ಚಿಕ್ಕಮಗಳೂರು

ವಿದ್ಯಾರ್ಥಿನಿ ಆತ್ಮಹತ್ಯೆ: ವಿದ್ಯಾರ್ಥಿಗಳ ಪ್ರತಿಭಟನೆ

Published On :

ಚಿಕ್ಕಮಗಳೂರು: ವಿದ್ಯಾರ್ಥಿನಿಯ ಆತ್ಮಹತ್ಯೆಗೆ ಕಾರಣವಾಗಿರುವ ಯುವಕನನ್ನು ಬಂಧಿಸುವಂತೆ ಆಗ್ರಹಿಸಿ ವಿದ್ಯಾರ್ಥಿನಿಯರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ಇಲ್ಲಿನ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯಿಂದ ಮೆರವಣಿಗೆಯಲ್ಲಿ ತೆರಳಿದ ನಗರದ ವಿವಿಧ ಕಾಲೇಜುಗಳ ವಿದ್ಯಾರ್ಥಿನಿಯರು ಜಿಲ್ಲಾ ರಕ್ಷಣಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಯುವಕನನ್ನು ಬಂಧಿಸುವಂತೆ ಆಗ್ರಹಿಸಿ ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಸಂಜೀವ್ ಎ. ಪಾಟೀಲ್ ಅವರಿಗೆ ಮನವಿ ಸಲ್ಲಿಸಿದರು.
ನಗರದ ಎಂಇಎಸ್ ಪದವಿ ಕಾಲೇಜಿನಲ್ಲಿ ಪ್ರಥಮ ಬಿಕಾಂನಲ್ಲಿ ವ್ಯಾಸಂಗ ಮಾಡುತ್ತಿದ್ದ ಚಿಕ್ಕಮಗಳೂರು ತಾಲೂಕಿನ ಕಬ್ಬಿಣ ಸೇತುವೆ ಗ್ರಾಮದ ವಿದ್ಯಾರ್ಥಿನಿ ತೃಪ್ತಿ ಅವರು ಭಾನುವಾರ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಸೋಮವಾರ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆದ ವೇಳೆಯಲ್ಲಿ ಕಾಲೇಜುಗಳ ವಿದ್ಯಾರ್ಥಿನಿಯರು ಸ್ಥಳಕ್ಕೆ ಆಗಮಿಸಿದರು.
ವಿದ್ಯಾರ್ಥಿನಿಯ ಆತ್ಮಹತ್ಯೆಗೆ ಕಾರಣನ್ನಾಗಿರುವ ಯುವಕನನ್ನು ಕೂಡಲೇ ಬಂಧಿಸುವಂತೆ ಆಸ್ಪತ್ರೆಯ ಆವರಣದಲ್ಲೇ ಪ್ರತಿಭಟನೆಗೆ ಇಳಿದರು. ಆಗ ಪೊಲೀಸರು ಮಧ್ಯಪ್ರವೇಶಿಸಿ ಈ ಸ್ಥಳದಲ್ಲಿ ಪ್ರತಿಭಟನೆ ಮಾಡದಂತೆ ತಿಳಿಸಿದ ಮೇರೆಗೆ ಜಿಲ್ಲಾ ರಕ್ಷಣಾಧಿಕಾರಿಗಳ ಕಚೇರಿಯವರೆಗೆ ಮೆರವಣಿಗೆ ನಡೆಸಿ ಬಳಿಕ ಮನವಿ ಸಲ್ಲಿಸಲಾಯಿತು.
ವಿದ್ಯಾರ್ಥಿಯ ಆತ್ಮಹತ್ಯೆಗೆ ಬಾರೀಕೆರೆಯ ಜೀವನ್ ಎಂಬ ಯುವಕ ಕಾರಣನ್ನಾಗಿದ್ದು, ಆತನನ್ನು ಬಂಧಿಸಬೇಕೆಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ಎಬಿವಿಪಿಯು ಜಿಲ್ಲಾ ರಕ್ಷಣಾಧಿಕಾರಿಗಳನ್ನು ಆಗ್ರಹಿಸಿತು.
ಹೆಣ್ಣುಮಕ್ಕಳನ್ನು ವಿದ್ಯಾಭ್ಯಾಸಕ್ಕೆ ಕಳುಹಿಸುವುದೇ ಕಷ್ಟಕರವಾಗಿದ್ದು, ಈ ರೀತಿಯ ಘಟನೆಗಳು ಪೋಷಕರ ಆತ್ಮಸ್ಥೈರ್ಯ ಕುಂದಿಸುತ್ತದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನನ್ನು ಕೂಡಲೇ ಬಂಧಿಸಬೇಕು. ಈ ಕುರಿತು ತನಿಖೆ ನಡೆಸಬೇಕೆಂದು ಆಗ್ರಹಿಸಿದರು.
ಪೊಲೀಸರಿಗೆ ದೂರು: ತಮ್ಮ ಮಗಳು ಆತ್ಮಹತ್ಯೆ ಮಾಡಿಕೊಳ್ಳಲು ಬಾರೀಕೆರೆಯ ಜೀವನ್ ಹಾಗೂ ತೊಂಡರವಳ್ಳಿಯ ಅಪೂರ್ವ ಕಾರಣ ಎಂದು ಮೃತ ವಿದ್ಯಾರ್ಥಿನಿ ತೃಪ್ತಿಯ ತಂದೆ ಗೋಪಾಲಗೌಡ ಅವರು ತಾಲೂಕಿನ ಆಲ್ದೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ವಿದ್ಯಾರ್ಥಿನಿ ತೃಪ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಎಂಇಎಸ್ ಕಾಲೇಜಿಗೆ ಸೋಮವಾರ ರಜೆ ನೀಡಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.