ಚಿಕ್ಕಮಗಳೂರು

ಜಾಗ ಹಸ್ತಾಂತರ; ಉಸ್ತುವಾರಿ ಸಚಿವರಿಗೆ ಶಾಸಕ ರವಿ ಆಗ್ರಹ

Published On :

ಚಿಕ್ಕಮಗಳೂರು:  ನಗರದಲ್ಲಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಸ್ಥಾಪನೆ ಮಾಡಲು ಜಾಗವನ್ನು ಹಸ್ತಾಂತರಿಸುವಂತೆ ಆಗ್ರಹಿಸಿ ಶಾಸಕ ಸಿ.ಟಿ.ರವಿ ಅವರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಅಭಯಚಂದ್ರ ಜೈನ್ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.
ನಗರಕ್ಕೆ ಕಳೆದ ಸರ್ಕಾರದ ಅವಧಿಯಲ್ಲಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಮಂಜೂರಾಗಿ ಈಗಾಗಲೇ ವಿಟಿಯುನಿಂದ ಕಾಲೇಜಿನ ಮೂಲಭೂತ ಸೌಕರ್ಯ ಅಭಿವೃದ್ಧಿಗೆ 20 ಕೋಟಿ ಅನುದಾನ ಬಿಡುಗಡೆಯಾಗಿದೆ. ಕಾಲೇಜಿಗೆ ಇಂದಾವರದ ಬಳಿ ಜಾಗ ಸಹ ಗುರುತಿಸಲಾಗಿದೆ. ಈ ಜಾಗ ಗ್ರಾಮ ಠಾಣಾದಲ್ಲಿದೆ. ಇದನ್ನು ಎಂಜಿನಿಯರಿಂಗ್ ಕಾಲೇಜಿಗೆ ಹಸ್ತಾಂತರಿಸುವ ಬಗ್ಗೆ ಸರ್ಕಾರದ ಕಂದಾಯ ಇಲಾಖೆಯಲ್ಲಿ ಕಡತವಿದ್ದು ತಾವು ಕೂಡಲೇ ಈ ಜಾಗವನ್ನು ಶೀಘ್ರವಾಗಿ ಸರ್ಕಾರದಿಂದ ಹಸ್ತಾಂತರಿಸಬೇಕೆಂದು ಆಗ್ರಹಿಸಿದರು.
ಚಿಕ್ಕಮಗಳೂರು ನಗರದ ಎಂ.ಜಿ.ರಸ್ತೆ ಮತ್ತು ಮಾರ್ಕೆಟ್ ರಸ್ತೆ ಅಭಿವೃದ್ಧಿಗೆ ಹಿಂದಿನ ಸರ್ಕಾರ 20 ಕೋಟಿ ವಿಶೇಷ ಅನುದಾನ ಮಂಜೂರು ಮಾಡಿದೆ. ಟೆಂಡರ್ ಪ್ರಕ್ರಿಯೆ ಮುಗಿದು ಹಲವು ದಿನಗಳಾದ ನಂತರ ಕಾರ್ಯಾದೇಶ ನೀಡಿದೆ. ತಾವು ಕೂಡಲೇ ಕಾಮಗಾರಿ ಪ್ರಾರಂಭಿಸಬೇಕು ಎಂದರು.
ಜಿಲ್ಲೆಗೆ ಲೋಕೋಪಯೋಗಿ ಇಲಾಖೆಯಿಂದ ಚಿಕ್ಕಮಗಳೂರು ನಗರದ ಕತ್ರಿಮಾರಮ್ಮ ದೇವಸ್ಥಾನದ ಬಳಿಯ ಬ್ರಿಡ್ಜ್, ಪಾಲಿಟೆಕ್ನಿಕ್ ಎದುರಿರುವ ಬ್ರಿಡ್ಜ್ ಸೇರಿದಂತೆ ಸಖರಾಯಪಟ್ಟಣ ಬಾಣಾವಾರ ರಸ್ತೆ ಒಳಗೊಂಡ 26 ಕೋಟಿ ಅನುದಾನ ಹಿಂದಿನ ಸರ್ಕಾರ ಬಿಡುಗಡೆ ಮಾಡಿದೆ. ಈಗ ಟೆಂಡರ್ ಪ್ರಕ್ರಿಯೆ ಮುಗಿಯುವ ಸಂದರ್ಭದಲ್ಲಿ ಈ ಯೋಜನೆಯನ್ನು ತಡೆಹಿಡಿದಿದೆ. ಸಾರ್ವಜನಿಕರ ಹಿತದೃಷ್ಠಿಯಿಂದ ಕೂಡಲೇ ಟೆಂಡರ್ ಪ್ರಕ್ರಿಯೆ ಮುಗಿಸಿ ಕಾಮಗಾರಿ ಪ್ರಾರಂಭ ಮಾಡಿಸಲು ಆಗ್ರಹಿಸಿದರು.
--
'ಅಡಕೆ ನಿಷೇಧ ಪ್ರಸ್ತಾಪ ಕೇಂದ್ರದ ಮುಂದಿಲ್ಲ'
ಚಿಕ್ಕಮಗಳೂರು: ಕೇಂದ್ರ ಸರ್ಕಾರದ ಮುಂದೆ ಅಡಕೆ ನಿಷೇಧ ಪ್ರಸ್ತಾಪವಿಲ್ಲ ಎಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ  ಹೇಳಿದ್ದಾರೆ.
ಅಡಿಕೆ ಬೆಳೆಗಾರರು ಯಾವುದೇ ಕಾರಣಕ್ಕೂ ಆತಂಕ ಪಡಬಾರದು. ಬೆಳೆಗಾರರ ಪರವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿವೆ ಎಂದು ಸುದ್ದಿಗೋಷ್ಠಿಯಲ್ಲಿ ಗುರುವಾರ ತಿಳಿಸಿದರು.
ಗುಟ್ಕಾ ನಿಷೇಧಕ್ಕೆ ಸಂಬಂಧಿಸಿದಂತೆ ಗುಟ್ಕಾಕ್ಕೆ ಬಳಸುವ ವಸ್ತುಗಳು, ಅವುಗಳ ಹಾನಿ ಬಗ್ಗೆ ವರದಿ ನೀಡುವಂತೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿತ್ತು. ಕೇಂದ್ರದ ತೋಟಗಾರಿಕೆ ಇಲಾಖೆ, ತೋಟಗಾರಿಕೆ ವಿವಿ, ವಿಜ್ಞಾನಿಗಳು ಪರಿಶೀಲನೆ ನಡೆಸಿ ಕೇಂದ್ರ ಸರ್ಕಾರಕ್ಕೆ ನೀಡಿರುವ ವರದಿಯಲ್ಲಿ ಅಡಕೆ ಆರೋಗ್ಯಕ್ಕೆ ಹಾನಿಕಾರ ಎಂದು ಹೇಳಿಲ್ಲ ಎಂದಿದ್ದಾರೆ.

