ಕಾರ್ಗತ್ತಲು ಭೀತಿಯಲ್ಲಿ ಜಿಲ್ಲೆ
ಚಿಕ್ಕಮಗಳೂರು: ವಿದ್ಯುತ್ ಉತ್ಪಾದನಾ ಕೇಂದ್ರಗಳಲ್ಲಿ ತಾಂತ್ರಿಕ ದೋಷ ಕಂಡು ಬಂದು ವಿದ್ಯುತ್ ಉತ್ಪಾದನೆಯ ಪ್ರಮಾಣ ಕಡಿಮೆಯಾದರೆ ತಕ್ಷಣಕ್ಕೆ ಕೆಪಿಟಿಸಿಎಲ್ ಕಣ್ಣಿಗೆ ಬೀಳುವುದು ಚಿಕ್ಕಮಗಳೂರು ಜಿಲ್ಲೆ. ಹೀಗೇಕೆ ಎಂಬ ಪ್ರಶ್ನೆ ಎದುರಾಗಬಹುದು. ನೆರೆಯ ಜಿಲ್ಲೆಗಳಿಗೆ ಹೋಲಿಕೆ ಮಾಡಿದರೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಅತಿ ಹೆಚ್ಚು ಲೋಡ್ ಶೆಡ್ಡಿಂಗ್ ಮಾಡಲಾಗುತ್ತಿದೆ.
ಕಾರಣ, ಇಲ್ಲಿ ಲೋಡ್ ಶೆಡ್ಡಿಂಗ್ ಮಾಡದೆ ಹೋದರೆ ಮಂಗಳೂರಿನಲ್ಲಿರುವ ಸ್ಕಾಡ ತನ್ನ ಕೇಂದ್ರ ಸ್ಥಾನದಲ್ಲಿಯೇ ಪವರ್ ಕಟ್ ಮಾಡಲಿದೆ. ಅಂದರೆ ನಮ್ಮ ಜಿಲ್ಲೆಯ ಪವರ್ ಸ್ವಿಚ್ ಸ್ಕಾಡದ ಕೈಯಲ್ಲಿದೆ. ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾದರೆ ತಕ್ಷಣಕ್ಕೆ ಲೋಡ್ ಶೆಡ್ಡಿಂಗ್ ಮಾಡದೆ ಹೋದರೆ ಇಡೀ ವ್ಯವಸ್ಥೆಯಲ್ಲಿ ಏರುಪೇರು ಉಂಟಾಗಿ ಫೀಡರ್‌ಗಳು ಸುಟ್ಟು ಹೋಗುವ ಸಾಧ್ಯತೆ ಇದೆ.
ಬೇಡಿಕೆ- ಪೂರೈಕೆ: ಚಿಕ್ಕಮಗಳೂರು, ಮೂಡಿಗೆರೆ, ಕೊಪ್ಪ, ಎನ್.ಆರ್. ಪುರ ಹಾಗೂ ಶೃಂಗೇರಿ ತಾಲೂಕುಗಳಿಗೆ ಪ್ರತಿ ಗಂಟೆಗೆ 56 ಮೆಗಾ ವ್ಯಾಟ್ ವಿದ್ಯುತ್ ಬೇಕು. ಆದರೆ, ಬುಧವಾರದಿಂದ ಈ ತಾಲೂಕುಗಳಿಗೆ ಪ್ರತಿ ಗಂಟೆಗೆ 27 ಮೆಗಾ ವ್ಯಾಟ್ ವಿದ್ಯುತ್ ಸರಬರಾಜು ಆಗುತ್ತಿದೆ. ಇನ್ನು ತರೀಕೆರೆ ಹಾಗೂ ಕಡೂರು ತಾಲೂಕುಗಳಿಗೆ ಗಂಟೆಗೆ 70 ಮೆಗಾವ್ಯಾಟ್ ವಿದ್ಯುತ್ ಬೇಕು. ಸದ್ಯ 40 ಮೆಗಾ ವ್ಯಾಟ್ ವಿದ್ಯುತ್ ಸರಬರಾಜು ಆಗುತ್ತಿದೆ. ಅಂದರೆ, ಬೇಡಿಕೆಗಿಂತ ಪೂರೈಕೆಯ ಪ್ರಮಾಣ ಕಡಿಮೆ ಇದೆ. ಅದುದರಿಂದ ಲೋಡ್ ಶೆಡ್ಡಿಂಗ್ ಮಾಡಲಾಗುತ್ತಿದೆ. ನಾಗಜ್ಜರಿ ವಿದ್ಯುತ್ ಉತ್ಪಾದನಾ ಘಟಕದಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದರಿಂದ ಚಿಕ್ಕಮಗಳೂರು ಜಿಲ್ಲೆಗೆ ಸರಬರಾಜು ಆಗುತ್ತಿರುವ ವಿದ್ಯುತ್‌ನಲ್ಲಿ ವ್ಯತ್ಯಯ ಉಂಟಾಗುತ್ತಿದೆ.
