ತರೀಕೆರೆ: ಸಮೀಪದ ಅಜ್ಜಂಪುರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ಸಲುವಾಗಿ ಪೂರ್ವ ಸಿದ್ದತಾ ಸಭೆ ನಡೆಯಿತು.
ಗ್ರಾಪಂ ಅಧ್ಯಕ್ಷ ಆರ್.ಕೃಷ್ಣಪ್ಪ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಸ್ವಾತಂತ್ರ್ಯಹೋರಾಟಗಾರ, ಶಾಲಾ ಕಾಲೇಜು ಮುಖ್ಯಸ್ಥರು, ತಾಪಂ ಸದಸ್ಯ ರಾಜ್‌ಕುಮಾರ್, ಶಕುಂತಲಮ್ಮ ನಾಗರಾಜ್ ಮತ್ತಿತರರು ಭಾಗವಹಿಸಿದ್ದರು.
ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಅಧಿಕಾರಿಗಳನ್ನು ಸನ್ಮಾನಿಸಲು ಮತ್ತು ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದವರನ್ನು ಅಭಿನಂದಿಸಲು ತೀರ್ಮಾನಿಸಲಾಯಿತು. ಗ್ರಾಪಂ ಉಪಾಧ್ಯಕ್ಷೆ ಇಂದಿರಾ ಮತ್ತು ಸದಸ್ಯರು ಉಪಸ್ಥಿತರಿದ್ದರು. ಸದಸ್ಯ ಎಸ್.ಶಿವಾನಂದ್ ಸ್ವಾಗತಿಸಿದರು.
ವಿದ್ಯುತ್ ಪರಿವರ್ತಕ ಕೆಟ್ಟು ನೀರಿಗೆ ಪರದಾಟ
ತರೀಕೆರೆ: ಸಮೀಪದ ಕೆಂಚಾಪುರ ಗ್ರಾಮದಲ್ಲಿ ವಿದ್ಯುತ್ ಪರಿವರ್ತಕ ಕೆಟ್ಟು ಕುಡಿಯುವ ನೀರಿಗಾಗಿ ಪರದಾಡಬೇಕಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ. ಗ್ರಾಮ ಪ್ರವೇಶದ್ವಾರದಲ್ಲಿರುವ ವಿದ್ಯುತ್ ಪರಿವರ್ತಕ ಕಳೆದ ಎರಡು ತಿಂಗಳ ಹಿಂದೆ ಕೆಟ್ಟು ಹೋಗಿ ಕುಡಿಯುವ ನೀರಿನ ತೀವ್ರ ತೊಂದರೆ ಅನುಭವಿಸಬೇಕಾಯಿತು. ನಂತರ ಜನತೆಯ ಒತ್ತಾಯದ ಮೇರೆಗೆ ಕಳೆದ ತಿಂಗಳು ನೂತನವಾಗಿ ಅಳವಡಿಸಿದ್ದ ಪರಿವರ್ತಕ ಎರಡೇ ದಿನದಲ್ಲಿ ಕೆಟ್ಟು ಹೋಗಿದ್ದು ಗ್ರಾಮದ ಜನತೆ ಕುಡಿಯುವ ನೀರಿಗಾಗಿ ಪರದಾಡಬೇಕಾಗಿದೆ. ಕೆಂಚಾಪುರ ಗೇಟ್ ಬಳಿ ಇರುವ ವಿದ್ಯುತ್ ಪರಿವರ್ತಕ ಸಂಪರ್ಕದಿಂದ ಕುಡಿಯುವ ನೀರಿನ ಸಂಪರ್ಕ ಪಡೆಯಬೇಕಾಗಿರುವುದರಿಂದ, ಅದು ಸರಿಯಾಗಿ ಪೂರೈಕೆಯಾಗದಿರುವುದರಿಂದ ಕುಡಿಯುವ ನೀರಿಗೆ ಬಹಳ ತೊಂದರೆಯಾಗಿದೆ. ಈ ಬಗ್ಗೆ ಮೆಸ್ಕಾಂ ಗಮನ ಹರಿಸಿ ಗುಣಮಟ್ಟದ ವಿದ್ಯುತ್ ಪರಿವರ್ತಕ ಅಳವಡಿಸಿ, ಕುಡಿಯುವ ನೀರಿನ ತೊಂದರೆ ತಪ್ಪಿಸುವಂತೆ ಗ್ರಾಮಸ್ತರು ಒತ್ತಾಯಿಸಿದ್ದಾರೆ.
ಕಾನೂನು ಅರಿವು ನೆರವು ಕಾರ್ಯಕ್ರಮ ಇಂದು
ಚಿಕ್ಕಮಗಳೂರು: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ವಕೀಲರ ಸಂಘ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಯುಕ್ತಾಶ್ರಯದಲ್ಲಿ ಕಟ್ಟಡ ಕಾರ್ಮಿಕರಿಗೆ ಗುರುತಿನ ಚೀಟಿ ವಿತರಣೆ ಹಾಗೂ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಬುಧವಾರ ಬೆಳಗ್ಗೆ 10 ಗಂಟೆಗೆ ಜಿಲ್ಲಾ ನ್ಯಾಯಾಲಯದ ಪೂರಕ ಕಟ್ಟಡದ ಮೇಲ್ಭಾಗದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಎಚ್.ಎಸ್. ಕಮಲ ಕಾರ್ಯಕ್ರಮ ಉದ್ಘಾಟಿಸಿ, ಗುರುತಿನ ಚೀಟಿ ವಿತರಿಸಲಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಇಂದು
ಚಿಕ್ಕಮಗಳೂರು: ಉಸ್ತುವಾರಿ ಸಚಿವ ಕೆ. ಅಭಯಚಂದ್ರ ಜೈನ್ ಬುಧವಾರ ಚಿಕ್ಕಮಗಳೂರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಗ್ಗೆ 10 ಗಂಟೆಗೆ ನಗರದ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರ ಭೇಟಿ ಮಾಡಲಿದ್ದಾರೆ. 11 ಗಂಟೆಗೆ ಜಿಲ್ಲಾ ಪಂಚಾಯಿತಿಯಲ್ಲಿ ನಡೆಯುವ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಭಾಗವಹಿಸಲಿದ್ದಾರೆ ಹಾಗೂ ಚಿಕ್ಕಮಗಳೂರಿನಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಆ. 7 ರಂದು ಬೆಳಿಗ್ಗೆ 10 ಗಂಟೆಗೆ ಸಾರ್ವಜನಿಕರ ಕುಂದುಕೊರತೆ ಅರ್ಜಿ ಸ್ವೀಕರಿಸಿ, ಮಧ್ಯಾಹ್ನ 12 ಗಂಟೆಗೆ ಮೂಡಬಿದರೆ ಪ್ರಯಾಣ ಬೆಳೆಸಲಿದ್ದಾರೆ.
Advertisement