ಚಿಕ್ಕಮಗಳೂರು

ಭ್ರಷ್ಟರನ್ನು ಸಂಪುಟದಿಂದ ಕೈಬಿಡಿ

Published On :

ಕ.ಪ್ರ.ವಾರ್ತೆ, ಚಿಕ್ಕಮಗಳೂರು, ಜ.6
ಭ್ರಷ್ಟ ಸಚಿವರನ್ನು ಸಂಪುಟದಿಂದ ಕೈಬಿಡುವಂತೆ ಆಗ್ರಹಿಸಿ ಜಿಲ್ಲಾ ಬಿಜೆಪಿ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿತು.
ಇಲ್ಲಿನ ಹಳೇ ತಾಲೂಕು ಕಚೇರಿಯಿಂದ ಮೆರವಣಿಗೆಯಲ್ಲಿ ಹೊರಟ ಪಕ್ಷದ ಕಾರ್ಯಕರ್ತರು, ಹನುಮಂತಪ್ಪ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಶಾಸಕ ಸಿ.ಟಿ. ರವಿ, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬಂದ ಸಮಯದಲ್ಲಿ ಸ್ವಾತಂತ್ರ ಹೋರಾಟಗಾರರಾದ ದೊರೆಸ್ವಾಮಿ ಅವರ ಮನೆಗೆ ಭೇಟಿ ನೀಡಿದ ಸಮಯದಲ್ಲಿ ಭ್ರಷ್ಟರಿಗೆ, ಕಳಂಕಿತರಿಗೆ ಸಚಿವ ಸಂಪುಟದಲ್ಲಿ ತಮ್ಮ ಅಧಿಕಾರಾವಧಿಯಲ್ಲಿ ಎಂತಹ ಸಂದರ್ಭದಲ್ಲೂ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದರು. ಆದರೆ, ಮುಖ್ಯಮಂತ್ರಿ ಅವರು ಅಧಿಕಾರಕ್ಕೆ ಬಂದ 6 ತಿಂಗಳಲ್ಲೆ ತಮ್ಮ ಮಾತಿಗೆ ತಪ್ಪಿ ಭ್ರಷ್ಟಾಚಾರದ ಆರೋಪ ಹೊತ್ತಿರುವ ಡಿ.ಕೆ. ಶಿವಕುಮಾರ್, ರೋಷನ್ ಬೇಗ್ ಅವರಿಗೆ ಸಂಪುಟದಲ್ಲಿ ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಆರೋಪಿಸಿದರು.
ಹಣ ಗಳಿಸುವ ಉದ್ದೇಶ: ಹಿಂದಿನ ಸರ್ಕಾರದ ಸಮಯದಲ್ಲಿ ಅಕ್ರಮ ಗಣಿಗಾರಿಕೆ ವಿರುದ್ಧ ಕಾಂಗ್ರೆಸ್ ಬೆಂಗಳೂರಿನಿಂದ ಬಳ್ಳಾರಿಯವರೆಗೆ ಪಾದಯಾತ್ರೆ ಕೈಗೊಂಡಿತ್ತು. ಅಕ್ರಮ ಗಣಿಗಾರಿಕೆಯ ಆರೋಪ ಹೊತ್ತಿರುವ ಸಂತೋಷ್ ಲಾಡ್ ಅವರನ್ನು ಸಂಪುಟದಿಂದ ಕೈಬಿಟ್ಟು ಡಿ.ಕೆ. ಶಿವಕುಮಾರ್ ಹಾಗೂ ರೋಷನ್ ಬೇಗ್ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಂಡಿರುವುದು ಕಳ್ಳರ ಕೈಗೆ ಖಜಾನೆಯ ಕೀಲಿ ಕೈ ನೀಡಿದಂತಾಗಿದೆ. ಸಂತೋಷ್ ಲಾಡ್ ಅವರಿಗಿಂತ ನೂರು ಪಟ್ಟು ಹೆಚ್ಚು ಭ್ರಷ್ಟಾಚಾರ, ಅಕ್ರಮ ಗಣಿಗಾರಿಕೆ, ಡಿನೋಟಿಫೀಕೇಶನ್, ವಕ್ಫ್ ಬೋರ್ಡ್ ಜಾಗವನ್ನು ಅಕ್ರಮವಾಗಿ ಗಳಿಸಿರುವ ಈ ಇಬ್ಬರು ಭ್ರಷ್ಟ ಸಚಿವರನ್ನು ಕಾಂಗ್ರೆಸ್ ಹೈಕಮಾಂಡ್ ಆದೇಶದಂತೆ ಸಚಿವ ಸಂಪುಟಕ್ಕೆ ಸೇರಿಸಿಕೊಂಡು ಈ ರಾಜ್ಯವನ್ನು ಕೊಳ್ಳೆ ಹೊಡೆದು ಮುಂಬರುವ ಲೋಕಸಭಾ ಚುನಾವಣೆಗೆ ಹಣ ಗಳಿಸುವ ಉದ್ದೇಶವೇ ಹೊರತು ಬೇರೆನು ಇಲ್ಲ. ಆದ್ದರಿಂದ ಕೂಡಲೇ ಈ ಇಬ್ಬರು ಭ್ರಷ್ಟ ಸಚಿವರನ್ನು ಸಚಿವ ಸಂಪುಟದಿಂದ ಕೈಬಿಡದಿದ್ದರೆ ಬಿಜೆಪಿ ರಾಜ್ಯಾದ್ಯಂತ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಿದೆ ಎಂದರು.
ನಗರ ಯುವ ಮೋರ್ಚಾ ಅಧ್ಯಕ್ಷ ಸಮೃದ್ ಪೈ ಮಾತನಾಡಿ,  ಭ್ರಷ್ಟಾಚಾರ, ಅಕ್ರಮ ಗಣಿಗಾರಿಕೆಯ ಆರೋಪಗಳ ಸರಮಾಲೆ ಹೊತ್ತಿರುವ ಇಬ್ಬರು ಭ್ರಷ್ಟ ಸಚಿವರನ್ನು ಕೂಡಲೇ ಸಂಪುಟದಿಂದ ಕೈಬಿಡಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ನಗರಾಧ್ಯಕ್ಷ ವರಸಿದ್ದಿ ವೇಣುಗೋಪಾಲ್, ಜಿಲ್ಲಾ ವಕ್ತಾರ ಎಚ್.ಡಿ. ತಮ್ಮಯ್ಯ, ಜಿಲ್ಲಾ ಉಪಾಧ್ಯಕ್ಷ ಕೋಟೆ ರಂಗನಾಥ್, ಜಿಲ್ಲಾ ಕಾರ್ಯದರ್ಶಿ ಟಿ. ರಾಜಶೇಖರ್, ನಗರಸಭಾ ಸದಸ್ಯರಾದ ಕೆಂಪನಹಳ್ಳಿ ಪುಷ್ಪರಾಜ್, ರವೀಂದ್ರ ಪ್ರಭು, ಎಲ್.ಕೆ. ರಮೇಶ್, ಭುಜೇಂದ್ರ ರಾಜ್ ಅರಸ್, ಸಿ.ಎಸ್. ರವಿ, ಖುರೇಷಿ, ಎಸ್.ಸಿ. ಮೋರ್ಚಾ ಜಿಲ್ಲಾಧ್ಯಕ್ಷ ವೆಂಕಟೇಶ್, ನಗರಸಭಾ ಸದಸ್ಯ ಪುಷ್ಪರಾಜ್, ರಾಜಪ್ಪ, ಬಿ.ವಿ. ಪುಟ್ಟೇಗೌಡ ಹಾಗೂ ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.