ಮನೆ- ಮನೆಗೆ ತಲುಪಿದ ಚುನಾವಣಾ ಪ್ರಚಾರ
ಕ.ಪ್ರ.ವಾರ್ತೆ, ಚಿಕ್ಕಮಗಳೂರು, ಏ.1
ಕಾಫಿಯ ತವರೂರು ಚಿಕ್ಕಮಗಳೂರಿನಲ್ಲಿ ಲೋಕಸಭಾ ಚುನಾವಣಾ ಪ್ರಚಾರ ನಿಧಾನವಾಗಿ ಕಾವೇರುತ್ತಿದ್ದು, ಚುನಾವಣಾ ಕಣದಲ್ಲಿ 11 ಮಂದಿ ಉಳಿದುಕೊಂಡಿದ್ದಾರೆ. ನಿರೀಕ್ಷೆಯಂತೆ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪ್ರಚಾರದಲ್ಲಿ ಹೆಚ್ಚು ಮಂದಿ ಕಾರ್ಯಕರ್ತರು, ಮುಖಂಡರು ಕಾಣಿಸಿಕೊಳ್ಳುತ್ತಿದ್ದಾರೆ.
ಪ್ರಥಮ ಹಂತದಲ್ಲಿ ಬ್ಲಾಕ್ವಾರು, ಘಟಕವಾರು ಪದಾಧಿಕಾರಿಗಳ ಹಾಗೂ ಕಾರ್ಯಕರ್ತರ ಸಭೆ ನಡೆಸಿದ್ದ ಅಭ್ಯರ್ಥಿಗಳು, ಇದೀಗ ಮನೆ- ಮನೆಗಳಿಗೆ ತೆರಳಿ ಪ್ರಚಾರ ನಡೆಸುತ್ತಿದ್ದಾರೆ. ಒಂದೆಡೆ ಕಾರ್ಯಕರ್ತರೇ ಸ್ವ ಇಚ್ಛೆಯಿಂದ ಪ್ರಚಾರದಲ್ಲಿ ತೊಡಗಿದ್ದರೆ, ಇನ್ನೊಂದೆಡೆ ಅಭ್ಯರ್ಥಿಗಳು ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ.
ಒಬ್ಬ ಅಭ್ಯರ್ಥಿ ಪ್ರಚಾರಕ್ಕಾಗಿ ಮಲೆನಾಡನ್ನು ಆಯ್ಕೆ ಮಾಡಿಕೊಂಡಿದ್ದರೆ, ಇನ್ನೊಬ್ಬ ಅಭ್ಯರ್ಥಿ ಬಯಲುಸೀಮೆ ಪ್ರದೇಶವನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ.
ವಿವಿಧ ಪಕ್ಷಗಳ ಪ್ರಚಾರ: ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಿಂದ ಸ್ಪರ್ಧೆ ಮಾಡಿದ್ದ ಮೂವರು ಅಭ್ಯರ್ಥಿಗಳು ಚಿಕ್ಕಮಗಳೂರು ಜಿಲ್ಲೆಯ ಗ್ರಾಮಾಂತರ ಪ್ರದೇಶದಲ್ಲಿ ಮಂಗಳವಾರ ಪ್ರಚಾರ ನಡೆಸಿದರು.
ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರು, ಶೃಂಗೇರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಖಾಂಡ್ಯ, ಕಡಬಗೆರೆ, ಹುಯಿಗೆರೆ, ಮಾಗುಂಡಿ, ಬನ್ನೂರು, ಬಾಳೆಹೊನ್ನೂರು, ಕಾನೂನು, ಸೀತೂರು ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಪ್ರಚಾರ ನಡೆಸಿದರು. ನಗರಕ್ಕೆ ಮಂಗಳವಾರ ಆಗಮಿಸಿದ್ದ ಎಐಸಿಸಿ ಕಾರ್ಯದರ್ಶಿ ಶಾಂತರಾಮ್ ನಾಯಕ್ ಪಕ್ಷದ ನಾಯಕರೊಂದಿಗೆ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ತು ಸದಸ್ಯೆ ಗಾಯತ್ರಿ ಶಾಂತೇಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಡಿ.ಎಲ್. ವಿಜಯಕುಮಾರ್, ಉಪಾಧ್ಯಕ್ಷ ಶಾಂತೇಗೌಡ ಹಾಜರಿದ್ದರು.
