23ರಂದು ಚಿತ್ರದುರ್ಗದಲ್ಲಿ ಸಮಾವೇಶ
ಕ.ಪ್ರ.ವಾರ್ತೆ, ಚಿಕ್ಕಮಗಳೂರು, ಫೆ. 5
ರಾಜ್ಯ ವಸತಿ ಶಾಲೆಗಳ ಮತ್ತು ವಸತಿ ನಿಲಯಗಳಲ್ಲಿ ಸೇವೆ ಸಲ್ಲಿಸುತ್ತಿರುವ ಬೋಧಕೇತರ ಸಿಬ್ಬಂದಿಗಳ ರಾಜ್ಯಮಟ್ಟದ ಪ್ರತಿನಿಧಿ ಸಮಾವೇಶ ಫೆ. 23ರಂದು ಚಿತ್ರದುರ್ಗದಲ್ಲಿ ನಡೆಯಲಿದೆ.
ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೊಳಪಡುವ ಮೊರಾರ್ಜಿ ದೇಸಾಯಿ, ಏಕಲವ್ಯ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳು ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳಲ್ಲಿ ಕಳೆದ ಹಲವು ವರ್ಷಗಳಿಂದ ಸಾವಿರಾರು ಸಂಖ್ಯೆಯಲ್ಲಿ ಜವಾನರು, ಅಡುಗೆ ಕೆಲಸದವರು, ಸಹಾಯಕರು, ಕಚೇರಿ ಸಿಬ್ಬಂದಿ, ವಾಹನ ಚಾಲಕರು ಹೀಗೆ ವಿವಿಧ ಹುದ್ದೆಗಳಿಗೆ ಹೊರ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡು ಕೆಲಸ ನಿರ್ವಹಿಸುತ್ತಿದ್ದಾರೆ.
ಇವರಿಗೆ ಶ್ರಮಕ್ಕೆ ತಕ್ಕಂತೆ ಸಂಭಾವನೆಯಾಗಲಿ, ಮೂಲ ಸವಲತ್ತುಗಳು ಕೊಡದೇ ಶೋಷಣೆ ಮಾಡಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ವಸತಿ ಶಾಲೆಗಳ ಮತ್ತು ವಸತಿ ನಿಲಯಗಳ ಮತ್ತು ಬೋಧಕೇತರ ಸಿಬ್ಬಂದಿಗಳ ಒಕ್ಕೂಟದ ಅಧ್ಯಕ್ಷೆ ಎಸ್.ಎಲ್. ರಾಧಾ ಸುಂದರೇಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಚಿಂತಾಜನಕ: ಸರ್ಕಾರ ವಸತಿ ನಿಲಯಗಳ ಬೋಧಕೇತರ ಸಿಬ್ಬಂದಿಗೆ ಮಾಸಿಕ ವೇತನ 6 ಸಾವಿರ ನಿಗದಿಪಡಿಸಿದ್ದರೂ ಗುತ್ತಿಗೆದಾರರು ಮಾತ್ರ ನೌಕರರಿಗೆ ಮಾಹೆಯಾನ 3500 ನೀಡಿ ವಂಚಿಸುತ್ತಿದ್ದಾರೆ. ಅಲ್ಲದೆ, ವೇತನ ಪಾವತಿಗೆ ತಿಂಗಳಾನುಗಟ್ಟಲೆ ಸತಾಯಿಸುವ ಪರಿಪಾಠ ಬೆಳೆಸಿಕೊಂಡು ಬರುತ್ತಿದ್ದಾರೆ. ಇದರಿಂದ ಬೋಧಕೇತರ ಸಿಬ್ಬಂದಿ ಬದುಕು ಚಿಂತಾಜನಕವಾಗಿದೆ ಎಂದು ಹೇಳಿದ್ದಾರೆ.
ಈ ವಿಷಯವನ್ನು ರಾಜ್ಯ ಸರ್ಕಾರ ಹಾಗೂ ಸಮಾಜ ಕಲ್ಯಾಣ ಸಚಿವರ ಗಮನ ಸೆಳೆಯಲಾಗಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಹೊರಗುತ್ತಿಗೆ ಪದ್ಧತಿ ಕೈಬಿಟ್ಟು ಎಲ್ಲಾ ಬೋಧಕೇತರ ಸಿಬ್ಬಂದಿಗಳನ್ನು ಕೂಡಲೇ ಕಾಯಂಗೊಳಿಸಬೇಕು. ಕನಿಷ್ಠ ವೇತನ ತಿಂಗಳಿಗೆ 15 ಸಾವಿರ ನಿಗದಿಪಡಿಸಬೇಕು ಸೇರಿದಂತೆ ಮೊದಲಾದ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹೋರಾಟ ರೂಪಿಸುವ ಉದ್ದೇಶದಿಂದ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

