ಚಿಕ್ಕಮಗಳೂರು

ಭವಿಷ್ಯಕ್ಕಾಗಿ ವ್ಯಾಸಂಗಕ್ಕೆ ಆದ್ಯತೆ ನೀಡಿ

Published On :

ಚಿಕ್ಕಮಗಳೂರು: ಇತ್ತೀಚಿನ ವರ್ಷಗಳಲ್ಲಿ ಶಿಕ್ಷಣದಲ್ಲಿ ಬಹಳಷ್ಟು ಪೈಪೋಟಿ ನಡೆಯುತ್ತಿದೆ. ವಿದ್ಯಾರ್ಥಿಗಳು ತಮ್ಮ ಮುಂದಿನ ಭವಿಷ್ಯ ರೂಪಿಸಿಕೊಳ್ಳಲು ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಎಲ್.ಬಿ.ಎಸ್. ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಜು ಹೇಳಿದ್ದಾರೆ.
ನಗರದ ಎಲ್.ಬಿ.ಎಸ್. ಸರ್ಕಾರಿ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನಲ್ಲಿ ಶುಕ್ರವಾರ ನಡೆದ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಆಧುನಿಕ ಕಾಲಕ್ಕೆ ತಕ್ಕಂತೆ ಶಿಕ್ಷಣದಲ್ಲಿ ಪೈಪೋಟಿ ನೀಡಬೇಕು ಎಂದು ಕರೆ ನೀಡಿದರು.
ಕಲಿಕೆಗೆ ಆಸಕ್ತಿ ವಹಿಸಿ: ಒಂದು ದೇಶ ಅಭಿವೃದ್ಧಿಹೊಂದಬೇಕಾದರೆ, ಆ ದೇಶ ಶೈಕ್ಷಣಿಕವಾಗಿ ಮುಂದುವರೆದಿರಬೇಕು. ಆಗ ಮಾತ್ರ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಸಿಗಲು ಸಾಧ್ಯ. ಈ ಕಾರಣದಿಂದಲೇ ಸರ್ಕಾರ ಶಿಕ್ಷಣಕ್ಕೆ ಬೇಕಾದ ಎಲ್ಲಾ ರೀತಿಯ ನೆರವು ನೀಡುತ್ತಿದೆ. ಈ ಸವಲತ್ತುಗಳನ್ನು ವಿದ್ಯಾರ್ಥಿಗಳು ಸಮರ್ಪಕ ರೀತಿಯಲ್ಲಿ ಬಳಕೆ ಮಾಡಿಕೊಳ್ಳಬೇಕು. ವಿದ್ಯಾರ್ಥಿ ಜೀವನದಲ್ಲಿ ಸಿಗುವ ಕಾಲಾವಕಾಶವನ್ನು ವ್ಯರ್ಥ ಮಾಡದೆ ಆಸಕ್ತಿಯಿಂದ ಕಲಿಯಬೇಕು ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ನಗರಸಭಾ ಸದಸ್ಯ ಎಲ್.ಕೆ. ರಮೇಶ್, ವಿದ್ಯಾರ್ಥಿಗಳು ಶಾಲಾ ಕಾಲೇಜು ದಿನಗಳಲ್ಲಿ ವಿದ್ಯಾಭ್ಯಾಸದ ಜೊತೆಗೆ ಕ್ರೀಡೆ, ಕಲೆ, ಸಾಹಿತ್ಯಕ್ಕೆ ಹೆಚ್ಚಿನ ಆದ್ಯತೆ ನೀಡಿ, ಆ ಕ್ಷೇತ್ರಗಳಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡು ಶಾಲೆಗೂ ತಂದೆ ತಾಯಿಗಳಿಗೂ ಕೀರ್ತಿ ತರಬೇಕೆಂದರು.
ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಚ್.ಎನ್. ರುದ್ರಸ್ವಾಮಿ ಮಾತನಾಡಿ, ವಿದ್ಯಾರ್ಥಿಗಳು ಪರೀಕ್ಷೆ ಬಂದಾಗ ಪರಿತಪಿಸದೆ ಸತತ ಅಭ್ಯಾಸದಿಂದ ತಮ್ಮ ಗುರಿ ಮುಟ್ಟಬೇಕು ಎಂದು ಹೇಳಿದರು.  
ಸರ್ಕಾರಿ ಶಾಲೆಗಳಲ್ಲೂ ಸಹ ಖಾಸಗಿ ಶಾಲೆಗಳಂತೆ ಆಧುನಿಕ ಅವಿಷ್ಕಾರಗಳನ್ನು ಅಳವಡಿಸಿ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಹಿಂದೆ ಉಪಾಧ್ಯಾಯ ವೃತ್ತಿ ಅತ್ಯಂತ ಶ್ರೇಷ್ಠವಾಗಿತ್ತು. ಇಂದು ಸವಾಲಾಗಿದೆ. ಬದಲಾವಣೆಯಾಗುತ್ತಿರುವ ಜಗತ್ತಿನಲ್ಲಿ ಶಿಕ್ಷಣಕ್ಕೂ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದರು.
ತಾಪಂ ಉಪಾಧ್ಯಕ್ಷ ಪುಟ್ಟೇಗೌಡ ಮಾತನಾಡಿ, ಜ್ಞಾನಿಯಾದವನಿಗೆ ಜಗತ್ತಿನಾದ್ಯಂತ ಗೌರವವಿರುತ್ತದೆ. ಜೀವನದಲ್ಲಿ ಪಾಂಡಿತ್ಯವನ್ನು ಸಂಪಾದಿಸಿ ತಮ್ಮ ಜೀವನ ರೂಪಿಸಿಕೊಳ್ಳಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ. ಸದಸ್ಯರಾದ ಕುಮಾರ್, ನರಸಿಂಹಮೂರ್ತಿ ಉಪಸ್ಥಿತರಿದ್ದರು. ಪ್ರಾಚಾರ್ಯ ಶಿವಮೂರ್ತಿ ಸ್ವಾಗತಿಸಿದರು, ಚಾಂದಿನಿ ಕಾರ್ಯಕ್ರಮ ನಿರೂಪಿಸಿದರು, ಚೆಲುವಯ್ಯ ವಂದಿಸಿದರು.