ಮನೆ ಮನೆ ಪ್ರಚಾರ: ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು ತರೀಕೆರೆ ತಾಲೂಕಿನ ಅಜ್ಜಂಪುರ ಹೋಬಳಿಯಲ್ಲಿ ಮನೆಮನೆಗೆ ತೆರಳಿ ಪ್ರಚಾರ ನಡೆಸಿದರು. ಇತ್ತ ಶೃಂಗೇರಿಯ ಗೌರೀ ಶಂಕರ ಸಭಾಂಗಣದಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಭೆ ನಡೆಯಿತು. ಈ ಸಭೆಯಲ್ಲಿ ಭಾಗವಹಿಸಿದ್ದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತಕುಮಾರ್ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿದರು. ಶೃಂಗೇರಿ ಕ್ಷೇತ್ರದ ಶಾಸಕ ಡಿ.ಎನ್. ಜೀವರಾಜ್ ಮಾತನಾಡಿ, ಅಡಕೆ ಬೆಳೆಗಾರರ ಸಮಸ್ಯೆ ಕುರಿತು ಪ್ರಸ್ತಾಪಿಸಿದರು.
ಮೂಡಿಗೆರೆ ತಾಲೂಕಿನ ಕಳಸ ಹೋಬಳಿಯಲ್ಲಿ ಜೆಡಿಎಸ್ ಅಭ್ಯರ್ಥಿ ವಿ. ಧನಂಜಯಕುಮಾರ್ ಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಮೂಡಿಗೆರೆ ಶಾಸಕ ಬಿ.ಬಿ. ನಿಂಗಯ್ಯ, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್.ಎಚ್. ದೇವರಾಜ್ ಪಾಲ್ಗೊಂಡಿದ್ದರು. ಸೋಮವಾರದಂದು ಮಾಕೋನಹಳ್ಳಿ, ಬಣಕಲ್ ಹೋಬಳಿಯ ಗುತ್ತಿ, ಬೆಟ್ಟಗೆರೆಯಲ್ಲಿ ಜೆಡಿಎಸ್ ಪ್ರಚಾರ ನಡೆಸಿತ್ತು.
ಆಪ್, ಸಿಪಿಐ: ಆಪ್ ಪಕ್ಷದ ಅಭ್ಯರ್ಥಿ ಎಸ್.ಎಚ್. ಗುರುದೇವ್ ಮನೆ ಮನೆಗಳಿಗೆ ತೆರಳಿ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ. ಬಾಳೆಹೊನ್ನೂರಿನಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದರು.
ಅಭ್ಯರ್ಥಿಗಳು ಮನೆ ಮನೆಗಳಿಗೆ ತೆರಳಿ ಪ್ರಚಾರ ನಡೆಸುತ್ತಿದ್ದಾರೆ. ಸಿಪಿಐ ಅಭ್ಯರ್ಥಿ ವಿಜಯಕುಮಾರ್ ಅವರು ಪ್ರಚಾರಕ್ಕಾಗಿ ಆಯ್ಕೆ ಮಾಡಿಕೊಂಡ ಸ್ಥಳ ನಗರದ ಆಜಾದ್ ಪಾರ್ಕ್ ವೃತ್ತ. ನಗರ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಕೂಲಿ ಕಾರ್ಮಿಕರು ಬೆಳಗ್ಗೆ ಈ ವೃತ್ತಕ್ಕೆ ಆಗಮಿಸಿ, ಅಲ್ಲಿಂದ ಕೂಲಿ ಕೆಲಸದ ಸ್ಥಳಕ್ಕೆ ತೆರಳಲಿದ್ದಾರೆ. ಅದುದರಿಂದ ಸಿಪಿಐ ಅಭ್ಯರ್ಥಿ ಮಂಗಳವಾರ ಬೆಳ್ಳಂಬೆಳಗ್ಗೆ ಈ ವೃತ್ತಕ್ಕೆ ಆಗಮಿಸಿ ಕೂಲಿ ಕಾರ್ಮಿಕರಲ್ಲಿ ಮತಯಾಚಿಸಿದರು.
ಎ.ಮಂಜು ಪ್ರಚಾರ: ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ಅಬ್ಬರದ ಸ್ವರೂಪ ಪಡೆದುಕೊಳ್ಳುತ್ತಿದ್ದು, ಹಾಸನ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಕಡೂರು ವಿಧಾನಸಭಾ ಕ್ಷೇತ್ರದಲ್ಲೂ ಸಹ ಪ್ರಚಾರ ಭರದಿಂದ ನಡೆಯುತ್ತಿದೆ. ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎ. ಮಂಜು ಪರ ಪ್ರಚಾರ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಕಡೂರಿಗೆ ಆಗಮಿಸಲಿದ್ದಾರೆ. ಅಲ್ಲಿನ ಬಯಲು ರಂಗಮಂದಿರದಲ್ಲಿ ಮಧ್ಯಾಹ್ನ 1.15ಕ್ಕೆ ಅವರು ಪ್ರಚಾರ ಭಾಷಣ ಮಾಡಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