ರಾಜ್ಯ ಸರ್ಕಾರ ಪ್ರತಿದಿನ ವಿದ್ಯುತ್ ಸರಬರಾಜಿಗೆ ಸಮಯ ನಿಗದಿಪಡಿಸಿದೆ. ಅಂದರೆ 7 ಗಂಟೆ ತ್ರಿಫೇಸ್, 11 ಗಂಟೆ ಸಿಂಗಲ್ ಫೇಸ್, ಇನ್ನುಳಿದಂತೆ 6 ಗಂಟೆಗಳ ಕಾಲ ವಿದ್ಯುತ್ ನಿಲುಗಡೆಗೆ ಕ್ರಮ ವಹಿಸಿದೆ. ಆದರೆ, ಕಡಿಮೆ ಪ್ರಮಾಣದಲ್ಲಿ ವಿದ್ಯುತ್ ಉತ್ಪಾದನೆಯಾಗುತ್ತಿರುವುದರಿಂದ ನಿಗದಿತ ಸಮಯದಷ್ಟು ವಿದ್ಯುತ್ ಸರಬರಾಜು ಮಾಡಲು ಸಾಧ್ಯವಾಗುತ್ತಿಲ್ಲ.
ವಿದ್ಯಾರ್ಥಿಗಳಿಗೆ ತೊಂದರೆ: ಲೋಡ್ ಶೆಡ್ಡಿಂಗ್‌ನಿಂದಾಗಿ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತಿದೆ. ಜಿಲ್ಲೆಯಲ್ಲಿ ಗುರುವಾರದಿಂದ ಪ್ರಥಮ ಪಿಯುಸಿ ಪರೀಕ್ಷೆ ಆರಂಭಗೊಂಡಿವೆ. ಮಾರ್ಚ್ 23ರಿಂದ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಹಾಗೂ ಮಾರ್ಚ್ 28ರಿಂದ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಆರಂಭಗೊಳ್ಳಲಿವೆ.
ಸಂಜೆ 6 ಗಂಟೆಯ ನಂತರದಲ್ಲಿ ಲೋಡ್ ಶೆಡ್ಡಿಂಗ್ ಮಾಡುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಓದಿಕೊಳ್ಳಲು ತುಂಬಾ ತೊಂದರೆಯಾಗುತ್ತಿದೆ. ಸಂಜೆಯ ನಂತರ ಹೆಚ್ಚಿನ ಪ್ರಮಾಣದಲ್ಲಿ ವಿದ್ಯುತ್ ಬಳಕೆ ಮಾಡಿಕೊಳ್ಳುವುದರಿಂದ ಲೋಡ್ ಶೆಡ್ಡಿಂಗ್ ಅನಿವಾರ್ಯವಾಗುತ್ತಿದೆ. ಈ ಪರಿಸ್ಥಿತಿ ಸುಧಾರಣೆಯಾಗಬೇಕಾದರೆ ನಿಗದಿತ ಪ್ರಮಾಣದಲ್ಲಿ ಜಿಲ್ಲೆಗೆ ವಿದ್ಯುತ್ ಸರಬರಾಜು ಆಗಬೇಕು.
ಇದು, ರಾಜ್ಯ ಸರ್ಕಾರದಿಂದ ಆಗಬೇಕಾಗಿರುವ ಕೆಲಸ. ಜಿಲ್ಲೆಯ ಜನಪ್ರತಿನಿಧಿಗಳು ಸರ್ಕಾರದ ಮೇಲೆ ಒತ್ತಡ ಹೇರಿ ಹೆಚ್ಚಿನ ಪ್ರಮಾಣದಲ್ಲಿ ಜಿಲ್ಲೆಗೆ ವಿದ್ಯುತ್ ಸರಬರಾಜು ಆಗುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು.
-ಆರ್. ತಾರಾನಾಥ್
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

