ಚಿಕ್ಕಮಗಳೂರು

ಗುತ್ತಿಗೆ, ಹೊರಗುತ್ತಿಗೆ ನೌಕರರ ಕಾಯಂಗೆ ಆಗ್ರಹ

Published On :

ಕ.ಪ್ರ.ವಾರ್ತೆ ಟಿ ಚಿಕ್ಕಮಗಳೂರು ಟಿ ಫೆ.13
ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ಹಲವು ವರ್ಷದಿಂದ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರಾಗಿ ಸೇವೆ ಸಲ್ಲಿಸುತ್ತಿರುವ ಕಾರ್ಮಿಕರನ್ನು ಕಾಯಂಗೊಳಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಯಿತು.
ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ ಸ್ಥಳೀಯ ಸಂಸ್ಥೆಗಳ ಗುತ್ತಿಗೆ ಕಾರ್ಮಿಕರು ಪ್ರತಿಭಟನೆ ನಡೆಸಿ ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಗುತ್ತಿಗೆ ಪೌರ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ ಮಾತನಾಡಿ, ಪೌರ ಕಾರ್ಮಿಕರು ನಗರ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಸ್ವಚ್ಛತೆ, ಲೋಡರ್, ಯುಜಿಡಿ, ವಾಟರ್‌ಮನ್, ಡ್ರೈವರ್, ಕಚೇರಿ ಸಹಾಯಕರು ಹಾಗೂ ಕಂಪ್ಯೂಟರ್ ಆಪರೇಟರ್ಸ್‌ಗಳಾಗಿ ದುಡಿಯುತ್ತಿರುವ ಒಟ್ಟು ನೌಕರರಲ್ಲಿ ಅರ್ಧಕ್ಕಿಂತ ಹೆಚ್ಚಿನವರು ಗುತ್ತಿಗೆ ಹಾಗೂ ಹೊರಗುತ್ತಿಗೆ ಕಾರ್ಮಿಕರು. ಈ ಕಾರ್ಮಿಕರಿಗೆ ಕನಿಷ್ಠ ವೇತನ, ಉದ್ಯೋಗ ಭದ್ರತೆ, ಕಾರ್ಮಿಕ ಕಾನೂನುಗಳು, ಸಾಮಾಜಿಕ ಭದ್ರತೆಗಳಿಲ್ಲದೆ ಅತೀವ ಸಂಕಷ್ಟದ ಜೀವನ ನಡೆಸುತ್ತಿದ್ದಾರೆ ಎಂದು ಹೇಳಿದರು.
ಪೌರ ಕಾರ್ಮಿಕರ ಸಮಸ್ಯೆಗಳ ಇತ್ಯರ್ಥಕ್ಕೆ ಒತ್ತಾಯಿಸಿ ಕಳೆದ ವರ್ಷ ವಿಧಾನಸೌಧ ಬಳಿ ಚಳವಳಿ ನಡೆಸಿ ಸರ್ಕಾರದ ಗಮನ ಸೆಳೆಯಲಾಗಿತ್ತು. ರಾಜ್ಯದ ಮುಖ್ಯಮಂತ್ರಿಗಳು ಮೊದಲ ಬಜೆಟ್ ಅಧಿವೇಶನದಲ್ಲಿಯೇ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಗುತ್ತಿಗೆ ಕಾರ್ಮಿಕರ ಪದ್ಧತಿಯನ್ನು ಹಂತ- ಹಂತವಾಗಿ ಮುಕ್ತಾಯಗೊಳಿಸುವುದಾಗಿ ಘೋಷಿಸಿದ್ದರು. ಆದರೆ, ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ನೌಕರರ ಸೇವೆಗಳನ್ನು ಕಾಯಂಗೊಳಿಸುವಂತೆ ಸಂಘದಿಂದ ಮನವಿ ಮಾಡಲಾಗಿತ್ತು ಎಂದರು.
ತಾರತಮ್ಯ ನೀತಿ: ಜಿಲ್ಲೆಯಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಪ್ರತಿ ತಾಲೂಕಿನಲ್ಲಿ ಒಂದೊಂದು ರೀತಿ ವೇತನ ನೀಡುವ ಮೂಲಕ ತಾರತಮ್ಯ ನೀತಿ ಮಾಡುತ್ತಿರುವುದು ಕಾರ್ಮಿಕರ ಅಸಮಾಧಾನಕ್ಕೆ ಕಾರಣವಾಗಿದ್ದು, ಈ ಬಗ್ಗೆ ಜಿಲ್ಲಾಧಿಕಾರಿಗಳು ಗಮನಹರಿಸಿ ನ್ಯಾಯ ಒದಗಿಸುವಂತೆ ಒತ್ತಾಯಿಸಿದರು.
ತಾಲೂಕು ಉಪಾಧ್ಯಕ್ಷ ಕೃಷ್ಣ ಮಾತನಾಡಿ, ರಾಜ್ಯದ ಮುಖ್ಯಮಂತ್ರಿಗಳು ಕಳೆದ ಬಜೆಟ್‌ನಲ್ಲಿ ಘೋಷಿಸಿರುವಂತೆ ಗುತ್ತಿಗೆ ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಬೇಕು. ಅಲ್ಲಿಯವರೆಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕೆಂದು ಆಗ್ರಹಿಸಿದರು.
ಜಿಲ್ಲಾಧ್ಯಕ್ಷ ರಾಮಪ್ಪ, ಖಜಾಂಚಿ ಚಲುವರಾಜು, ಚಂದ್ರಶೇಖರ್, ರಮೇಶ್, ಕೃಷ್ಣಕುಮಾರ್, ರಾಜೇಶ್, ಲೋಹಿತ್, ಮಮತ ಸೇರಿದಂತೆ ಎಲ್ಲಾ ತಾಲೂಕಿನ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.