ಯದರ್ಶಿ ಚೇತನ್, ದರ್ಶನ್, ದಿಲೀಪ್, ಪ್ರದೀಪ್ ಮತ್ತು ವೇದಿಕೆ ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಬಳಿಕ ಶಾಸಕ ಸಂಭಾಜಿ ಪ್ರತಿಕೃತಿ ದಹನ ಮಾಡಲಾಯಿತು. ಹಲವು ಮಂದಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