ಇಂದು ತರಬೇತಿ
ಜಿಲ್ಲಾ ತರಬೇತಿ ಸಂಸ್ಥೆ ವತಿಯಿಂದ ಜಿಲ್ಲೆಯ ಸಾರ್ವಜನಿಕ ಮಾಹಿತಿ ಅಧಿಕಾರಿ, ಸಹಾಯಕ ಸಾರ್ವಜನಿಕ ಮಾಹಿತಿ ಅಧಿಕಾರಿ ಮತ್ತು ಮೇಲ್ಮನವಿ ಅಧಿಕಾರಿಗಳಿಗೆ ಮಾಹಿತಿ ಹಕ್ಕು ಅಧಿನಿಯಮ- 2005 ಕುರಿತು ಜ.4ರಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ತರಬೇತಿಯ ಉದ್ಘಾಟನೆಯನ್ನು ಶುಕ್ರವಾರ ಬೆಳಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿ ಬಿ.ಎಸ್. ಶೇಖರಪ್ಪ ನೆರವೇರಿಸಲಿದ್ದಾರೆ.
ಯುವಕ ನಾಪತ್ತೆ
ಚಿಕ್ಕಮಗಳೂರು: ನಗರದ ಹೌಸಿಂಗ್ ಬೋರ್ಡ್ನ ಬಾಲಕರ ಬಾಲಮಂದಿರದಿಂದ ಸಂಜಯ್ (15) ಎಂಬ ಯುವಕ ನಾಪತ್ತೆಯಾಗಿದ್ದಾನೆ. ಡಿ.22ರಂದು ಬಾಲಮಂದಿರದ ಸಮಾಲೋಚಕರು ಆಟಕ್ಕೆಂದು ಬಾಲಮಂದಿರದಿಂದ ಹೊರಗಡೆ ಕರೆದುಕೊಂಡು ಬಂದಾಗ ಆತ ತಪ್ಪಿಸಿಕೊಂಡು ಕಾಣೆಯಾಗಿದ್ದಾನೆ. ಇವನ ಮಾಹಿತಿ ದೊರೆತಲ್ಲಿ ಚಿಕ್ಕಮಗಳೂರು ಗ್ರಾಮಾಂತರ ಠಾಣೆಗೆ ಮಾಹಿತಿ ನೀಡುವಂತೆ ಪೊಲೀಸ್ ಉಪ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.