ಶಾಂತಿಭಂಗ ತಂದರೆ ಕಠಿಣ ಕ್ರಮ
ಕ.ಪ್ರ.ವಾರ್ತೆ,ಚಿಕ್ಕಮಗಳೂರು,ಜ.2
ಜಿಲ್ಲೆಯ ಶಾಂತಿಗೆ ಭಂಗ ತರುವ ಕಿಡಿಗೇಡಿಗಳನ್ನು ಮಟ್ಟ ಹಾಕಲಾಗುವುದು ಎಂದು ಜಿಲ್ಲಾ ರಕ್ಷಣಾಧಿಕಾರಿ ಆರ್. ಚೇತನ್ ಹೇಳಿದ್ದಾರೆ.
ಜಿಲ್ಲಾ ರಕ್ಷಣಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವು ದಿನಗಳ ಹಿಂದೆ ಚಿಕ್ಕಮಗಳೂರಿನಲ್ಲಿ ಕೋಮು ಗಲಭೆ ನಡೆದಿದೆ. ಈ ಹಿಂದೆಯೂ ಗಲಭೆ ನಡೆದಿವೆ ಎಂದು ಹೇಳಿದರು.
ಪೊಲೀಸ್ ಇಲಾಖೆ ಸದಾ ಜನರೊಂದಿಗೆ ಇರುತ್ತದೆ. ಜಿಲ್ಲೆಯಲ್ಲಿ ನಕ್ಸಲ್ ಪ್ರಾಬಲ್ಯ ಜಾಸ್ತಿ ಇದೆ. ಆದರೆ, ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ನಕ್ಸಲ್ ಪ್ರಾಬಲ್ಯ ಅಷ್ಟೇನೂ ಜಾಸ್ತಿ ಇಲ್ಲ. ನಕ್ಸಲಿಜಂ ಮಟ್ಟ ಹಾಕಲು ರಾಜ್ಯ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ಹಾಗೂ ದಲಿತರ ಮೇಲೆ ಯಾವುದೇ ರೀತಿಯಲ್ಲಿ ದೌರ್ಜನ್ಯ ನಡೆದರೆ ತಕ್ಷಣವೇ ಪೊಲೀಸ್ ಇಲಾಖೆ ಸ್ಪಂದಿಸಲು ಕಟಿಬದ್ಧವಾಗಿದೆ. ಹಿರಿಯ ನಾಗರಿಕರು ಹಾಗೂ ನೊಂದವರಿಗೆ ಸ್ಪಂದಿಸಲು ದಿನದ 24 ಗಂಟೆಗಳ ಕಾಲ ಪೊಲೀಸ್ ಇಲಾಖೆ ಸಿದ್ಧವಿದೆ ಎಂದರು.
ಚಿಕ್ಕಮಗಳೂರು ನಗರ ಸೇರಿದಂತೆ ರಾಷ್ಟ್ರೀಯ ಹೆದ್ದಾರಿ 206ನಲ್ಲಿ ರಸ್ತೆ ಅಪಘಾತಗಳು ನಡೆ
ಯುತ್ತಿದ್ದು, ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸಲಾಗುವುದು. ಇದಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಲೋಕೋಪಯೋಗಿ ಇಲಾಖೆ ಮತ್ತು ಜಿಲ್ಲಾಡಳಿತದಿಂದ ರಸ್ತೆ ಸುರಕ್ಷತೆ ಕುರಿತು ತಿಳಿವಳಿಕೆ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.
ಚಿಕ್ಕಮಗಳೂರು ಶಾಂತಿಯುತವಾದ ಜಿಲ್ಲೆ. ಆದರೆ, ಇಲ್ಲಿರುವ ಶೇ.10ರಷ್ಟು ಕಿಡಿಗೇಡಿಗಳಿಂದ ರೌಡಿಜಂ, ಕೋಮುಗಲಭೆ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಶಾಂತಿ ಕದಡದಂತೆ ದುಷ್ಟಶಕ್ತಿಯನ್ನು ಹದ್ದುಬಸ್ತಿನಲ್ಲಿಡಲಾಗುವುದು ಎಂದು ತಿಳಿಸಿದರು.
ಕಳೆದ 3 ವರ್ಷಗಳಲ್ಲಿ ಕಾಣೆಯಾದ ಯುವತಿಯರ ಹಾಗೂ ಮಹಿಳೆಯ ಬಗ್ಗೆ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ. ಈವರೆಗೆ ಕಾಣೆಯಾದವರ ವಿವರ, ಪತ್ತೆಯಾದ ಪ್ರಕರಣಗಳು ಹಾಗೂ ಪತ್ತೆಯಾಗದಿರುವ ಪ್ರಕರಣಗಳ ಬಗ್ಗೆ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ ಎಂದರು.
ಚಿಕ್ಕಮಗಳೂರಿನಲ್ಲಿ ಪಾರ್ಕಿಂಗ್ ವ್ಯವಸ್ಥೆ ಸುಧಾರಿಸಲು ನಗರಸಭೆ ಹಾಗೂ ಜಿಲ್ಲಾಡಳಿತದೊಂದಿಗೆ ಚರ್ಚೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ದರ್ಗಾ ಅಪವಿತ್ರಗೊಳಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ 3 ತಂಡಗಳನ್ನು ರಚನೆ ಮಾಡಲಾಗಿದ್ದು, ಸದ್ಯದಲ್ಲೇ ಆರೋಪಿಗಳನ್ನು ಪತ್ತೆ ಹಚ್ಚಲಾಗುವುದು ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

