ಹೂಳು ಅಕ್ರಮ ತನಿಖೆಯಾಗಲಿ
ಕನ್ನಡಪ್ರಭ ವಾರ್ತೆ,ಚಿಕ್ಕಮಗಳೂರು,ಜ.2
ಕೆರೆಗಳ ಪುನರುಜ್ಜೀವನ ಯೋಜನೆಯ ಕಾಮಗಾರಿಯಲ್ಲಿ ಅಕ್ರಮ ನಡೆದಿದ್ದು, ಈ ಕುರಿತು ತನಿಖೆ ನಡೆಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಗುರುವಾರ ಜಿಲ್ಲಾ ಉಸ್ತುವಾರಿ ಸಚಿವ ಕೆ. ಅಭಯಚಂದ್ರ ಜೈನ್ ಅವರಿಗೆ ಮನವಿ ಸಲ್ಲಿಸಿತು.
ಸಚಿವರು ಜಿಪಂ ಕೆಡಿಪಿ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ವೇಳೆಯಲ್ಲಿ ರೈತ ಸಂಘದ ಕಾರ್ಯಕರ್ತರು ಮನವಿ ಸಲ್ಲಿಸಿ ಆಗ್ರಹಿಸಿದರು.
2010-11ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಕೆರೆಗಳ ಪುನರುಜ್ಜೀವನ ಯೋಜನೆಯಡಿ 239 ಕೆರೆಗಳನ್ನು ಹೂಳೆತ್ತುವ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿತ್ತು. ನಿರೀಕ್ಷಿತ ಮಟ್ಟದಲ್ಲಿ ಗುಣಮಟ್ಟದ ಕಾಮಗಾರಿ ನಡೆದಿಲ್ಲ. ಹಾಗೂ ಪಾರದರ್ಶಕತೆಯನ್ನು ಅನುಸರಿಸಲಿಲ್ಲ. ಸರ್ಕಾರ ನಿಯಮವನ್ನು ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಉಲ್ಲಂಘನೆ ಮಾಡಿದ್ದಾರೆ. ಅದುದರಿಂದ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು. ಇದರ ಜತೆಗೆ ಸಂಬಂಧಪಟ್ಟ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು ಎಂದು ಒತ್ತಾಯಿಸಿದರು.
ತನಿಖೆ ನಡೆಯಲಿ: ಚಿಕ್ಕಮಗಳೂರು ತಾಲೂಕಿನ ಕರ್ತಿಕೆರೆ ದೊಡ್ಡಕೆರೆಯಲ್ಲಿ ಮತ್ತು ಆರದವಳ್ಳಿ ಕೆರೆಯಲ್ಲಿ ಜಾಲಿ ಮರಗಳನ್ನು ಕತ್ತರಿಸಲಾಗಿದೆ ಎಂದು ಹೇಳಿ ಬಿಲ್ ಪಡೆಯಲಾಗಿದೆ. ಆದರೆ, ಅಲ್ಲಿ ಯಾವುದೇ ಜಾಲಿಮರಗಳು ಇರುವುದಿಲ್ಲ. ಅಂದಾಜು ಪಟ್ಟಿಯಲ್ಲಿ ಈ ಕೆರೆಗಳ ಕಾಮಗಾರಿ ನಡೆದಿಲ್ಲ. ಈ ಅಕ್ರಮದಲ್ಲಿ ಜಿಲ್ಲಾಧಿಕಾರಿಗಳು, ಕಾರ್ಯಪಾಲಕ ಎಂಜಿನಿಯರ್ಗಳು, ಸಹಾಯಕ ಎಂಜಿನಿಯರ್, ತಹಸೀಲ್ದಾರ್ಗಳು ಭಾಗಿಯಾಗಿರುವುದು ಕಂಡುಬಂದಿದೆ. ಅದುದರಿಂದ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಬಾಕಿ ಉಳಿದಿರುವ ಕಾಮಗಾರಿಗಳನ್ನು ಕೂಡಲೇ ಮುಗಿಸಬೇಕು. ಕಳಪೆ ಕಾಮಗಾರಿಯನ್ನು ಸರಿಪಡಿಸಬೇಕು. ಕಾಮಗಾರಿಗೆ ನಿಗದಿಪಡಿಸಿದ ಹಣಕ್ಕಿಂತ ಹೆಚ್ಚಿನ ಹಣ ಪಡೆದಿರುವುದನ್ನು ಗುತ್ತಿಗೆದಾರರಿಂದ ವಸೂಲಿ ಮಾಡಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಕೆ.ಕೆ. ಕೃಷ್ಣೇಗೌಡ, ರಾಜ್ಯ ಕಾರ್ಯದರ್ಶಿ ಮಂಜುನಾಥ್ ಹಾಗೂ ಕಾರ್ಯಕರ್ತರು, ರೈತರು ಪಾಲ್ಗೊಂಡಿದ್ದರು.
ಕೆಡಿಪಿ ಸಭೆಯಲ್ಲಿ ಚರ್ಚೆ
ಕೆರೆಗಳ ಹೂಳೆತ್ತುವ ಕಾಮಗಾರಿಯಲ್ಲಿ ಆಕ್ರಮ ನಡೆದಿರುವ ಬಗ್ಗೆ ತನಿಖೆ ನಡೆಸುವಂತೆ ಜಿಲ್ಲಾ ಪಂಚಾಯ್ತಿಯ ಹೊರ ಭಾಗದಲ್ಲಿ ರೈತ ಸಂಘದವರು ಪ್ರತಿಭಟನೆ ನಡೆಸಿದರೆ, ಇತ್ತ ಜಿಪಂ ಸಭಾಂಗಣದಲ್ಲಿ ಈ ಬಗ್ಗೆ ತನಿಖೆ ನಡೆಸುವಂತೆ ಶಾಸಕರು ಸಭೆಯಲ್ಲಿ ಆಗ್ರಹಿಸಿದರು.
ವಿಧಾನಪರಿಷತ್ ಸದಸ್ಯೆ ಮೋಟಮ್ಮ ಮಾತನಾಡಿ, ಕೆರೆಗಳ ಹೂಳೆತ್ತುವ ಕಾಮಗಾರಿಯಲ್ಲಿ ಅಕ್ರಮ ನಡೆದಿದೆ. ಸಂಬಂಧಪಟ್ಟ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಿ ಎಂದು ಹೇಳಿದರು.
ಇದಕ್ಕೆ ಧ್ವನಿಗೂಡಿಸಿದ ವಿಧಾನಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ, ಕೆಲಸ ಮಾಡದೆ ಬಿಲ್ ಪಡೆದಿದ್ದಾರೆ, ಬಾಕಿ ಉಳಿದಿರುವ ಬಿಲ್ ಕೊಡಬಾರದು. ಗುತ್ತಿಗೆದಾರರು ಎಷ್ಟೇ ಪ್ರಭಾವಿ ಇರಲೀ, ಅವರನ್ನು ಕಪ್ಪು ಪಟ್ಟಿಗೆ ಸೇರಿಸಬೇಕೆಂದು ಸಚಿವರನ್ನು ಒತ್ತಾಯಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