ಕೂಲಿ ಹೆಚ್ಚಳಕ್ಕೆ ಆಗ್ರಹಿಸಿ 6 ರಿಂದ ಹಮಾಲರ ಮುಷ್ಕರ
ಮೂಡಿಗೆರೆ: ಗೋದಾಮುಗಳಿಂದ ನ್ಯಾಯಬೆಲೆ ಅಂಗಡಿಗಳವರಗೆ ಆಹಾರ ಸಾಮಗ್ರಿ ಸಾಗಣೆ ಮಾಡುವ ಹಮಾಲಿಗಳ ಕೂಲಿ ಹೆಚ್ಚಿಸುವಂತೆ ಆಗ್ರಹಿಸಿ 2014ರ ಜನವರಿ 6 ರಿಂದ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲು ಸಿದ್ದರಾಗುತ್ತಿದ್ದಾರೆ.
ಲೋಡಿಂಗ್ ಅನ್‌ಲೋಡಿಂಗ್ ಕಾರ್ಮಿಕರಿಗೆ ಸಿಗುತ್ತಿರುವ ಕೂಲಿ ತೀರಾ ಕಡಿಮೆಯಾಗಿದ್ದು, ಗ್ರಾಮೀಣ ಪ್ರದೇ ಶಗಳಲ್ಲಿ ನೀಡಲಾಗುತ್ತಿರುವ ಪ್ರತಿ ಕ್ವಿಂಟಲ್‌ಗೆ ರು. 6 ಕೂಲಿಯನ್ನು ಕನಿಷ್ಠ ರು. 18ಕ್ಕೆ ಏರಿಸುವುದರೊಂದಿಗೆ, ಪ್ರತಿ ಕಾರ್ಮಿಕರಿಗೂ ಸೇವಾ ಭದ್ರತೆ ನೀಡಬೇಕು ಎಂಬುದು ಪ್ರಮುಖ ಬೇಡಿಕೆ. ಇದರೊಂದಿಗೆ ಗುತ್ತಿಗೆ ಪದ್ಧತಿ ರದ್ದುಪಡಿಸಿ, ರಾಜ್ಯ ಸರ್ಕಾರದಿಂದಲೇ  ಹಮಾಲಿಗಳನ್ನು ನೇಮಿಸಬೇಕೆಂಬ ಬೇಡಿಕೆ ಮುಂದಿಟ್ಟು, ಜ.6ರಂದು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.
ಕರ್ನಾಟಕ ಶ್ರಮಿಕ ಶಕ್ತಿ ಸಂಘಟ, ರಾಜ್ಯ ಲೋಡಿಂಗ್ ಅನ್ ಲೋಡಿಂಗ್ ಕಾರ್ಮಿಕರ ಒಕ್ಕೂಟದ ತಾಲೂಕು ಅಧ್ಯಕ್ಷ ಆಭೀದ್ ಹುಸೇನ್, ಸರ್ಕಾರ ಈಗಾಗಲೇ ಪಡಿತರ ಮತ್ತು ಅಕ್ಕಿ ಗಿರಣಿ ಮಾಲೀಕರ ಸಮಸ್ಯೆ ಶೀಘ್ರದಲ್ಲಿ ನಿವಾರಿಸಿದೆ. ಆದರೇ ಕಾರ್ಮಿಕರ ಬೇಡಿಕೆ ಈಡೇರಿಸಲು ಮುಂದಾಗುತ್ತಿಲ್ಲ ಎಂದು ಆರೋಪಿಸಿದರು.
ಈ ಸಂದರ್ಭದಲ್ಲಿ ಸದಸ್ಯ ಕಲೀಂ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.