ಚಿಕ್ಕಮಗಳೂರು

ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಅಪರಾಧ

Published On :

ಕ.ಪ್ರ. ವಾರ್ತೆ, ಚಿಕ್ಕಮಗಳೂರು, ಫೆ.4
ಸಾರ್ವಜನಿಕ ಸ್ಥಳಗಳಾದ ಬಸ್ ನಿಲ್ದಾಣ, ರೈಲು ನಿಲ್ದಾಣ, ಆಸ್ಪತ್ರೆಗಳು, ಶಿಕ್ಷಣ ಕೇಂದ್ರಗಳು, ಸಾರ್ವಜನಿಕ ಕಚೇರಿಗಳು ಹಾಗೂ ಜನನಿಬಿಡ ಮತ್ತು ನಿಷೇಧಿತ ಪ್ರದೇಶಗಳಲ್ಲಿ ಧೂಮಪಾನ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶೆ ಹೆಚ್.ಎಸ್. ಕಮಲ ಹೇಳಿದ್ದಾರೆ.
ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ರಾಜ್ಯ ಮತ್ತು ಜಿಲ್ಲಾ ತಂಬಾಕು ನಿಷೇಧ ಘಟಕ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಮಂಗಳವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದಲ್ಲಿ ಕೋಟ್ಪಾ- 2003 ಕಾಯ್ದೆಯಡಿ ಕರ್ನಾಟಕದಲ್ಲಿ ತಂಬಾಕು ನಿಯಂತ್ರಣ ಕಾನೂನುಗಳ ಅನುಷ್ಠಾನ ಸಾಮರ್ಥ್ಯಾಭಿವೃದ್ಧಿ ಮತ್ತು ಮೇಲ್ವಿಚಾರಣೆ ಕಾರ್ಯಾಗಾರವನು ಉದ್ಘಾಟಿಸಿ ಅವರು ಮಾತನಾಡಿದರು.
ಎಲ್ಲರಿಗೂ ಹಾನಿ: ಕೋಟ್ಪಾ ಕಾಯ್ದೆ ಅನ್ವಯ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು ನಿಷೇಧವಿದ್ದು, ಸಾರ್ವಜನಿಕರು ಈ ಬಗ್ಗೆ ಎಚ್ಚರದಿಂದಿರಬೇಕು. ಧೂಮಪಾನ ಚಟವು, ಸೇವಿಸುವವರ ಆರೋಗ್ಯ ಹಾಳು ಮಾಡುವುದರ ಜೊತೆಗೆ ಅಕ್ಕ ಪಕ್ಕದವರ ಆರೋಗ್ಯಕ್ಕೆ ಹಾನಿಕರ ಉಂಟು ಮಾಡುತ್ತದೆ ಎಂದರು.
ಪರಿಣಾಮಕಾರಿ ಅನುಷ್ಠಾನ ಮುಖ್ಯ: ಯಾವುದೇ ಕಾನೂನು ಅನುಷ್ಠಾನಕ್ಕೆ ಬರಲು ಹಲವಾರು ಕಾರಣಗಳು ಇರುವುದು ಸಾಮಾನ್ಯ. ಸರ್ವೋಚ್ಛ ನ್ಯಾಯಾಲಯದ ಸೂಚನೆ ಮೇರೆಗೆ ತಂಬಾಕು ಸೇವನೆ ಅನಾರೋಗ್ಯಕ್ಕೆ ಕಾರಣವಾಗುತ್ತಿರುವ ಹಿನೆಲೆಯಲ್ಲಿ ಈ ಕಾಯ್ದೆ ಅಸ್ಥಿತ್ವಕ್ಕೆ ಬಂದಿದ್ದು, ಇದರ ಅನುಷ್ಠಾನ ಪರಿಣಾಮಕಾರಿಯಾಗಬೇಕಿದೆ ಎಂದು ಹೇಳಿದರು.
ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆ ದುಶ್ಚಟಕ್ಕೆ ಬಲಿಯಾಗುತ್ತಿದ್ದು, ಇದರ ನಿಯಂತ್ರಣಕ್ಕೆ ಅವರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳು ಕೈಗೊಳ್ಳಬೇಕೆಂದ ಅವರು, 18 ವರ್ಷದೊಳಗಿನವರಿಗೆ ತಂಬಾಕು ಉತ್ಪನಗಳ ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದರು.
ಅಪರ ಜಿಲ್ಲಾಧಿಕಾರಿ ಕೆ.ಪಿ. ಹೊನಕೇರಿ ಮಾತನಾಡಿ, ಜೀವನದಲ್ಲಿ ದುಶ್ಚಟಗಳು ಸಾಮಾನ್ಯ. ಅದರಲ್ಲಿ ಮನುಷ್ಯನ ಸ್ವಭಾವ ದುಶ್ಚಟಕ್ಕೆ ಬೇಗ ಬಲಿಯಾಗುತ್ತಾರೆಂದ ಅವರು, ಧೂಮಪಾನದ ಧೂಮದಲ್ಲಿ ಏಳು ಸಾವಿರಕ್ಕೂ ಹೆಚ್ಚು ರಾಸಾಯನಿಕಗಳಿದ್ದು, ಅವುಗಳಲ್ಲಿ 69 ರಾಸಾಯನಿಕಗಳಿಂದ ಕ್ಯಾನ್ಸರ್ ಬರುತ್ತದೆ ಎಂದು ಹೇಳಿದರು.
ಆರೋಗ್ಯಕ್ಕೆ ಹಾನಿಕರ: ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಬಿ. ಕರುಣಾಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರ್ವ ರೋಗಕ್ಕೂ ತಂಬಾಕು ಮೂಲಕಾರಣವಾಗಿದ್ದು, ಶೇ.60ಕ್ಕಿಂತಲೂ ಹೆಚ್ಚು ಜನ ತಂಬಾಕು ಸೇವನೆಯಿಂದ ಸಾವನಪ್ಪುತ್ತಿದ್ದಾರೆ. ಜನ ಸಾಮಾನ್ಯರಲ್ಲಿ ಅತಿಯಾದ ತಂಬಾಕು ಸೇವನೆ ಮಾಡುವುದು ಆರೋಗ್ಯಕ್ಕೆ ಹಾನಿಕರ ಎಂದರು.
ಜಾಗತಿಕ, ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ ತಂಬಾಕಿನ ಚಿತ್ರಣ ಮತ್ತು ತಂಬಾಕು ಸಂಬಂಧಿಸಿದ ಕಾಯಿಲೆಗಳಿಂದಾಗುವ ದುಶ್ಪರಿಣಾಮದ ಬಗ್ಗೆ ಡಾ. ಶಿವದತ್ ಮತ್ತು ಸಿಗರೇಟ್ ಹಾಗೂ ಇತರೆ ತಂಬಾಕು ಉತ್ಪನಗಳ ಅಧಿನಿಯಮದ ಬಗ್ಗೆ ವಕೀಲ ಡಿ.ಬಿ. ಸುಜೇಂದ್ರ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶ ಮಂಜುನಾಥ ನಾಯಕ, ಜಿಲ್ಲಾ ಸರ್ಜನ್ ಡಾ. ಆರ್. ದೊಡ್ಡಮಲ್ಲಪ್ಪ, ಚಂದ್ರಕಿರಣ್ ಹಾಗೂ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಕಲಾ ಪ್ರಾರ್ಥಿಸಿದರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಬಿ.ವಿ. ನೀರಜ್ ಸ್ವಾಗತಿಸಿದರು, ಆರೋಗ್ಯ ಶಿಕ್ಷಣಾಧಿಕಾರಿ ಜಯಣ್ಣ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.