ಚಿಕ್ಕಮಗಳೂರು

ಅಡುಗೆ ಅನಿಲ ದರ ಹೆಚ್ಚಳ: ಖಂಡನೆ

Published On :

ಕ.ಪ್ರ.ವಾರ್ತೆ, ಚಿಕ್ಕಮಗಳೂರು, ಜ.8
ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾದ ನೇತೃತ್ವದಲ್ಲಿ ಬುಧವಾರ ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ ನಡೆಯಿತು.
ಇಲ್ಲಿನ ಹಳೇ ತಾಲೂಕು ಕಚೇರಿಯಿಂದ ಮೆರವಣಿಗೆಯಲ್ಲಿ ಹೊರಟ ಪಕ್ಷದ ಕಾರ್ಯಕರ್ತರು ಹನುಮಂತಪ್ಪ ವೃತ್ತದಲ್ಲಿ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.
ಖಾಲಿ ಸಿಲಿಂಡರ್, ಸೌದೆ, ಗ್ಯಾಸ್ ಸ್ಟೌವ್, ಅಕ್ಕಿ, ಬೇಯಿಸಿಲು ಪಾತ್ರೆ, ನೀರನ್ನು ಪ್ರತಿಭಟನೆಯ ಸಂದರ್ಭದಲ್ಲಿ ತಂದು, ಇಲ್ಲಿನ ಹನುಮಂತಪ್ಪ ವೃತ್ತದಲ್ಲಿ ಇಟ್ಟರು. ಬಳಿಕ ತಂದಿದ್ದ ಖಾಲಿ ಸಿಲಿಂಡರ್ ಪಕ್ಕದಲ್ಲಿಯೇ ಇಟ್ಟು, ಇಟ್ಟಿಗೆಯಿಂದ ಒಲೆ ಕಟ್ಟಿ, ಅದರ ಮೇಲೆ ಪಾತ್ರೆ ಇಟ್ಟು, ಸೌದೆ ಹಾಕಿ ಬೆಂಕಿ ಹಚ್ಚಿ ಒಲೆ ಉರಿಸಿ ಪ್ರತಿಭಟನೆ ನಡೆಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಶಾಸಕ ಸಿ.ಟಿ. ರವಿ, ಕೇಂದ್ರದಲ್ಲಿ ಬಿಜೆಪಿ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ 225ಕ್ಕೆ ಸಿಗುತ್ತಿದ್ದ ಅಡುಗೆ ಅನಿಲ ಇದೀಗ 1230ಕ್ಕೆ ಏರಿದೆ. ಒಂದು ರುಪಾಯಿ ಕೆಜಿಗೆ ಅಕ್ಕಿ ಕೊಟ್ಟು, ಇದರ ಬೆನ್ನಲ್ಲೆ ಅಡುಗೆ ಅನಿಲದ ಬೆಲೆ ಏರಿಸಿದೆ. ಯುಪಿಎ ಸರ್ಕಾರದ ಅವಧಿಯಲ್ಲಿ 23 ಬಾರಿ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿದೆ. ಜನರ ಕೋಟ್ಯಂತರ ರುಪಾಯಿ ಲೂಟಿ ಹೊಡೆಯುತ್ತಿರುವ ಕೇಂದ್ರ ಸರ್ಕಾರಕ್ಕೆ ಬೆಲೆ ನಿಯಂತ್ರಣ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿದರು.
ಯೋಜನೆ ರೂಪಿಸಿಲ್ಲ: ದೇಶದ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಕೇಂದ್ರ ಸರ್ಕಾರ ಸಾಲ ಪಡೆಯುತ್ತಿದೆ. ಆದರೆ, ಇಲ್ಲಿರುವ ಸಂಪನ್ಮೂಲವನ್ನು ಸರಿಯಾಗಿ ಬಳಕೆ ಮಾಡಿಕೊಳ್ಳದೆ, ಭ್ರಷ್ಟಾಚಾರದಲ್ಲಿ ತೊಡಗಿದ್ದರಿಂದ ದೇಶದ ಆರ್ಥಿಕ ಸ್ಥಿತಿ ಹದಗಟ್ಟಿದೆ. ದೇಶದಲ್ಲಿ ಶೇ. 80 ಮಂದಿ ನಿರುದ್ಯೋಗಿಗಳಿದ್ದಾರೆ, ಅವರ ಭವಿಷ್ಯಕ್ಕೆ ಯಾವುದೇ ಯೋಜನೆ ರೂಪಿಸಿಲ್ಲ ಎಂದು ಟೀಕಿಸಿದರು.
ದೇಶದಲ್ಲಿ ಎದುರಿರುವ ಸಮಸ್ಯೆಗಳು ಪರಿಹಾರವಾಗಬೇಕಾದರೆ, ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬೇಕು. ಅದುದರಿಂದ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರವನ್ನು ಜನರಿಗೆ ತಿಳಿಸುವ ಕೆಲಸವನ್ನು ಪಕ್ಷದ ಕಾರ್ಯಕರ್ತರು ಮಾಡಬೇಕು. ಅದುದ್ದರಿಂದ ಮನೆ ಮನೆಗಳಿಗೆ ತೆರಳಿ ಈ ಕುರಿತು ಅರಿವು ಮೂಡಿಸಬೇಕು ಎಂದು ಕರೆ ನೀಡಿದರು.
ಚೆಲ್ಲಾಟ: ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಆಶಾ ಮೋಹನ್ ಮಾತನಾಡಿ, ಅಗತ್ಯ ವಸ್ತುಗಳ ಬೆಲೆ ಏರಿಸುವ ಮೂಲಕ ಕೇಂದ್ರ ಸರ್ಕಾರ ಜನರೊಂದಿಗೆ ಚೆಲ್ಲಾಟವಾಡುತ್ತಿದೆ. ಕಾಂಗ್ರೆಸ್ ಪಕ್ಷವನ್ನು ಮುಂದಿನ ಚುನಾವಣೆಯಲ್ಲಿ ಕಿತ್ತು ಹಾಕುವ ಮೂಲಕ ಮಹಿಳೆಯರು ತಕ್ಕ ಪಾಠ ಕಲಿಸಬೇಕು ಎಂದರು.
ಪ್ರತಿಭಟನೆಯಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾ ಕಾರ್ಯದರ್ಶಿ ವೀಣಾ, ನಗರಸಭಾ ಸದಸ್ಯೆ ಲೀಲಾ, ಯಮುನಾ ಚನ್ನಬಸಪ್ಪಶೆಟ್ಟಿ, ಶಾಮಲಾ, ಶಾರದ, ಬಿಜೆಪಿ ಜಿಲ್ಲಾ ವಕ್ತಾರ ತಮ್ಮಯ್ಯ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.