'ಕೈ- ಬಿಜೆಪಿ ಒಳ ಒಪ್ಪಂದ'
ಚಿಕ್ಕಮಗಳೂರು: ಜಿಲ್ಲೆಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಕಾಂಗ್ರೆಸ್ ಹಾಗೂ ಬಿಜೆಪಿ ಮುಖಂಡರು 50/50 ಅನುಪಾತದಲ್ಲಿ ಹಂಚಿಕೆ ಮಾಡಿಕೊಂಡು ಗುತ್ತಿಗೆ ಕೆಲಸ ಮಾಡುತ್ತಿದ್ದಾರೆ. ಈ ಕುರಿತು ಸಮಗ್ರ ತನಿಖೆ ನಡೆಸಬೇಕೆಂದು ಜೆಡಿಎಸ್ ಮುಖಂಡ ಎಚ್.ಎಚ್. ದೇವರಾಜ್ ಆರೋಪಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಕಾಂಗ್ರೆಸ್ ಕಾಮಗಾರಿಗಳ ಬಗ್ಗೆ ತನಿಖೆ ನಡೆಸುವಂತೆ ಆಗ್ರಹಿಸುತ್ತಿತ್ತು. ಆದರೆ, ಇದೀಗ ಈ ಬಗ್ಗೆ ಪ್ರಸ್ತಾಪ ಮಾಡುತ್ತಿಲ್ಲ. ಬಿಜೆಪಿಗೆ ಕಾಂಗ್ರೆಸ್ ಪಕ್ಷ ಶರಣಾಗಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿವೆ ಎಂದು ಸುದ್ದಿಗೋಷ್ಠಿಯಲ್ಲಿ ಬುಧವಾರ ಹೇಳಿದರು.
ಅಧಿಕಾರಿಗಳಿಗೆ ಕಿರುಕುಳ: ಜಿಲ್ಲಾ ಕೇಂದ್ರದಲ್ಲಿ ಕಾಂಗ್ರೆಸ್ ಒಂದು ಜಾತಿಯ ಪರವಾಗಿ ಕೆಲಸ ಮಾಡುತ್ತಿದೆ. ಕಂದಾಯ ನಿರೀಕ್ಷರೋರ್ವರು ಸರ್ಕಾರಿ ನೌಕರರಿಗೆ ಮತ್ತು ಅಧಿಕಾರಿಗಳಿಗೆ ಕಿರುಕುಳ ನೀಡುತ್ತಿದ್ದಾರೆ, ಬೆದರಿಕೆ ಹಾಕುತ್ತಿದ್ದಾರೆ. ವಿಧಾನಪರಿಷತ್ ಸದಸ್ಯರ ಹೆಸರನ್ನು ದುರುಪಯೋಗ ಮಾಡುತ್ತಿದ್ದಾರೆ. ಇದಕ್ಕೆ ಅವರೇ ಕಡಿವಾಣ ಹಾಕಬೇಕು ಎಂದರು.
ಈಗಾಗಲೇ ಬೇಸಿಗೆ ಕಾಲ ಪ್ರಾರಂಭವಾಗಿದೆ. ಜಿಲ್ಲೆಯಾದ್ಯಂತ ಕುಡಿಯುವ ನೀರಿನ ತೀವ್ರ ಅಭಾವ ತಲೆದೋರಿದೆ. ಈ ಸಂಬಂಧ ಜಿಲ್ಲಾಡಳಿತ ಈವರೆಗೆ ಯಾವುದೇ ರೀತಿಯಲ್ಲಿ ಮುಂಜಾಗ್ರತಾ ಕ್ರಮವನ್ನು ತೆಗೆದುಕೊಂಡಿಲ್ಲ. ಜಿಲ್ಲಾಡಳಿತ ಕೂಡಲೇ ಜಾಗ್ರತೆ ವಹಿಸಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿದರು.
ಚಿಕ್ಕಮಗಳೂರು ನಗರದಲ್ಲಿ ಮನಸೋಇಚ್ಛೆ ವಿದ್ಯುತ್ ನಿಲುಗಡೆಯಾಗುತ್ತಿದೆ. ಶಾಲಾ, ಕಾಲೇಜುಗಳ ಪರೀಕ್ಷೆಗಳು ಸಮೀಪಿಸುತ್ತಿದ್ದು, ವಿದ್ಯಾರ್ಥಿಗಳಿಗೆ ಓದಿಗೆ ತುಂಬಾ ತೊಂದರೆಯಾಗುತ್ತಿದೆ. ಈ ಬಗ್ಗೆ ಜನಪ್ರತಿನಿಧಿಗಳು ಚಕಾರ ಎತ್ತುತ್ತಿಲ್ಲ. ಕೂಡಲೇ ವಿದ್ಯುತ್ ನಿಲುಗಡೆಯನ್ನು ತಡೆಗಟ್ಟಬೇಕು ಎಂದು ಒತ್ತಾಯಿಸಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಕೈಗೆತ್ತಿಗೊಂಡಿಲ್ಲ, ಜನಪ್ರತಿನಿಧಿಗಳು ಪತ್ರಿಕಾ ಹೇಳಿಕೆ ನೀಡುವುದರಲ್ಲೇ ಕಾಲ ಹರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಮಲೆನಾಡಿನಲ್ಲಿ ಬದುಕಿಗಾಗಿ ಅರಣ್ಯ ಮತ್ತು ಕಂದಾಯ ಭೂಮಿಯನ್ನು ಒತ್ತುವರಿ ಮಾಡಿಕೊಂಡವರನ್ನು ಭೂಗಳ್ಳರಂತೆ ಪ್ರತಿಬಿಂಬಿಸಲಾಗುತ್ತಿದೆ. ಒತ್ತುವರಿದಾರರು ದೇಶ ದ್ರೋಹಿಗಳೆಂದು ವೈಭವೀಕರಿಸಲಾಗುತ್ತಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಮುಖಂಡರಾದ ಕೆ. ಭರತ್, ಚಂದ್ರಪ್ಪ, ಜಮೀಲ್ ಅಹಮದ್, ಹೊಲದಗದ್ದೆ ಗಿರೀಶ್ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

